ಗುರುವಾರ , ಮೇ 6, 2021
23 °C
ಕೋವಿಡ್ 19 ನಿಯಂತ್ರಣಕ್ಕೆ ಮಾರ್ಗಸೂಚಿ ಪಾಲಿಸದಿದ್ದರೆ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

ಹಬ್ಬದ ಸಂದರ್ಭದಲ್ಲಿ ಸಭೆಗೆ ನಿರ್ಬಂಧ: ಮುಲ್ಲೈ ಮುಗಿಲನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಕೋವಿಡ್– 19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯುವ ಸಲುವಾಗಿ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೈಡೇ ಇತ್ಯಾದಿ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸದಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳು, ಮೈದಾನ, ಉದ್ಯಾನಗಳು, ಮಾರುಕಟ್ಟೆಗಳು, ಧಾರ್ಮಿಕ ಪ್ರದೇಶಗಳಿಗೆ ಈ ಆದೇಶ ಅನ್ವಯವಾಗಲಿದೆ.

ಜನಮಿತಿಗೆ ಸೂಚನೆ:

ಇದೇವೇಳೆ, ಇತರ ದಿನಗಳಲ್ಲಿ ನಡೆಯುವ ವಿವಿಧ ಸಮಾರಂಭಗಳು ಹಾಗೂ ಆಚರಣೆಗಳಲ್ಲಿ ಜನರ ಮಿತಿಯನ್ನು ವಿಧಿಸಲಾಗಿದೆ. ಮದುವೆಗೆ ತೆರೆದ ಪ್ರದೇಶಗಳಲ್ಲಿ 500 ಜನ, ಸಭಾಂಗಣದಂಥ ಮುಚ್ಚಿದ ಪ್ರದೇಶಗಳಲ್ಲಿ 200, ಜನ್ಮದಿನ ಹಾಗೂ ಇತರ ಆಚರಣೆಗಳಿಗೆ ತೆರೆದ ಪ್ರದೇಶಗಳಲ್ಲಿ 100 ಜನ, ಸಭಾಂಗಣದಲ್ಲಿ 50 ಜನ ಸೇರಲು ಅವಕಾಶವಿದೆ.

ನಿಧನ, ಶವಸಂಸ್ಕಾರಕ್ಕೆ ತೆರೆದ ಪ್ರದೇಶಗಳಲ್ಲಿ 100 ಜನ, ಸಭಾಂಗಣದಲ್ಲಿ 50, ಅಂತ್ಯಕ್ರಿಯೆಗೆ 50, ಧಾರ್ಮಿಕ ಆಚರಣೆಗಳ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500, ರಾಜಕೀಯ ಸಮಾರಂಭಗಳಿಗೆ ತೆರೆದ ಪ್ರದೇಶಗಳಲ್ಲಿ 500 ಜನರು ಸೇರಲು ಅವಕಾಶವಿದೆ ಎಂದು ತಿಳಿಸಿದ್ದಾರೆ.

‘ರಾಜ್ಯದಲ್ಲಿ 15 ದಿನಗಳಿಂದ ಕೋವಿಡ್ ಪ್ರಕರಣಗಳು ಏರಿಕೆ ಕಾಣುತ್ತಿವೆ. ಹಬ್ಬಗಳ ಸಂದರ್ಭದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದರೆ ಸೋಂಕು ಹರಡುವ ಆತಂಕವಿದೆ. ಅಲ್ಲದೇ ಸೋಂಕಿನ ನಿಯಂತ್ರಣದಲ್ಲಿ ಈವರೆಗೆ ಆಗಿರುವ ಸಾಧನೆಗೆ ಹಿನ್ನಡೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಈ ಎಲ್ಲ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸದಂತೆ ಸರ್ಕಾರ ಆದೇಶಿಸಿದೆ’ ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ಹಾಗೂ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 2020 ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಅಗತ್ಯ ಸಿದ್ಧತೆಗೆ ಸೂಚನೆ:

ಸೋಂಕನ್ನು ನಿಯಂತ್ರಿಸಲು ಸೋಂಕಿತರ ಸಂಪರ್ಕ ಪತ್ತೆಹಚ್ಚುವುದು, ಹೋಮ್ ಕ್ವಾರೆಂಟೈನ್, ಹೋಮ್ ಐಸೋಲೇಷನ್, ಕೋವಿಡ್ ಪರೀಕ್ಷೆ ಮುಂತಾದವುಗಳನ್ನು ಪರಿಣಾಮಕಾರಿಯಾಗಿ ಮಾಡಬೇಕು. ಮುನ್ನೆಚ್ಚರಿಕೆಯಾಗಿ ಹೆಚ್ಚು ಮಂದಿ ಸೋಂಕಿತರ ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಈ ಬಗ್ಗೆ ಕೈಗೊಂಡ ಕ್ರಮಗಳ ಕುರಿತು ಜಿಲ್ಲಾಡಳಿತಕ್ಕೆ ಕಾಲಕಾಲಕ್ಕೆ ವರದಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು