ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಪೌಷ್ಟಿಕ ಆಹಾರದಿಂದ ಸದೃಢ ಭಾರತ: ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ‘ಸದೃಢ ಭಾರತದ ನಿರ್ಮಾಣಕ್ಕೆ ಪೌಷ್ಟಿಕ ಆಹಾರ, ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಂತ ಮಗುವಿನ ಅವಶ್ಯಕತೆಯಿದೆ. ಅಪೌಷ್ಟಿಕತೆಯನ್ನು ಹೋಗಲಾಡಿಸಲು ಶ್ರಮಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಕಾರ್ಯ ಅತ್ಯಂತ ಶ್ಲಾಘನೀಯ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುರುವಾರ ‘ಶಿಶು ಪಾಲನಾ ಕೇಂದ್ರ ಹಾಗೂ ಮಹಿಳೆಯರ ವಿಶ್ರಾಂತಿ ಕೊಠಡಿ ಉದ್ಘಾಟನೆ’, ‘ಪೌಷ್ಟಿಕ ಆಹಾರ ಹಾಗೂ ಮಾತೃವಂದನಾ ಸಪ್ತಾಹ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆಯುಷ್ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

‘ಜಿಲ್ಲಾ ಪಂಚಾಯಿತಿಯ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮಕ್ಕಳಿಗೆ ಸುಸಜ್ಜಿತ, ಮಾದರಿ ಶಿಶು ಪಾಲನಾ ಹಾಗೂ ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದೆ. ಮುಂಬರುವ ದಿನಗಳಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಇಂತಹ ಕೊಠಡಿಗಳನ್ನು ನಿರ್ಮಿಸಲು ಆದ್ಯತೆ ನೀಡಲಾಗುವುದು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಿಯಾಂಗಾ.ಎಂ ಮಾತನಾಡಿ, ‘ಮಹಿಳಾ ಅಧಿಕಾರಿ ಹಾಗೂ ಸಿಬ್ಬಂದಿಯ ಮಾನಸಿಕ ಒತ್ತಡಗಳ ನಿವಾರಣೆಗಾಗಿ ಶಿಶು ಪಾಲನೆ, ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಿಸಲಾಗಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಮೂಲ ಸೌಕರ್ಯ ಮತ್ತು ಪೌಷ್ಟಿಕ ಆಹಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. 15ನೇ ಹಣಕಾಸಿನ ಅನಿರ್ಬಂಧಿತ  ಅನುದಾನದಡಿ ಶೇ 45ರಿಂದ 50ರಷ್ಟು ಹಣವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯಗಳಿಗೆ ಮೀಸಲಿರಿಸಿದೆ. ಜಿಲ್ಲೆಯ ಎಲ್ಲ ಅಂಗನವಾಡಿಗಳನ್ನು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಮೂಲಸೌಕರ್ಯಗಳ ಪಟ್ಟಿ ಮಾಡಿಕೊಳ್ಳಲಾಗಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ 20 ಅಂಗನವಾಡಿ ಕೇಂದ್ರಗಳ ನಿರ್ಮಾಣ ಪ್ರಗತಿಯಲ್ಲಿದೆ. ಬೇರೆ ಕಡೆಗಳಿಂದ ವಿನ್ಯಾಸಕಾರರನ್ನು ಕರೆಸಿ ಮಾದರಿ ಕೇಂದ್ರಗಳನ್ನಾಗಿಸಲು ಶ್ರಮಿಸಲಾಗುತ್ತಿದೆ’ ಎಂದರು.

ಎರಡನೇ ಹಂತಕ್ಕೆ ಸಿದ್ಧತೆ:

‘ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಮೊದಲ ಹಂತದ ಆರೋಗ್ಯ ತಪಾಸಣೆ ಮತ್ತು ಲಸಿಕೆ ವಿತರಣೆ ಮಾಡಲಾಗಿದೆ. ಸೆಪ್ಟೆಂಬರ್ ಎರಡನೇ ವಾರದಿಂದ ಎರಡನೇ ಹಂತವನ್ನು ಆರಂಭಿಸಲಾಗುತ್ತಿದೆ’ ಎಂದು ಎಂ.ಪ್ರಿಯಾಂಗಾ ಹೇಳಿದರು.

‘ಈ ಅಭಿಯಾನದಡಿ ಮಕ್ಕಳ ಹಾಜರಾತಿ ಮೌಲ್ಯಮಾಪನ ಮಾಡಿ ವರದಿ ಸಿದ್ಧಪಡಿಸಲಾಗುತ್ತಿದೆ. ಇದನ್ನು ಆಧರಿಸಿ ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರದಲ್ಲಿಯೇ ಪೌಷ್ಟಿಕ ಆಹಾರ ವಿತರಿಸಲಾಗುತ್ತದೆ. ಇದಕ್ಕೆ ಪೂರಕವಾಗಿ ಶಿರಸಿಯಲ್ಲಿ ಪ್ರಯೋಗ ಮಾಡಲಾಗಿದ್ದು, ಎಲ್ಲ ಅಂಗನವಾಡಿಗಳು ಮಾದರಿಯನ್ನಾಗಿ ಪರಿಗಣಿಸುವಂತೆ ವೇಳಾಪಟ್ಟಿ ತಯಾರಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಪೌಷ್ಟಿಕ ಆಹಾರ ಪ್ರದರ್ಶನ, ಆಯುರ್ವೇದ ಔಷಧ ವಿತರಣೆ ಮತ್ತು ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಸಿ.ಕೆ.ಶ್ಯಾಮಲಾ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಲಲಿತಾ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರೂಪಣಾಧಿಕಾರಿ ಜಿ.ಪದ್ಮಾವತಿ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸಿ.ಕೆ.ರವಿಕುಮಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು