ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

7
ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಸ್ಯೆ ಬಗೆಹರಿಸಲು ಒತ್ತಾಯ; ಶಾಸಕರ ವಿರುದ್ಧ ಆಕ್ಷೇಪ

ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

Published:
Updated:
Deccan Herald

ಶಿರಸಿ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿ, ವಿದ್ಯಾರ್ಥಿಗಳು ಶುಕ್ರವಾರ ತರಗತಿ ಬಹಿಷ್ಕರಿಸಿ ಪ್ರತಿಭಟಿಸಿದರು. ಪ್ರಾಚಾರ್ಯರ ವಿರುದ್ಧ ಧಿಕ್ಕಾರ ಕೂಗಿದರು.

ಕಾಲೇಜಿನಲ್ಲಿ ಸರಿಯಾಗಿ ತರಗತಿಗಳು ನಡೆಯುತ್ತಿಲ್ಲ. ಅತಿಥಿ ಉಪನ್ಯಾಸಕರ ಕೊರತೆ ಎದುರಾಗಿದೆ. ಸೋರುತ್ತಿರುವ ಕೊಠಡಿಗಳಲ್ಲಿ ಕುಳಿತು ಪಾಠ ಕೇಳಲು ಆಗುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. 3200 ವಿದ್ಯಾರ್ಥಿಗಳು ಇದ್ದರೂ, ಕಾಲೇಜು ಮೂಲ ಸೌಕರ್ಯಗಳಿಂದ ವಂಚಿತವಾಗಿದೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಮಸ್ಯೆ ನಿವಾರಣೆಗೆ ಪ್ರಯತ್ನಿಸುತ್ತಿಲ್ಲ. ಇಡೀ ಕಟ್ಟಡ ಮಳೆಯಲ್ಲಿ ಸೋರುತ್ತದೆ. ತಕ್ಷಣ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿದರು.

ಕಾಲೇಜಿಗೆ ಭೇಟಿ:  ಇಲ್ಲಿನ ಕಾಂಗ್ರೆಸ್‌ ಕಾರ್ಯಾಲಯಕ್ಕೆ ಬಂದು ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಮನವಿ ನೀಡಿರುವ ಕಾರಣ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಅವರು ಕಾಲೇಜಿಗೆ ಭೇಟಿ ನೀಡಿ, ಪರಿಶೀಲಿಸಿದರು. ಪ್ರಾಚಾರ್ಯ ಜನಾರ್ದನ ಭಟ್ ಅವರೊಂದಿಗೆ ಚರ್ಚಿಸಿದ ಅವರು, ನಂತರ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ವಿದ್ಯಾರ್ಥಿಗಳು ಕಚೇರಿಗೆ ಬಂದು ಮನವಿ ನೀಡಿದ ಕಾರಣ ಕಾಲೇಜಿಗೆ ಭೇಟಿ ನೀಡಿ, ಪರಿಶೀಲಿಸಿದ್ದೇನೆ. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ತಿಂಗಳಿಗೊಮ್ಮೆಯಾದರೂ ಸಭೆ ನಡೆಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಬೇಕು. ಶೈಕ್ಷಣಿಕವಾಗಿ ಉನ್ನತ ಮಟ್ಟದಲ್ಲಿರುವ ಶಿರಸಿಗೆ ಇದು ಶೋಭೆಯಲ್ಲ. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಯ ಮೇಲೆ ಕೆಟ್ಟ ಪರಿಣಾಮ ಬೀರಲಿದೆ’ ಎಂದರು.

ನಗರಸಭೆ ಅಧ್ಯಕ್ಷ ಪ್ರದೀಪ ಶೆಟ್ಟಿ, ಸದಸ್ಯ ಫ್ರಾನ್ಸಿಸ್ ನರೋನ್ಹಾ, ಪ್ರಮುಖರಾದ ಎಸ್.ಕೆ.ಭಾಗವತ, ಸಂತೋಷ ಶೆಟ್ಟಿ, ದೀಪಕ ದೊಡ್ಡೂರ, ಶೈಲೇಶ ಜೋಗಳೇಕರ, ಪರಮಾನಂದ ಹೆಗಡೆ ಇದ್ದರು.
 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !