ಬುಧವಾರ, ನವೆಂಬರ್ 30, 2022
17 °C

ಕೆಎಫ್‍ಡಿ: ಶಾಶ್ವತ ಪರಿಹಾರಕ್ಕೆ ರಾಘವೇಶ್ವರ ಭಾರತೀ ಸ್ವಾಮೀಜಿ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ವಿಶ್ವದಲ್ಲಿ ಕೊರೊನಾ ವೈರಸ್‌ನ ಅಟ್ಟಹಾಸದ ನಡುವೆಯೇ ರಾಜ್ಯದ ಮಲೆನಾಡು ಭಾಗದಲ್ಲಿ ಹಾಗೂ ನೆರೆ ರಾಜ್ಯಗಳ ಕೆಲವೆಡೆ ಮಂಗನ ಕಾಯಿಲೆ (ಕೆ.ಎಫ್‍.ಡಿ) ವ್ಯಾಪಕವಾಗಿ ಹರಡಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಒತ್ತಾಯಿಸಿದ್ದಾರೆ.

‘ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ, ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ, ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ, ಕೊಪ್ಪ ತಾಲ್ಲೂಕುಗಳಲ್ಲಿ 250ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದೆ. ಮೂವರು ಈಗಾಗಲೇ ಮೃತಪಟ್ಟಿದ್ದಾರೆ. ಆರು ದಶಕಗಳಿಂದ ಈ ಭಾಗದ ಜನರಿಗೆ ದುಃಸ್ವಪ್ನವಾಗಿ ಕಾಡುತ್ತಿರುವ ಈ ವೈರಸ್ ಸೋಂಕು, ಮೈಸೂರು, ಚಾಮರಾಜನಗರ ಸೇರಿದಂತೆ ಇದೀಗ ಇತರ ಪ್ರದೇಶಗಳಿಗೂ ಹಬ್ಬುತ್ತಿರುವುದು ಆತಂಕಕಾರಿ’ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

‘ಸರ್ಕಾರ ಕೆ.ಎಫ್‍.ಡಿ ಸೋಂಕಿತರಿಗೆ ಉಚಿತ ಚಿಕಿತ್ಸೆಯ ಭರವಸೆ ನೀಡಿದೆ. ಆದರೂ ಕಳೆದ ವರ್ಷ ನೀಡಿದ ಚಿಕಿತ್ಸೆಯ ಬಿಲ್ ಬಾಕಿ ಇದೆ. ಹಾಗಾಗಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುತ್ತಿವೆ. ಹಾಗಾಗಿ ಸರ್ಕಾರವು ತಕ್ಷಣ ನೆರವಿಗೆ ಬರಬೇಕು’ ಎಂದು ಒತ್ತಾಯಿಸಿದ್ದಾರೆ.

‘ವರ್ಷದಿಂದ ವರ್ಷಕ್ಕೆ ಸಮಸ್ಯೆಯ ತೀವ್ರತೆ ಹೆಚ್ಚುತ್ತಿದೆ. ಮಠದಿಂದ ಕಳೆದ ವರ್ಷ ಸಮಸ್ಯಾತ್ಮಕ ಪ್ರದೇಶಗಳಲ್ಲಿ ಸುಮಾರು ಮೂರು ಸಾವಿರ ಮಂದಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಗವ್ಯ ಔಷಧಿಯನ್ನು ನೀಡಲಾಗಿದೆ. ಕೆ.ಎಫ್‍.ಡಿ ಸಂಬಂಧ ಸಿದ್ದಾಪುರ ಬಳಿಯ ಗೋಸ್ವರ್ಗದಲ್ಲಿ ನಿರ್ಮಾಣ ಹಂತದಲ್ಲಿರುವ ಗವ್ಯ ಸಂಶೋಧನಾ ಕೇಂದ್ರದಲ್ಲಿ ಆಳವಾದ ಸಂಶೋಧನೆಗೆ ಮಠದ ಸಂಶೋಧನಾ ವಿಭಾಗ ಸಿದ್ಧವಿದೆ. ಇದಕ್ಕೆ ಅಗತ್ಯ ಸಂಪನ್ಮೂಲ ಹಾಗೂ ತಂತ್ರಜ್ಞಾನದ ನೆರವನ್ನು ಸರ್ಕಾರ ಕಲ್ಪಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು