ಭಾನುವಾರ, ನವೆಂಬರ್ 17, 2019
28 °C

ಎನ್.ಪಿ.ಎಸ್ ರದ್ದು ಪಡಿಸಲು ಆಗ್ರಹಿಸಿ ಪ್ರತಿಭಟನೆ

Published:
Updated:
Prajavani

ಕಾರವಾರ: ಎನ್.ಪಿ.ಎಸ್ ರದ್ದುಗೊಳಿಸಿ ಹಳೆಯ ಪಿಂಚಣಿ ಪದ್ಧತಿಯನ್ನು ಮುಂದುವರಿಸುವುದು, ಕಾಲ್ಪನಿಕ ವೇತನ ಬಡ್ತಿ ಜಾರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ತಹಶೀಲ್ದಾರ್ ಕಚೇರಿ ಎದುರು ಸೇರಿದ ಪದಾಧಿಕಾರಿಗಳು ಮತ್ತು ಸದಸ್ಯರು, ತೋಳಿಗೆ ಕಪ್ಪು ಪಟ್ಟಿ ಧರಿಸಿದ್ದರು. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆಗಳನ್ನು ಕೂಗಿದರು.

‘ಶಿಕ್ಷಕ ಮತ್ತು ಮಕ್ಕಳ ಅನುಪಾತ 1:50 ಜಾರಿ, ‘ಜ್ಯೋತಿ ಸಂಜೀವಿನಿ’ ಯೋಜನೆಯನ್ನು ಅನುದಾನಿತ ಶಾಲಾ ಸಿಬ್ಬಂದಿಗೂ ಜಾರಿ ಮಾಡುವುದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. 1995ರ ನಂತರ ಪ್ರಾರಂಭವಾದ ಶಾಲೆಗಳಿಗೆ ಅನುದಾನ ನೀಡಬೇಕು‌’ ಎಂದು ಆಗ್ರಹಿಸಲಾಯಿತು. ಬಳಿಕ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.

ವಿವಿಧ ಹಂತಗಳಲ್ಲಿ ನಡೆಯಲಿರುವ ಈ ಪ್ರತಿಭಟನೆಯಲ್ಲಿ ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಿದ್ದಾರೆ. ನ.9ರಂದು ಕಪ್ಪು ಪಟ್ಟಿ ಧರಿಸಿ ಶಾಲೆಗಳಲ್ಲಿ ಪ್ರತಿಭಟನೆ ಮಾಡುವುದು, ನ.16ರಂದು ಜಿಲ್ಲಾಧಿಕಾರಿ ಕಚೇರಿ ಸಮೀಪ ಧರಣಿ ಮಾಡುವುದು ಹಾಗೂ ನ.30ರಂದು ಬೆಳಗಾವಿ ವಿಭಾಗ ಮಟ್ಟದಲ್ಲಿ ದೊಡ್ಡಮಟ್ಟದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಂಘದ ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೈ ರಂಗನಾಥ, ಸಂಚಾಲಕ ಪ್ರಕಾಶ ನಾಯ್ಕ, ಪ್ರಧಾನ ಕಾರ್ಯದರ್ಶಿ ಆನಂದ ಘಟಕಾಂಬಳೆ, ಸಹ ಕಾರ್ಯದರ್ಶಿ ಸಂಜಯ ನಾಯ್ಕ, ವಿವಿಧ ಶಾಲೆಗಳ ಶಿಕ್ಷಕರು ಇದ್ದರು.

ಪ್ರತಿಕ್ರಿಯಿಸಿ (+)