ಶುಕ್ರವಾರ, ಫೆಬ್ರವರಿ 26, 2021
19 °C

ಕಾರವಾರ: ಹಳೆಯ ಪಿಂಚಣಿ ಯೋಜನೆ ಮುಂದುವರಿಸಲು ಶಿಕ್ಷಕರ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ‘ಪದವೀಧರ ಶಿಕ್ಷಕರು’ ಎಂದು ಪರಿಗಣಿಸಿ ವೇತನ ಶ್ರೇಣಿ ಬದಲಾಯಿಸಬೇಕು. ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆಯದನ್ನೇ ಮುಂದುವರಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ನೂರಾರು ಶಿಕ್ಷಕರು ಪ್ರತಿಭಟನೆ ಹಮ್ಮಿಕೊಂಡರು.

ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದ ಶಿಕ್ಷಕರು, ಸುಭಾಸ್ ವೃತ್ತ, ಸವಿತಾ ವೃತ್ತ, ಕೋಡಿಬಾಗ ರಸ್ತೆ, ಪಿಕಳೆ ರಸ್ತೆ ಮೂಲಕ ಸಾಗಿ ಬಂದು ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದರು. 

ಸರ್ಕಾರವು ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಬಹಿಷ್ಕರಿಸಿ ಸೆ.5ರಂದು ‘ವಿಧಾನ ಸೌಧ ಚಲೋ’ ಕಾರ್ಯಕ್ರಮ ಸಂಘಟಿಸಲಾಗುವುದು ಎಂದು ಶಿಕ್ಷಕರು ಎಚ್ಚರಿಕೆ ನೀಡಿದರು. ಇದೇವೇಳೆ, ತಮ್ಮ ಮನವಿಯನ್ನು ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ್ ಅವರಿಗೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಆನಂದು ಗಾಂವಕರ್, ‘ಮೂರು ವರ್ಷಗಳಿಂದ ಬಾಕಿಯಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಈಗ ಆರಂಭವಾಗಿದೆ. ಹಾಗಾಗಿ ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕು. ಇದರಿಂದ ನೂರಾರು ಶಿಕ್ಷಕರಿಗೆ ಅನುಕೂಲವಾಗಲಿದೆ. ಇದರೊಂದಿಗೆ, ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿದರು. 

‘ಶಿಕ್ಷಕರ ಹೆಚ್ಚುವರಿ ಪ್ರಕ್ರಿಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಬೇಕು. ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅನುಪಾತ ಗುರುತಿಸುವಾಗ ಮುಖ್ಯ ಶಿಕ್ಷಕ, ದೈಹಿಕ ಶಿಕ್ಷಣ ಶಿಕ್ಷರನ್ನು ಹೊರತಾಗಿರಬೇಕು’ ಎಂದು ಮನವಿ ಮಾಡಿದರು. 

‘ಆರನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸಿನ ಪ್ರಕಾರ ಮುಖ್ಯ ಶಿಕ್ಷಕರಿಗೆ ಬಡ್ತಿ ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಲಾಖೆಯ ಉಪ ನಿರ್ದೇಶಕರ ಹುದ್ದೆಯವರೆಗೂ ಬಡ್ತಿ ನೀಡಬೇಕು. ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಅವಧಿಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಮತ್ತು ಇತರ ಎಲ್ಲ ಸೇವಾ ಸೌಲಭ್ಯಗಳನ್ನು ನೀಡಬೇಕು’ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷೆ ಚಂದ್ರಕಲಾ ನಾಯ್ಕ, ಕಾರ್ಯದರ್ಶಿ ಎನ್.ಎಸ್.ನಾಯ್ಕ, ಸಂಘಟನಾ ಕಾರ್ಯದರ್ಶಿ ಎಂ.ಜಿ.ನಾಯ್ಕ, ಖಜಾಂಚಿ ಎಂ.ಡಿ.ರಫೀಕ್, ‍ಪ್ರಮುಖರಾದ ರತ್ನಾಕರ ನಾಯ್ಕ, ನಾಗೇಶ ಭಟ್ಟ, ರಫೀಕ್ ಶೇಖ್ ಇದ್ದರು.

ನಡೆಯದ ತರಗತಿಗಳು: ಶೈಕ್ಷಣಿಕ ಜಿಲ್ಲೆಯ ಐದೂ ತಾಲ್ಲೂಕುಗಳಿಂದ ನೂರಾರು ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇದರಿಂದ ತರಗತಿಗಳು ನಡೆಯಲಿಲ್ಲ. ಇತ್ತೀಚಿನ ವರ್ಷಗಳಲ್ಲಿ ಪ್ರತಿಭಟನೆಗೆ ಇಷ್ಟೊಂದು ಸಂಖ್ಯೆಯಲ್ಲಿ ಶಿಕ್ಷಕರು ಸೇರಿದ್ದು ಇದೇ ಮೊದಲು ಎಂಬ ಮಾತು ಕೇಳಿಬಂತು.

ಜಿಲ್ಲೆಯಲ್ಲಿ 489 ಕಿರಿಯ ಹಾಗೂ 568 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿವೆ. ಅವುಗಳಲ್ಲಿ 2,924 ಶಿಕ್ಷಕರಿದ್ದು, 70 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು