ಸೋಮವಾರ, ಸೆಪ್ಟೆಂಬರ್ 20, 2021
30 °C

ಅಸ್ಲ್‌ಂ ಕೊಲೆ ಆರೋಪಿಗಳ ಬಂಧನಕ್ಕೆ ಒತ್ತಾಯ; ಎಸ್‌ಡಿಪಿಐನಿಂದ ಪ್ರತಿಭಟನೆ ಎಚ್ಚರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಎಸ್‌ಡಿಪಿಐ ಕಾರ್ಯಕರ್ತನಾಗಿದ್ದ ಅಸ್ಲ್‌ಂ ಹಂತಕರನ್ನು ಶೀಘ್ರ ಬಂಧಿಸದಿದ್ದಲ್ಲಿ ಶಿರಸಿಯಲ್ಲಿ ಬೃಹತ್ ಪ್ರತಿಭಟನಾ ಸಭೆ ಮತ್ತು ರಾಜ್ಯಾದ್ಯಂತ ಹೋರಾಟ ಮಾಡಲಾಗುವುದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಸ್ಲ್‌ಂ ಕೊಲೆ ಪ್ರಕರಣದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಘಟಕದ ಉಪಾಧ್ಯಕ್ಷ ಅನೀಸ್ ತಹಸೀಲ್ದಾರ್ ಮತ್ತು ಅವರ ಸಂಗಡಿಗರು ನೇರವಾಗಿ ಶಾಮೀಲಾಗಿದ್ದಾರೆ. ಅನೀಸ್ ತಮಗಾಗಿರುವ ಸಣ್ಣಪುಟ್ಟ ಗಾಯಗಳಿಗೆ ಚಿಕಿತ್ಸೆ ಪಡೆಯುವ ನೆಪದಲ್ಲಿ ಮಂಗಳೂರಿನ ಅಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎಸ್‌ಡಿಪಿಐ ನಗರದಲ್ಲಿ ವೇಗವಾಗಿ ಬೆಳೆಯುತ್ತಿದ್ದು, ಅದನ್ನು ಸಹಿಸಲಾಗದೇ, ಪಕ್ಷದ ಬೆಳವಣಿಗೆ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಕಾರ್ಯಕರ್ತರ ಆತ್ಮಸ್ಥೈರ್ಯ ಕುಗ್ಗಿಸುವ ಸಲುವಾಗಿ ಮಾಡಿಸಿದ ಪೂರ್ವನಿಯೋಜಿತ ಕೃತ್ಯ ಇದಾಗಿದೆ’ ಎಂದು ಆರೋಪಿಸಿದರು.

ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಬಿಜೆಪಿ ನಾಯಕರು ತನಿಖೆಯ ಹಾದಿಯನ್ನು ತಪ್ಪಿಸುತ್ತಿದ್ದಾರೆ. ಪೊಲೀಸ್ ಇಲಾಖೆ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸದೇ, ಎಸ್‌ಡಿಪಿಐ ಕಾರ್ಯಕರ್ತರಿಗೆ ಕಿರುಕುಳ ನೀಡುವುದನ್ನು ನೋಡಿದರೆ, ಇದು ರಾಜಕೀ ಪ್ರೇರಿತವೆನಿಸುತ್ತದೆ. ಅಸ್ಲ್‌ಂ ಜೊತೆಗಿದ್ದ ಸ್ನೇಹಿತರನ್ನೇ ಬಂಧಿಸಿ, ಅವರನ್ನು ಆರೋಪಿಗಳನ್ನಾಗಿ ಮಾಡುವ ಪ್ರಯತ್ನ ನಡೆದಿದೆ. ಅಲ್ಲದೇ, ಎಸ್‌ಡಿಪಿಐ ಕಾರ್ಯಕರ್ತರನ್ನು ಭಯೋತ್ಪಾದಕರಂತೆ ಚಿತ್ರಿಸಲಾಗುತ್ತಿದೆ. ಪಕ್ಷದ ಇಬ್ಬರು ಪದಾಧಿಕಾರಿಗಳನ್ನು ಬಂಧಿಸಿರುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಹೇಳಿದರು. 

ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸೊ ಫ್ರಾಂಕೊ, ರಾಜ್ಯ ಘಟಕದ ಉಪಾಧ್ಯಕ್ಷ ಮಜೀದ್ ಖಾನ್, ಕಾರ್ಯದರ್ಶಿ ಅಶ್ರಫ್ ಮಾಚಾರ್, ರಾಜ್ಯ ಸಮಿತಿ ಸದಸ್ಯ ಆನಂದ ಮಿತ್ತಬೈಲ್, ಜಿಲ್ಲಾ ಘಟಕದ ಅಧ್ಯಕ್ಷ ತೌಫಿಕ್ ಬ್ಯಾರಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.