ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯವಸ್ಥಾಪನಾ ಸಮಿತಿ ರಚಿಸಬೇಡಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮನವಿ

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಮನವಿ
Last Updated 3 ಆಗಸ್ಟ್ 2020, 15:11 IST
ಅಕ್ಷರ ಗಾತ್ರ

ಶಿರಸಿ: ‘ಸುಪ್ರೀಂ ಕೋರ್ಟ್ ಅಂತಿಮ ತೀರ್ಮಾನ ಬರುವವರೆಗೆ ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚನೆ ಹಾಗೂ ಆಡಳಿತಾಧಿಕಾರಿ ನೇಮಕವನ್ನು ಮಾಡಬಾರದು. ಈ ಸಂಬಂಧ ಹೊಸ ಕಾನೂನು ರಚಿಸುವ ಕುರಿತು ಧಾರ್ಮಿಕ ದತ್ತಿ ಮುಜರಾಯಿ ಇಲಾಖೆಯ ಮುಖ್ಯಸ್ಥರಿಗೆ ಸೂಚಿಸಬೇಕು’ ಎಂದು ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಹಿಂದೂ-ಧಾರ್ಮಿಕ ದೇವಾಲಯಗಳ ಮಹಾಮಂಡಳದ ವತಿಯಿಂದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಸೋಮವಾರ ಇಲ್ಲಿ ಮನವಿ ಸಲ್ಲಿಸಲಾಯಿತು.

ಮಹಾಮಂಡಳದ ಕಾರ್ಯಾಧ್ಯಕ್ಷ ಡಾ.ವೆಂಕಟೇಶ ನಾಯ್ಕ ಮಾತನಾಡಿ, ‘ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಹಾಗೂ ಆಡಳಿತಾಧಿಕಾರಿ ನೇಮಕ ಮಾಡುವ ಮೂಲಕ ಹಿಂದೂ ಧಾರ್ಮಿಕ ದೇವಾಲಯಗಳ ಮೇಲೆ ಹಿಡಿತ ಸಾಧಿಸುವ ಕ್ರಮ ಸರಿಯಲ್ಲ. ಈ ಬಗ್ಗೆ
ಈಗಾಗಲೇ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಮನವಿಯನ್ನು ಪುರಸ್ಕರಿಸಿದ ಹಿಂದಿನ ಸರ್ಕಾರ ಹೈಕೋರ್ಟ್ ತೀರ್ಮಾನ ಬರುವವರೆಗೆ ರಾಜ್ಯದ ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸುವ ಹಾಗೂ ಆಡಳಿತಾಧಿಕಾರಿ ನೇಮಕ ಮಾಡುವ ಕ್ರಮವನ್ನು ಕೈಬಿಟ್ಟಿತ್ತು. ಹೀಗಿರುವಾಗ ಹೈಕೋರ್ಟ್ ತೀರ್ಪಿಗೆ ಸುಪ್ರಿಂ ಕೋರ್ಟ್‌ನಿಂದ ತಡೆಯಾಜ್ಞೆ ಪಡೆದು, ತರಾತುರಿಯಲ್ಲಿ ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲಾಗುತ್ತಿದೆ’ ಎಂದರು.

ಹಿಂದೂ ಧಾರ್ಮಿಕ ದೇವಾಲಯಗಳ ಮಹಾ ಮಂಡಳವು ಸ್ವರ್ಣವಲ್ಲಿ ಮಠಾಧೀಶ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಪ್ರತಿಭಟನಾ ಸಭೆ ನಡೆಸಿ ನಿರ್ಣಯವನ್ನು ಸರ್ಕಾರಕ್ಕೆ ಸಲ್ಲಿಸಿತ್ತು. ಪ್ರಸ್ತುತ ಮತ್ತೆ ರಾಜ್ಯವ್ಯಾಪಿ ಕೋವಿಡ್ 19 ಸಾಂಕ್ರಾಮಿಕ ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ತರಾತುರಿಯಲ್ಲಿ ರಾಜ್ಯದ ಹಿಂದೂ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸುವ, ಆಡಳಿತಾಧಿಕಾರಿ ನೇಮಿಸುವ ಆದೇಶವನ್ನು ಮಾಡಿದ್ದಾರೆ. ಇದರಿಂದ ಧಾರ್ಮಿಕ ಸ್ವಾಯತ್ತತೆ ಹಾಗೂ ರೂಢಿ ಸಂಪ್ರದಾಯಗಳಿಗೆ ಧಕ್ಕೆಯಾಗಿದೆ. ಅಲ್ಲದೇ ಅನಾವಶ್ಯಕ ಗೊಂದಲ ಸೃಷ್ಟಿಯಾಗಿದೆ. ಕಾರಣ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣದ ತೀರ್ಪು ಬರುವವರೆಗೆ ಯಾವುದೇ ದೇವಾಲಯಗಳಿಗೆ ಸರ್ಕಾರದಿಂದ ವ್ಯವಸ್ಥಾಪನಾ ಸಮಿತಿ ರಚಿಸಬಾರದು ಎಂದು ಮನವಿಯಲ್ಲಿ ವಿನಂತಿಸಲಾಗಿದೆ.

ಪ್ರಮುಖರಾದ ಟಿ.ಜಿ.ನಾಡಿಗೇರ, ಐ.ಎಸ್.ಭಟ್ಟ ಹಸ್ರಗೋಡ, ವಿವಿಧ ದೇವಾಲಯಗಳ ಪ್ರಮುಖರು, ಮೊಕ್ತೇಸರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT