ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನಿಂದ ವಿಧಾನಸಭೆಗೆ ಸ್ಪರ್ಧಿಸಲು ಅವಕಾಶ ಸಿಗಲಿ: ಎಸ್‌.ಎಲ್. ಘೋಟ್ನೇಕರ

ಚುನಾವಣೆಗೆ ಸ್ಪರ್ಧಿಸಲು ಅವಕಾಶ ಸಿಕ್ಕರೆ ಮಾತ್ರ ದೇಶಪಾಂಡೆಯೊಂದಿಗೆ ಸಂಧಾನ
Last Updated 27 ಆಗಸ್ಟ್ 2021, 1:29 IST
ಅಕ್ಷರ ಗಾತ್ರ

ಹಳಿಯಾಳ: ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಅವಕಾಶ ಸಿಕ್ಕರೆ ಮಾತ್ರ ದೇಶಪಾಂಡೆ ಅವರ ಜೊತೆ ಸಂಧಾನ ಸಾಧ್ಯ. ಇಲ್ಲದಿದ್ದರೆ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯದಂತೆ ಸಾಗುತ್ತೇನೆ ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಘೋಟ್ನೇಕರ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 40 ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿದ್ದು, ಸಂಘಟನಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಕಳೆದ ಕೆಲವು ತಿಂಗಳ ಹಿಂದೆ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ ಪಕ್ಷಕ್ಕೆ ಬರಮಾಡಿಕೊಂಡಾಗ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರು ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕರ್ತರನ್ನು ಅಸಿಂಧು ಎಂದು ಹೇಳಿದ್ದಾರೆ. ಶಾಸಕ ಆರ್‌.ವಿ. ದೇಶಪಾಂಡೆ ಅವರು ಸಹ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರ ಮಾತನ್ನು ಸಮರ್ಥಿಸಿಕೊಂಡಿದ್ದಾರೆ ಎಂದರು.

ಕಾಂಗ್ರೆಸ್‌ ಪಕ್ಷದ ವರಿಷ್ಠರ ನಿರ್ದೇಶನದಂತೆ ಪಕ್ಷವನ್ನು ಇನ್ನಷ್ಟು ಸಂಘಟಿಸುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕಿಳಿಯುವ ಬಗ್ಗೆ ಹುಬ್ಬಳ್ಳಿ ವಲಯ, ವಿಭಾಗ ಮಟ್ಟದಲ್ಲಿ ನಡೆದ ಕಾಂಗ್ರೆಸ್‌ ವರಿಷ್ಠರ ಸಭೆಯಲ್ಲಿ ಪ್ರಸ್ತಾಪಿಸಿದ್ದೇನೆ ಎಂದು ಹೇಳಿದರು.

ʻಕಾರವಾರಕ್ಕೆ ಸಂಪ‍ರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಅಣಶಿ ಘಟ್ಟದಲ್ಲಿ ಕುಸಿದ ಗುಡ್ಡವನ್ನು ಕಾಂಗ್ರೆಸ್‌ ಮುಖಂಡ ರಮೇಶ ನಾಯ್ಕ ಅವರ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸದಸ್ಯರು ತೆರವುಗೊಳಿಸಿದ್ದು, ಅಣಶಿ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದರ ವೆಚ್ಚವನ್ನು ಅಂದಾಜು ಮಾಡಿ, ಶ್ಲಾಘನೀಯ ಕೆಲಸ ಮಾಡಿರುವ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಸರ್ಕಾರದಿಂದ ಹಣ ಪಾವತಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಸ್‌.ಎಲ್‌. ಘೋಟ್ನೇಕರ ಆಗ್ರಹಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಣಶಿ ಘಟ್ಟದ ರಾಜ್ಯ ಹೆದ್ದಾರಿಯಲ್ಲಿ ಗುಡ್ಡ ಕುಸಿತದಿಂದ ವಾಹನ ಸಂಚಾರ ಕಳೆದ ಒಂದು ತಿಂಗಳಿನಿಂದ ಸಂಪೂರ್ಣ ಸ್ಥಗಿತಗೊಂಡಿದ್ದು ಹಳಿಯಾಳ, ದಾಂಡೇಲಿ ಜೋಯಿಡಾ ಮತ್ತಿತರ ಭಾಗಗಳ ಸಾರ್ವಜನಿಕರು ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಸಾಗಿಸಲು ತೀವ್ರ ಪರದಾಡುವಂತಾಗಿತ್ತು.

ಜೋಯಿಡಾದ ಕಾಂಗ್ರೆಸ್‌ ಪಕ್ಷದ ಮುಖಂಡರು ವಿವಿಧ ಸಂಘಟನೆಗಳ ಕಾರ್ಯಕರ್ತರು ಸತತ ಕಾರ್ಯಾಚರಣೆ ನಡೆಸಿ ರಸ್ತೆ ತೆರವುಗೊಳಿಸಿ ತಾತ್ಕಾಲಿಕವಾಗಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಹಳಿಯಾಳದಲ್ಲಿ ಕಾರ್ಯಕ್ರಮ ಆಯೋಜಿಸಿ ಅವರೆಲ್ಲರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.

ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ ಘೋಟ್ನೇಕರ, ಉಪಾಧ್ಯಕ್ಷ ಸಂತೋಷ ಮಿರಾಶಿ, ಮುಖಂಡ ಕೈತಾನ ಬಾರಬೋಜಾ, ವಿ.ಎನ್‌. ಮಿರಾಶಿ, ಗುಲಾಬಶ್ಯಾ ಲತೀಫನವರ, ವಿಶ್ವನಾಥ ಜಾಧವ, ಯಶವಂತ ಪಟ್ಟೇಕರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT