ಭಾನುವಾರ, ಸೆಪ್ಟೆಂಬರ್ 25, 2022
21 °C
ಕಾರವಾರ: ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಕ್ಕಳ ರಕ್ಷಣೆ: ಜವಾಬ್ದಾರಿ ನಿಭಾಯಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ‘ನಿಮ್ಮ ಮಕ್ಕಳ ಭವಿಷ್ಯ, ರಕ್ಷಣೆಯ ವಿಚಾರದಲ್ಲಿ ಚಿಂತಿಸುವ ರೀತಿಯಲ್ಲೇ ಸಮಾಜದಲ್ಲಿ ಶೋಷಣೆ, ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಕುರಿತೂ ಚಿಂತಿಸಬೇಕು. ಪ್ರತಿಯೊಬ್ಬ ಅಧಿಕಾರಿಯೂ ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿಬೇಕು’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ನಗರದಲ್ಲಿ ಬುಧವಾರ ಹಮ್ಮಿಕೊಳ್ಳಲಾದ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986, ತಿದ್ದುಪಡಿ 2016, ಪೊಕ್ಸೊ ಕಾಯ್ದೆ 2012 ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ವಿವಿಧ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಇದೇವೇಳೆ, ‘ಮಕ್ಕಳ ಸ್ನೇಹಿ ಪೊಲೀಸ್’ ಪುಸ್ತಕವನ್ನು ಬಿಡುಗಡೆ ಮಾಡಿದರು.

‘ಬಾಲ ಕಾರ್ಮಿಕ ಪದ್ಧತಿ, ಮಾನವ ಕಳ್ಳ ಸಾಗಣೆ, ಮಕ್ಕಳ ಮೇಲಿನ ದೌರ್ಜನ್ಯಗಳು ಸಾಮಾಜಿಕ ಪಿಡುಗುಗಳಾಗಿವೆ. ಅವುಗಳನ್ನು ತೊಡೆದು ಹಾಕುವಲ್ಲಿ ಹಾಗೂ ಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ ಮಾತನಾಡಿ, ‘ರಾಜ್ಯ ಸರ್ಕಾರವು 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದೆ. ಮೂಲಸೌಕರ್ಯಗಳ ಅವಶ್ಯಕತೆ ಇರುವವರಿಗೆ ಸೌಲಭ್ಯ ಸಿಗುವಂತೆ ಸರ್ಕಾರವೂ ಕಾರ್ಯ ನಿರ್ವಹಿಸುತ್ತಿದೆ. ಮಕ್ಕಳನ್ನು ರಕ್ಷಿಸುವ ಸಲುವಾಗಿ ಪೊಕ್ಸೊ ಕಾಯ್ದೆ ಜಾರಿಗೆ ತರಲಾಗಿದೆ. ಸದೃಢ ದೇಶ ಕಟ್ಟಲು ಸರ್ವಾಂಗೀಣ ಅಭಿವೃದ್ಧಿ ಅವಶ್ಯವಾಗಿದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ‘ವಿವಿಧ ಸಹಾಯವಾಣಿಗಳ ಮೂಲಕ ಮಕ್ಕಳ, ಯುವಕ, ಯುವತಿಯರ, ವೃದ್ಧರ ರಕ್ಷಣೆಗೆ ಬೇಕಾದ ಕ್ರಮ ವಹಿಸಲಾಗುತ್ತಿದೆ. ನಗರ, ಗ್ರಾಮೀಣ ಪ್ರದೇಶದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಅರಿವು ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಗಣೇಶ ಮಾತನಾಡಿದರು. ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅವರ ಶೋಷಣೆ ನಿಲ್ಲಿಸಲು ಶ್ರಮಿಸುತ್ತಿರುವ ಮಕ್ಕಳ ವಿಶೇಷ ಪೊಲೀಸ್ ಘಟಕದ ರುದ್ರೇಶ್ ಮೇತ್ರಾಣಿ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಹಬೀಬ್ ಸಾಬ್ ಮುಲ್ಲಾ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಿಯಾಂಗಾ.ಎಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ದೇವಿದಾಸ ರಾಯ್ಕರ್, ಕೇಂದ್ರ ಸರ್ಕಾರದ ಕಾರ್ಯದರ್ಶಿ ಹೇಮಾ ನಾಯ್ಕ, ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ, ಬೆಳಗಾವಿ ಪ್ರಾದೇಶಿಕ ಉಪ ಕಾರ್ಮಿಕ ಆಯುಕ್ತ ವೆಂಕಟೇಶ ಎ.ಸಿಂದಿಗಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶರದ್ ನಾಯಕ ಇದ್ದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.