ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

51 ಸ್ಥಳಗಳಲ್ಲಿ ತಲೆ ಎತ್ತಲಿದೆ ‘ಕೂಸಿನ ಮನೆ’

ನರೇಗಾ ಕಾರ್ಮಿಕರ ಮಕ್ಕಳ ಪಾಲನೆಗೆ ಅನುಕೂಲ:ಸಿಇಒ ಮಾಹಿತಿ
Published 11 ಡಿಸೆಂಬರ್ 2023, 14:39 IST
Last Updated 11 ಡಿಸೆಂಬರ್ 2023, 14:39 IST
ಅಕ್ಷರ ಗಾತ್ರ

ಕಾರವಾರ: ನರೇಗಾ ಯೋಜನೆಯಡಿ ದುಡಿಯುವ ಕೂಲಿಕಾರ್ಮಿಕರ ಮತ್ತು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವ ಕೂಲಿಕಾರರ ಮೂರು ವರ್ಷದೊಳಗಿನ ಮಕ್ಕಳ ಪಾಲನೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ರೂಪಿಸಲು ಸೂಚಿಸಿದ ‘ಕೂಸಿನ ಮನೆ’ (ಶಿಶು ಪಾಲನಾ ಕೇಂದ್ರ) ಜಿಲ್ಲೆಯ 51 ಕಡೆಗಳಲ್ಲಿ ನಿರ್ಮಾಣಗೊಳ್ಳುತ್ತಿದೆ.

‘ಜಿಲ್ಲೆಯ 229 ಗ್ರಾಮ ಪಂಚಾಯ್ತಿಗಳ ಪೈಕಿ ವ್ಯವಸ್ಥಿತ ಜಾಗ ಹಾಗೂ ಸರ್ಕಾರಿ ಕಟ್ಟಡಗಳ ಲಭ್ಯತೆಗೆ ಅನುಗುಣವಾಗಿ ಆಯ್ದ ಕಡೆಗಳಲ್ಲಿ ಮೊದಲ ಹಂತದಲ್ಲಿ ಕೂಸಿನ ಮನೆ ಕಾರ್ಯಾರಂಭಗೊಳ್ಳುತ್ತಿದೆ’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಈಶ್ವರ ಕಾಂದೂ ತಿಳಿಸಿದ್ದಾರೆ.

‘ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಖಾಲಿ ಇರುವ ಸರ್ಕಾರಿ ಶಾಲೆ, ಸಮುದಾಯ ಭವನ ಸೇರಿದಂತೆ ಇತರೆ ಸರ್ಕಾರಿ ಕಟ್ಟಡಗಳನ್ನು ಕೂಸಿನ ಮನೆ ಆಗಿ ಪರಿವರ್ತಿಸಲಾಗುತ್ತಿದೆ. ಈ ಕಟ್ಟಡಗಳ ಅಲ್ಪಸ್ವಲ್ಪ ದುರಸ್ತಿ, ಕುಡಿಯುವ ನೀರಿನ ವ್ಯವಸ್ಥೆಗಾಗಿ ಸರ್ಕಾರ ಆರಂಭದಲ್ಲಿ ಪ್ರತಿ ಘಟಕಕ್ಕೆ ₹1 ಲಕ್ಷ ಅನುದಾನ ಬಿಡುಗಡೆ ಮಾಡುತ್ತದೆ. ಶಿಶುಗಳಿಗೆ ಪೂರಕ ಪೌಷ್ಠಿಕ ಆಹಾರ, ತೊಟ್ಟಿಲು, ಆಟಿಕೆ ಸಾಮಗ್ರಿ, ಕುಡಿಯುವ ನೀರು, ಗಾಳಿ-ಬೆಳಕು ಮತ್ತಿತರ ಸೌಲಭ್ಯಗಳನ್ನು ಈ ಕೇಂದ್ರದಲ್ಲಿ ಕಲ್ಪಿಸಲಾಗುತ್ತದೆ’ ಎಂದು ವಿವರಿಸಿದರು.

‘ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮೀನುಗಳಲ್ಲಿ ಕೃಷಿ ಕೆಲಸಕ್ಕೆ ತೆರಳುತ್ತಾರೆ. ಕೂಲಿಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಬಹುತೇಕರು ಬಡ ಕುಟುಂಬದವರಾಗಿದ್ದು, ಪ್ರತಿ-ನಿತ್ಯ ಕೂಲಿ ಕೆಲಸಕ್ಕೆ ತೆರಳುವ ಅನಿವಾರ್ಯತೆ ಇರುತ್ತದೆ. ಇಂತಹ ಕುಟುಂಬದ ಮಹಿಳೆಯರು ಚಿಕ್ಕ ಮಕ್ಕಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವುದು ಅಸಾಧ್ಯ. ಅವರ ಅನುಕೂಲಕ್ಕೆ ಕೂಸಿನ ಮನೆ ನೆರವಿಗೆ ಬರಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹತ್ತು ಮಹಿಳೆಯರಿಗೆ ಉದ್ಯೋಗ

‘ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಪಡೆದುಕೊಂಡು ಕೆಲಸ ನಿರ್ವಹಿಸುತ್ತಿರುವ 22 ರಿಂದ 45 ವರ್ಷ ವಯಸ್ಸಿನೊಳಗಿನ ಕನಿಷ್ಠ 10ನೇ ತರಗತಿ ವರೆಗೆ ವ್ಯಾಸಂಗ ಮಾಡಿರುವ 10 ಜನ ಮಹಿಳಾ ಕೂಲಿ ಕಾರ್ಮಿಕರನ್ನೇ  ‘ಕೂಸಿನ ಮನೆ’ಗೆ ಕೇರ್ ಟೇಕರ್ಸ್ ಆಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಅವರಿಗೆ ಸರ್ಕಾರದಿಂದ ಪ್ರತ್ಯೇಕವಾಗಿ ಗೌರವಧನ ನೀಡದೇ ನರೇಗಾ ಯೋಜನೆಯಡಿ ಪ್ರತಿದಿನಕ್ಕೆ ₹316 ರಂತೆ ನೂರು ದಿನಗಳ ವರೆಗೆ ಕೆಲಸ ನೀಡಲಾಗುತ್ತದೆ. ಒಂದು ವೇಳೆ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರು 100 ದಿನ ಕೆಲಸ ನಿರ್ವಹಿಸಿದರೆ ನಂತರ ಮತ್ತೊಬ್ಬರಿಗೆ ಅವಕಾಶ ನೀಡಲಾಗುತ್ತದೆ’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಈಶ್ವರ ಕಾಂದೂ ತಿಳಿಸಿದರು. ‘ಜಿಲ್ಲೆಯ ಎಂಟು ಸ್ಥಳಗಳಲ್ಲಿ ಈಗಾಗಲೆ ಕೇರ್ ಟೇಕರ್ಸ್ ಹುದ್ದೆಗೆ ಆಯ್ಕೆಯಾದವರಿಗೆ ತರಬೇತಿ ನೀಡಲಾಗುತ್ತಿದೆ. ಕೂಸಿನ ಮನೆ ನಿರ್ವಹಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT