ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣ ದೇವಸ್ಥಾನ: ಉಸ್ತುವಾರಿ ವಹಿಸಿಕೊಂಡ ಜಿಲ್ಲಾಧಿಕಾರಿ

ಮುಜರಾಯಿ ಇಲಾಖೆ, ಜಿಲ್ಲಾಡಳಿತದ ವಿರುದ್ಧ ನ್ಯಾಯಾಂಗ ನಿಂದನೆ ದೂರು: ಮಠದ ವಕೀಲರು
Last Updated 19 ಸೆಪ್ಟೆಂಬರ್ 2018, 18:07 IST
ಅಕ್ಷರ ಗಾತ್ರ

ಕಾರವಾರ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದ ಆಡಳಿತವನ್ನು, ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಹೈಕೋರ್ಟ್ ಆದೇಶದ ಮೇರೆಗೆ ಬುಧವಾರ ವಹಿಸಿಕೊಂಡರು.

ದೇವಸ್ಥಾನದ ಸಾಮಗ್ರಿ, ಬೆಲೆಬಾಳುವ ವಸ್ತುಗಳ ಪಟ್ಟಿಯನ್ನು ಪುನಃ ಪರಿಶೀಲನೆ ನಡೆಸಲಾಯಿತು. ಬಳಿಕ ಅವುಗಳನ್ನು ಉಸ್ತುವಾರಿ ಸಮಿತಿಯ ವಶಕ್ಕೆ ಪಡೆಯಲಾಯಿತು. 2008ರ ಆಗಸ್ಟ್‌ನಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಈ ದೇವಸ್ಥಾನದ ಆಡಳಿತವನ್ನು ವಹಿಸಿತ್ತು. ಇದನ್ನು ವಿರೋಧಿಸಿ ಹಿಂದಿನ ಮೇಲುಸ್ತುವಾರಿ ಟ್ರಸ್ಟಿ ಬಾಲಚಂದ್ರ ದೀಕ್ಷಿತ್ ಮತ್ತು ಅರ್ಚಕರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಗೋಕರ್ಣ ದೇವಾಲಯವು ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ 1997ಕ್ಕೆ ಒಳಪಡುತ್ತದೆ. ಆದ್ದರಿಂದ ಅದನ್ನು ಹಸ್ತಾಂತರ ಮಾಡಿರುವುದು ಸರಿಯಲ್ಲ ಎಂದು ವಾದಿಸಿದ್ದರು. ನ್ಯಾಯಮೂರ್ತಿ ಬಿ.ವಿ.ನಾಗರತ್ನಾ ಹಾಗೂ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ಪೀಠವು ದೇವಾಲಯವನ್ನು ಪುನಃ ಸರ್ಕಾರದ ವಶಕ್ಕೆ ನೀಡಬೇಕೆಂದು ಆದೇಶಿಸಿತ್ತು.

ಈ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ‘ಹೈಕೋರ್ಟ್ ಆದೇಶದಂತೆ ದೇವಾಲಯದ ಆಡಳಿತವನ್ನು ಜಿಲ್ಲಾಧಿಕಾರಿ ನೇತೃತ್ವದ ಉಸ್ತುವಾರಿ ಸಮಿತಿ ವಹಿಸಿಕೊಂಡಿದೆ. ರಾಮಚಂದ್ರಾಪುರ ಮಠದವರಿಗೆ ನ್ಯಾಯಾಲಯದ ತೀರ್ಪಿನ ಬಗ್ಗೆ ಇರುವ ಗೊಂದಲದ ಬಗ್ಗೆ ನನಗೆ ತಿಳಿದಿಲ್ಲ. ತೀರ್ಪಿನ ಬಗ್ಗೆ ಸ್ಪಷ್ಟತೆಯಿದ್ದು ಮುಜರಾಯಿ ಆಯುಕ್ತರ ಕಚೇರಿಯಿಂದ ಬಂದಿರುವ ಮಾರ್ಗಸೂಚಿಯಂತೆ ನಾವು ಅಧಿಕಾರ ವಹಿಸಿಕೊಂಡಿದ್ದೇವೆ. ಸದ್ಯದಲ್ಲೇ ಸಮಿತಿಗೆ ಸದಸ್ಯರನ್ನು ನೇಮಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.

ರಾಮಚಂದ್ರಾಪುರ ಮಠದ ಆಡಳಿತಾಧಿಕಾರಿ ಜಿ.ಕೆ.ಹೆಗಡೆ ಅವರು ಜಿಲ್ಲಾಧಿಕಾರಿಗೆ ದೇವಸ್ಥಾನದ ಅಧಿಕಾರ ಹಸ್ತಾಂತರಿಸಿದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಜಿಲ್ಲಾಡಳಿತವು ಉಸ್ತುವಾರಿ ವಹಿಸಿಕೊಳ್ಳುತ್ತಿದ್ದಂತೆ ಉಪಾಧಿವಂತರ ತಂಡವೊಂದು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕುತ್ತಾ ಸಂಭ್ರಮ ವ್ಯಕ್ತಪಡಿಸಿತು.

ನ್ಯಾಯಾಂಗ ನಿಂದನೆ ದೂರು: ಸರ್ಕಾರವು ದೇವಸ್ಥಾನದ ಉಸ್ತುವಾರಿಯನ್ನು ವಹಿಸಿಕೊಳ್ಳುವ ನಿರ್ಧಾರಕ್ಕೆ ಮಠದ ವಕೀಲ ಶಂಭು ಶರ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತವು ಸುಪ್ರೀಂಕೋರ್ಟ್‌ ತೀರ್ಪಿಗೆ ವಿರುದ್ಧವಾಗಿ ನಡೆದುಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ. ಇದರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಅವರು ಹೇಳಿದ್ದಾರೆ.

‘ಸುಪ್ರೀಂ ಕೋರ್ಟ್ ಆದೇಶ ಬಂದ ದಿನದಿಂದ ಎಂಟು ವಾರಗಳ ಕಾಲ ದೇವಸ್ಥಾನವನ್ನು ವಶ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಯಾವುದೇ ಪ್ರಕ್ರಿಯೆ ಕೈಗೊಳ್ಳಬಾರದು ಎಂಬ ಆದೇಶವಿದೆ. ಆದರೆ, ಜಿಲ್ಲಾಧಿಕಾರಿ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ನಡೆದುಕೊಂಡಿದ್ದಾರೆ. ಹೀಗಾಗಿ ನಾವು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್, ಕುಮಟಾ ಉಪ ವಿಭಾಗಾಧಿಕಾರಿ ಲಕ್ಷ್ಮೀಪ್ರಿಯಾ, ದೇವಸ್ಥಾನದ ಆಡಳಿತಾಧಿಕಾರಿ ಹಾಲಪ್ಪ, ತಹಶೀಲ್ದಾರ್ ಮೇಘರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT