ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ | ನಾಲ್ಕನೇ ಬಾರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಹೆಬ್ಬಾರ್

Published 13 ಮೇ 2023, 13:02 IST
Last Updated 13 ಮೇ 2023, 13:02 IST
ಅಕ್ಷರ ಗಾತ್ರ

ಯಲ್ಲಾಪುರ (ಉತ್ತರ ಕನ್ನಡ): ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅರಬೈಲು ಶಿವರಾಮ ಹೆಬ್ಬಾರ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು. ಹೆಬ್ಬಾರ್ ಗೆಲುವು ಖಚಿತವಾಗುತ್ತಿದ್ದಂತೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

2008ರ ವಿಧಾನಸಭಾ ಚುನಾವಣೆಯಲ್ಲಿ 2,485 ಮತಗಳ ಅಂತರದಿಂದ ಬಿಜೆಪಿಯ ವಿ.ಎಸ್.ಪಾಟೀಲ್ ವಿರುದ್ಧ ಸೋಲು ಕಂಡಿದ್ದ ಕಾಂಗ್ರೆಸ್‌ನ ಶಿವರಾಮ ಹೆಬ್ಬಾರ್ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಯ ವಿ.ಎಸ್.ಪಾಟೀಲ್ ಅವರನ್ನು ಎದುರಿಸಿ 24,492 ಮತಗಳ ಅಂತರದಿಂದ ಜಯಿಸಿದ್ದರು. 2018ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಬಿಜೆಪಿಯ ವಿ.ಎಸ್.ಪಾಟೀಲ್ ಅವರನ್ನು 1,483 ಮತಗಳ ಅಂತರದಿಂದ ಸೋಲಿಸಿದ್ದರು.

ಬದಲಾದ ರಾಜಕೀಯ ಸಂದರ್ಭದಲ್ಲಿ 2019ರಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರ್ಪಡೆಗೊಂಡು ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ತಮ್ಮ ಎದುರಾಳಿ ಕಾಂಗ್ರೆಸ್‌ನ ಭಿಮಣ್ಣ ನಾಯ್ಕ ಅವರ ವಿರುದ್ಧ 31,408 ಮತಗಳ ಅಂತರದ ಗೆಲುವನ್ನು ಕಂಡರು. ಈ ಸಲದ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ ವಿ. ಎಸ್. ಪಾಟೀಲ್ ಅವರನ್ನು 4,004 ಮತಗಳ ಅಂತರದಿಂದ ಮಣಿಸಿದ್ದಾರೆ.

ವಿ. ಎಸ್. ಪಾಟೀಲ್ ಬಿಜೆಪಿಯಿಂದ ಕಾಂಗ್ರೆಸ್‌ಗೆ ಮತ್ತು ಶಿವರಾಮ ಹೆಬ್ಬಾರ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷ ಬದಲಿಸಿದ್ದು, ಇಬ್ಬರೂ ಪರಸ್ಪರ ನಾಲ್ಕು ಬಾರಿ ಎದುರಾಳಿಗಳಾಗಿ ಸ್ಪರ್ಧಿಸಿದ್ದಾರೆ. ಈ ನಾಲ್ಕು ಚುನಾವಣೆಗಳಲ್ಲಿ ವಿ.ಎಸ್.ಪಾಟೀಲ್ ಒಂದು ಬಾರಿ ಗೆದ್ದಿದ್ದರೆ ಶಿವರಾಮ ಹೆಬ್ಬಾರ್ ಮೂರು ಬಾರಿ ಗೆಲುವಿನ ನಗೆ ಬೀರಿದ್ದಾರೆ. ಶಿವರಾಮ ಹೆಬ್ಬಾರ ಈಗಾಗಲೇ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು ಇದೀಗ ಸತತ ನಾಲ್ಕನೇ ಸಲ ಶಾಸಕರಾಗಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT