ಭಟ್ಕಳ: ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿ ಅವರ ಸಿದ್ದಾಂತ, ಆದರ್ಶ ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್.ವೈದ್ಯ ಹೇಳಿದರು.
ಅವರು ಬುಧವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ಏರ್ಪಡಿಸಲಾದ ಗಾಂಧಿ ನಡಿಗೆಯ ನಂತರ ಅರ್ಬನ್ ಬ್ಯಾಂಕಿನ ಸಭಾಂಗಣದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಮಹಾತ್ಮರ ತ್ಯಾಗ, ಬಲಿದಾನಗಳಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಸ್ವಾತಂತ್ರ್ಯಕ್ಕಾಗಿ ಗಾಂಧೀಜಿ ಅವಿರತವಾಗಿ ಹೋರಾಟ ನಡೆಸಿದ್ದರು. ಅವರ ಆದರ್ಶ, ಸಿದ್ದಾಂತ ನಾವು ಅಳವಡಿಸಿಕೊಳ್ಳಬೇಕು. ಲಾಲ್ ಬಹಾದ್ದೂರು ಶಾಸ್ತ್ರಿ ಅವರ ಜೈ ಜವಾನ್, ಜೈ ಕಿಸಾನ್ ಇಂದಿಗೂ ಪ್ರಸ್ತುತವಾಗಿದೆ’ ಎಂದರು.
‘ವಿಷಾದ ಸಂಗತಿಯೆಂದರೆ ಸ್ವಾತಂತ್ರ್ಯ ಹೋರಾಟ ಮಾಡಿದ ಗಾಂಧೀಜಿಯವರ ಬಗ್ಗೆ ಇಂದು ಸುಳ್ಳು, ಅಪಪ್ರಚಾರ ಮಾಡಲಾಗುತ್ತಿದೆ. ಇಂತಹ ಮಹಾತ್ಮರ ಬಗ್ಗೆ ಈ ರೀತಿ ಅಪಪ್ರಚಾರ ಮಾಡುವುದು ಸರಿಯಲ್ಲ. ಗಾಂಧೀಜಿಯವರ ಸಿದ್ದಾಂತ, ಆದರ್ಶ ಮತ್ತು ಸ್ವಾತಂತ್ರಕ್ಕಾಗಿ ಅವರು ಮಾಡಿದ ಹೋರಾಟದ ಬಗ್ಗೆ ಯುವ ಪೀಳಿಗೆಗೆ ಮನವರಿಕೆ ಮಾಡುವ ಕೆಲಸ ಆಗಬೇಕು’ ಎಂದರು.
ತಂಝೀಂ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ ಮಾತನಾಡಿ, ‘ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧೀಜಿಯವರ ಬಗ್ಗೆ ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕು. ಅವರ ಹೋರಾಟದ ಬಗ್ಗೆ ನಾವೆಲ್ಲರೂ ಅಧ್ಯಯನ ಮಾಡುವ ಅಗತ್ಯತೆ ಇದೆ’ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ ನಾಯ್ಕ ಮಾತನಾಡಿದರು. ಉಪಸ್ಥಿತರಿದ್ದ ಜಾಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷ ಇಮ್ರಾನ್ ಲಂಕಾ, ಪುರಸಭೆ ಉಪಾಧ್ಯಕ್ಷ ಅಲ್ತಾಪ್ ಖರೂರಿ ಮಾತನಾಡಿದರು.
ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಯನಾ ನಾಯ್ಕ, ಕಾಂಗ್ರೆಸ್ ಮುಖಂಡರಾದ ಟಿ.ಡಿ. ನಾಯ್ಕ, ನಾರಾಯಣ ನಾಯ್ಕ ಉಪಸ್ಥಿತರಿದ್ದರು. ಗ್ಯಾರಂಟಿ ಯೋಜನೆಯ ಅನುಷ್ಠಾನದ ತಾಲ್ಲೂಕು ಅಧ್ಯಕ್ಷ ರಾಜು ನಾಯ್ಕ ಕೊಪ್ಪ ಸ್ವಾಗತಿಸಿದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರೇಶ ನಾಯ್ಕ ನಿರೂಪಿಸಿದರು. ಬೆಳಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಗದೀಶ ನಾಯ್ಕ ವಂದಿಸಿದರು.