ಶನಿವಾರ, ಡಿಸೆಂಬರ್ 3, 2022
26 °C

ತೂಗುಸೇತುವೆ ಮೇಲೆ ಕಾರು ಚಾಲನೆ: ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಯಲ್ಲಾಪುರ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ, ತೂಗು ಸೇತುವೆಯ ಮೇಲೆ ಅಪರಿಚಿತರು ಕಾರು ಚಲಾಯಿಸಿದ ಪ್ರಕರಣದ ಬಗ್ಗೆ ಪರಿಶೀಲಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೂಗುಸೇತುವೆಯಲ್ಲಿ ಕಾರು ಚಲಾಯಿಸಿದ ವಿಚಾರ ಅರಿವಿಗೆ ಬಂದಿದೆ. ಅಂಥ ನಡವಳಿಕೆಗಳು ಸರಿಯಲ್ಲ’ ಎಂದರು.

‘ಜಿಲ್ಲೆಯಲ್ಲಿ ಹಲವು ತೂಗು ಸೇತುವೆಗಳಿದ್ದು, ಅವುಗಳ ಸ್ಥಿತಿಗತಿಯ ಬಗ್ಗೆ ಪರಿಶೀಲನೆ ನಡೆಸಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ’ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ತೂಗುಸೇತುವೆಗಳ ಸ್ಥಿತಿಗತಿ ಅರಿಯಲು ಮತ್ತು ಅಗತ್ಯವಿರುವ ನಿರ್ವಹಣೆಗೆ ಸಂಬಂಧಿಸಿ ಎಲ್ಲ ಶಾಸಕರು ಮತ್ತು ಜಿಲ್ಲಾಧಿಕಾರಿ ಜೊತೆ ಸಭೆ ನಡೆಸಲಾಗುವುದು. ಜನರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಶಿವಪುರದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಸೋಮವಾರ ಅಪರಿಚಿತರೊಬ್ಬರು ಕಾರು ಚಲಾಯಿಸಿಕೊಂಡು ಬಂದಿದ್ದರು. ಇದಕ್ಕೆ ಸ್ಥಳೀಯರು ಆಕ್ಷೇಪಿಸಿದಾಗ ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ ಎಂದು ಸ್ಥಳದಲ್ಲಿದ್ದ ಪ್ರವಾಸಿಗರು ದೂರಿದ್ದರು.

ಸೇತುವೆಯಲ್ಲಿ ಸುಮಾರು ಮುಂದೆ ಬಂದಿದ್ದ ಕಾರನ್ನು ಸ್ಥಳೀಯರು ತಡೆದು, ಹಿಂದಕ್ಕೆ ಕಳುಹಿಸಿದ್ದಾರೆ. ಸೇತುವೆಗೆ ಹಾನಿಯಾಗಿ ಅಪಾಯವಾದರೆ ಯಾರು ಹೊಣೆಯಾಗುತ್ತಾರೆ ಎಂದು ಪ್ರವಾಸಿಗರು, ಸ್ಥಳೀಯರು ಪ್ರಶ್ನಿಸಿದ್ದರು.

ಪ್ರಸಿದ್ಧ ಯಾತ್ರಾಸ್ಥಳ ಜೊಯಿಡಾ ತಾಲ್ಲೂಕಿನ ಉಳವಿಯಿಂದ ಬರುವ ಅನೇಕ ಮಂದಿ ಶಿವಪುರದ ತೂಗು ಸೇತುವೆಗೆ ಭೇಟಿ ನೀಡುತ್ತಾರೆ. ಅಲ್ಲದೇ ಈ ತೂಗು ಸೇತುವೆಯು ಸುತ್ತಮುತ್ತಲಿನ ಹಲವು ಹಳ್ಳಿಗಳಿಗೆ ದೈನಂದಿನ ಬದುಕಿನ ಅವಿಭಾಜ್ಯ ಸೌಕರ್ಯವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು