ಶಿರಸಿ: ‘ನಾಗಮಂಗಲದಲ್ಲಿ ಮತಾಂಧರು ಗಣೇಶ ಮೂರ್ತಿ ಮೆರವಣಿಗೆ ಮೇಲೆ ದಾಳಿ ನಡೆಸಿ, ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ’ ಎಂದು ರಾಜ್ಯ ಬಿಜೆಪಿ ಮಾಧ್ಯಮ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದರು.
ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವರ್ತನೆ ದೇಶ ವಿರೋಧಿಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದೆ. ರಾಹುಲ್ ಗಾಂಧಿ ದೇಶದ ಒಳಗೆ ಮತ್ತು ಹೊರಗಡೆ ಅಖಂಡತೆಯನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮತಾಂಧರು ಗಣೇಶನ ಮೆರವಣಿಗೆ ಮೇಲೆ ದಾಳಿ ನಡೆಸಿ, ಹಿಂದೂಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಆಳ್ವಿಕೆಯಿಂದ ಈ ರೀತಿ ಘಟನೆ ಮರುಕಳಿಸುತ್ತಿದೆ. ಇದರ ವಿರುದ್ಧ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು’ ಎಂದರು.
‘ಕಾಶ್ಮೀರದ ಆರ್ಟಿಕಲ್ 370 ರದ್ದು ಮಾಡಿ, ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ಅಲ್ಲಿ ಶಾಂತಿ ನೆಲೆಸುವಂತೆ ಮಾಡಿ ಮಹಾತ್ಮ ಗಾಂಧಿ ಕಂಡ ಕನಸನ್ನು ಪ್ರಧಾನಿ ನರೇಂದ್ರ ಮೋದಿ ನನಸು ಮಾಡಿದ್ದಾರೆ’ ಎಂದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ನಗರ ಮಂಡಳಾಧ್ಯಕ್ಷ ಆನಂದ ಸಾಲೇರ, ಎಸ್.ಟಿ ಮೋರ್ಚಾ ಅಧ್ಯಕ್ಷ ಶ್ರೀಕಾಂತ ಬಳ್ಳಾರಿ, ರೈತ ಮೋರ್ಚಾ ಜಿಲ್ಲಾ ಘಟಕದ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ, ಸಾಮಾಜಿಕ ಜಾಲತಾಣದ ಸಂಚಾಲಕ ರವಿಕುಮಾರ ಶೆಟ್ಟಿ ಇದ್ದರು.