ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ನೇಹಾ ಹತ್ಯೆಗೆ ಖಂಡನೆ, ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Published 22 ಏಪ್ರಿಲ್ 2024, 7:20 IST
Last Updated 22 ಏಪ್ರಿಲ್ 2024, 7:20 IST
ಅಕ್ಷರ ಗಾತ್ರ

ಕಾರವಾರ: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸುವ ಜತೆಗೆ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಮೀಪ ಸೋಮವಾರ ಪ್ರತಿಭಟನೆ ನಡೆಸಿದರು.

ನೂರಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ, ಗೃಹ ಸಚಿವರ ವಿರುದ್ಧವೂ ಹರಿಹಾಯ್ದರು. ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು.

ಜಿಲ್ಲಾಧಿಕಾರಿ ಕಚೇರಿಯ ನೂರು ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಇರುವ ಹಿನ್ನೆಲೆಯಲ್ಲಿ ಪೊಲೀಸರೂ ಸುತ್ತಲೂ ಬ್ಯಾರಿಕೇಡ್ ಅಳವಡಿಸಿದ್ದರು. ಬ್ಯಾರಿಕೇಡ್ ತೆಗೆದು ಕಚೇರಿ ಪ್ರವೇಶಕ್ಕೆ ಅವಕಾಶ ನೀಡಲು ಕಾರ್ಯಕರ್ತರು ಒತ್ತಾಯಿಸಿದರು. ಮನವಿ ಆಲಿಸಲು ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ಜಿಲ್ಲಾಧಿಕಾರಿ ಬಾರದ ಹಿನ್ನೆಲೆಯಲ್ಲಿ ಕೆಲ ಹೊತ್ತು ಪ್ರತಿಭಟಿಸಿ, ಮಹಿಳಾ ಕಾನಸ್ಟೆಬಲ್ ಒಬ್ಬರಿಗೆ ಮನವಿ ಪತ್ರ ಸಲ್ಲಿಸಿದರು.

'ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಸಾಧ್ಯವಾಗದ ವಾತಾವರಣ ಸೃಷ್ಟಿಯಾಗಿದೆ. ಕಾರ್ಪೊರೇಟರ್ ಮಗಳನ್ನೇ ಕಾಲೇಜಿನ ಕ್ಯಾಂಪಸ್ ನಲ್ಲಿ ಹತ್ಯೆ ಮಾಡಲು ಅಲ್ಪಸಂಖ್ಯಾತ ಸಮುದಾಯದ ಯುವಕನಿಗೆ ಧೈರ್ಯ ಬರಲು ಕಾಂಗ್ರೆಸ್ ತುಷ್ಟೀಕರಣ ನೀತಿಯೇ ಕಾರಣ. ಜನರ ಜೀವಕ್ಕೆ ಗ್ಯಾರಂಟಿ ಕೊಡಲಾಗದ ಮುಖ್ಯಮಂತ್ರಿ ಕೂಡಲೆ ರಾಜೀನಾಮೆ ಕೊಡಬೇಕು. ಸಚಿವರು ಬೇಜವಾಬ್ದಾರಿ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು' ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಹೇಳಿದರು.

'ಮತಕ್ಕಾಗಿ ಅತಿಯಾದ ಓಲೈಕೆಯಲ್ಲಿ ತೊಡಗಿರುವ ಕಾಂಗ್ರೆಸ್ ಪಕ್ಷ ಹಿಂದೂಗಳ ಸುರಕ್ಷತೆ ಮರೆತಿದೆ. ಲವ್ ಜಿಹಾದ್, ಹಿಂದೂಗಳ ಮೇಲೆ ಹಲ್ಲೆ ಹೆಚ್ಚಿದೆ' ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ, 'ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಲಾಗದ ಕಾಂಗ್ರೆಸ್ ಸರ್ಕಾರ ತೊಲಗಬೇಕು. ಅತ್ಯಂತ ದುರ್ಬಲ ಗೃಹ ಸಚಿವರು ರಾಜ್ಯದಲ್ಲಿದ್ದಾರೆ' ಎಂದರು.

'ತನ್ನದೇ ಪಕ್ಷದ ಮುಖಂಡರ ಮಗಳ ಹತ್ಯೆ ಆದಾಗ, ತನ್ನದೇ ಪಕ್ಷದ ಶಾಸಕರ ಮನೆಯ ಮೇಲೆ ದಾಳಿ ನಡೆದಾಗ ಕನಿಷ್ಠ ಅದನ್ನೂ ಖಂಡಿಸಲಾಗದಷ್ಟು ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್‌ ಹಿಂದೂಗಳ ಕಟು ವಿರೋಧಿಯಾಗಿದೆ' ಎಂದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್.ಹೆಗಡೆ, ಪ್ರಮುಖರಾದ ವೆಂಕಟೇಶ ನಾಯಕ, ಗುರುಪ್ರಸಾದ ಹೆಗಡೆ, ಪ್ರಶಾಂತ ನಾಯ್ಕ, ನಯನಾ ನೀಲಾವರ, ಮಾಲಾ ಹುಲಸ್ವಾರ, ಸಂಜಯ ಸಾಳುಂಕೆ, ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT