ಬುಧವಾರ, ಮಾರ್ಚ್ 29, 2023
25 °C

ಪ್ರತ್ಯೇಕ ಜಿಲ್ಲೆಗೆ ಆಗ್ರಹ: ಶಿರಸಿಯಲ್ಲಿ ಪ್ರತಿಭಟನಾ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಉತ್ತರ ಕನ್ನಡದ ಘಟ್ಟದ ಮೇಲಿನ ತಾಲ್ಲೂಕುಗಳನ್ನು ಸೇರಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸಲು ಆಗ್ರಹಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.

ಇಲ್ಲಿನ ಹಳೆ ಬಸ್ ನಿಲ್ದಾಣದಲ್ಲಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ತೆರಳಿತು. ಜೂ ವೃತ್ತದ ಬಳಿ ಟೈರ್ ಸುಟ್ಟು ಪ್ರತ್ಯೇಕ ಜಿಲ್ಲೆ ರಚನೆಗೆ ಆಗ್ರಹಿಸಲಾಯಿತು.

ಉಪವಿಭಾಗಾಧಿಕಾರಿ ಕಚೇರಿ ಎದುರು ಸೇರಿ ಕೆಲ ಹೊತ್ತು ಪ್ರತಿಭಟಿಸಿದರು. ವಿದ್ಯಾರ್ಥಿಗಳು ಶಿರಸಿ ಜಿಲ್ಲೆ ರಚನೆಗೆ ಘೋಷಣೆ ಕೂಗಿದರು. ಬಳಿಕ ತಹಶೀಲ್ದಾರ್ ಶ್ರೀಧರ ಮುಂದಲಮನಿ ಅವರಿಗೆ ಮನವಿ ಸಲ್ಲಿಸಲಾಯಿತು‌.

ಶಿರಸಿ ಜಿಲ್ಲೆ ಹೋರಾಟ ಸಮಿತಿ ಅಧ್ಯಕ್ಷ ಉಪೇಂದ್ರ ಪೈ, 'ಹಲವು ವರ್ಷಗಳಿಂದ ಪ್ರತ್ಯೇಕ ಜಿಲ್ಲೆಗೆ ಹೋರಾಟ ನಡೆಸಿದ್ದೇವೆ. ಇದು ನಿರ್ಣಾಯಕ ಘಟ್ಟದ ಹೋರಾಟ ಆಗಬೇಕು ಎಂಬುದು ನಮ್ಮ ಆಸೆ' ಎಂದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ, 'ಜಿಲ್ಲೆ ಇಭ್ಭಾಗಿಸಬೇಕು ಎಂಬ ಆಲೋಚನೆಯಲ್ಲ. ಜನಸಾಮಾನ್ಯರ ಹಿತದೃಷ್ಟಿ ಮತ್ತು ಆಡಳಿತಾತ್ಮಕ ವಿಚಾರಗಳಿಗೆ ಪ್ರತ್ಯೇಕ ಜಿಲ್ಲೆ ರಚನೆಯ ಕೂಗಿದೆ. ಬೆಳಗಾವಿ ಅಧಿವೇಶನದಲ್ಲಿ ಹೊಸ ಜಿಲ್ಲೆ ಘೋಷಣೆ ಮಾಡಲಿ' ಎಂದರು.

'ಶಿರಸಿ ಜಿಲ್ಲೆ ರಚನೆ ಸೂಕ್ತ ಏಕೆ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಜತೆಗೆ ಜನರಿಗೂ ತಿಳಿಸಬೇಕು. ಈ ನಿಟ್ಟಿನಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಯತ್ನಿಸಲಿ' ಎಂದರು.

ಬಿಜೆಪಿ ವಕ್ತಾರ ಸದಾನಂದ ಭಟ್ ನಡಗೋಡ, 'ಶಿರಸಿ ಪ್ರತ್ಯೇಕ ಜಿಲ್ಲೆ ಕೂಗಿಗೆ ಈಗ ಬಲ ಬಂದಿದೆ. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದೆ' ಎಂದರು.

ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಜಿಲ್ಲಾ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಮಂಜು ಮೊಗೇರ, ಎಂ.ಎಂ.ಭಟ್, 46 ವಿವಿಧ ಸಂಘಟನೆಗಳ ಪ್ರಮುಖರು, ಕಾಲೇಜು ವಿದ್ಯಾರ್ಥಿಗಳು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು