ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾಮ ಹೆಬ್ಬಾರ ಸೋಲಿಸಲು ಯತ್ನಿಸಿದವರಿಗೆ ಬಿಜೆಪಿ ಮಣೆ– ವಿವೇಕ ಹೆಬ್ಬಾರ

ಬಿಜೆಪಿ ಬಿಟ್ಟು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾದ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ ಹೇಳಿಕೆ
Published 11 ಏಪ್ರಿಲ್ 2024, 15:48 IST
Last Updated 11 ಏಪ್ರಿಲ್ 2024, 15:48 IST
ಅಕ್ಷರ ಗಾತ್ರ

ಮುಂಡಗೋಡ: ‘ರೈತರ ಜೀವನಾಡಿಯಾಗಿರುವ ಏತ ನೀರಾವರಿ ಯೋಜನೆಯನ್ನು ಜಾರಿಗೊಳಿಸಿರುವ, ಶಾಸಕ ಶಿವರಾಮ ಹೆಬ್ಬಾರ ಆಧುನಿಕ ಭಗೀರಥ ಎನಿಸಿಕೊಂಡಿದ್ದಾರೆ. ಆದರೆ, ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಂಥವರನ್ನು ಸೋಲಿಸಲು, ಜವಾಬ್ದಾರಿ ಹೊತ್ತಿರುವ ಬಿಜೆಪಿ ಪದಾಧಿಕಾರಿಗಳೇ ಹೆಬ್ಬಾರ ಅವರನ್ನು ಸೋಲಿಸಲು ಪ್ರಯತ್ನಿಸಿದ್ದರು. ಅವರ ಮೇಲೆ ಮೇಲೆ ಬಿಜೆಪಿ ಕ್ರಮ ಕೈಗೊಳ್ಳದೇ, ಇನ್ನಷ್ಟು ಜವಾಬ್ದಾರಿ ನೀಡಿ ಪ್ರೋತ್ಸಾಹಿಸಿದರು. ಇದನ್ನು ಖಂಡಿಸಿ ಬಿಜೆಪಿಯನ್ನು ಬಿಟ್ಟು ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುತ್ತಿದ್ದೇವೆ’ ಎಂದು ಯುವ ಮುಖಂಡ ಹಾಗೂ ಶಾಸಕ ಹೆಬ್ಬಾರ ಪುತ್ರ ವಿವೇಕ ಹೆಬ್ಬಾರ ಹೇಳಿದರು.

ಇಲ್ಲಿನ ಲೊಯೋಲ ವಿಕಾಸ ಕೇಂದ್ರದಲ್ಲಿ ಗುರುವಾರ ನಡೆದ ಸಭೆಯಲ್ಲಿ, ಕಾಂಗ್ರೆಸ್‌ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡು ಮಾತನಾಡಿದರು. ಅವರೊಂದಿಗೆ ಬಿಜೆಪಿ ನೂರಾರು ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾರ್ಯಕರ್ತರು ನಮ್ಮ ಕಷ್ಟ, ಕಾರ್ಪಣ್ಯಗಳಲ್ಲಿ ಹೆಜ್ಜೆ ಹೆಜ್ಜೆಗೂ ಬೆಂಬಲವಾಗಿ ನಿಂತಿದ್ದಾರೆ. ಅಂತಹ ಕಾರ್ಯಕರ್ತರಿಗೆ ರಕ್ಷಣೆ ನೀಡುವುದು ನಮ್ಮ ಜವಾಬ್ದಾರಿ. ನಮ್ಮ ಕಾರ್ಯಕರ್ತರಿಗೆ ತೊಂದರೆ ನೀಡಿದರೆ ಯಾವ ಕಾರಣಕ್ಕೂ ಸಹಿಸುವುದಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಮುಖಂಡರಿಗೆ ಎಚ್ಚರಿಸಿದರು.

‘ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ ಅವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಲು ಪ್ರತಿಯೊಬ್ಬ ಕಾರ್ಯಕರ್ತರೂ ಶ್ರಮಿಸಲಿದ್ದಾರೆ. ಪಂಚಾಯ್ತಿ ಮಟ್ಟದಲ್ಲಿಯೂ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಈ ತಾಲ್ಲೂಕಿನಿಂದ ಕಾಂಗ್ರೆಸ್‌ ಪಕ್ಷಕ್ಕೆ 15-20ಸಾವಿರ ಅಧಿಕ ಮತಗಳನ್ನು ನೀಡುತ್ತೇವೆ’ ಎಂದು ಕಾಂಗ್ರೆಸ್‌ ಮುಖಂಡರಿಗೆ ಭರವಸೆ ನೀಡಿದರು.

ಕೆಪಿಸಿಸಿ ಉಪಾಧ್ಯಕ್ಷ ಐವಾನ್ ಡಿಸೋಜಾ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ, ಮಾಜಿ ಶಾಸಕ ವಿ.ಎಸ್‌.ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಕೃಷ್ಣ ಹಿರೇಹಳ್ಳಿ, ಪ್ರಕಾಶ್ ಹೆಗಡೆ, ಧರ್ಮರಾಜ ನಡಗೇರಿ ಇನ್ನಿತರ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT