ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನ ಜಾಗೃತಿ: ಮಹಿಳೆಯರ ಕ್ರಿಕೆಟ್‌ ಟೂರ್ನಿ

Published 25 ಏಪ್ರಿಲ್ 2024, 14:19 IST
Last Updated 25 ಏಪ್ರಿಲ್ 2024, 14:19 IST
ಅಕ್ಷರ ಗಾತ್ರ

ಮುಂಡಗೋಡ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಅತ್ಯಂತ ಮಹತ್ವದ್ದಾಗಿದ್ದು, ಮೇ 7ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ಮತ ಚಲಾಯಿಸಬೇಕು. ಮತದಾರರಲ್ಲಿ ಜಾಗೃತಿ ಮೂಡಿಸಲು ಪಟ್ಟಣ ಹಾಗೂ ಗ್ರಾಮೀಣ ಭಾಗಗಳಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಟಿ.ವೈ. ದಾಸನಕೊಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ಆಶ್ರಯದಲ್ಲಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಮತದಾನ ಜಾಗೃತಿ ಅಂಗವಾಗಿ ‘ಸ್ವೀಪ್ ಕಪ್’ ತಾಲ್ಲೂಕು ಮಟ್ಟದ ಮಹಿಳೆಯರ ಕ್ರಿಕೆಟ್ ಟೂರ್ನಿ ಉದ್ಘಾಟಿಸಿ ಮಾತನಾಡಿದರು.

ವಿಶೇಷವಾಗಿ ಯುವತಿಯರು, ಮಹಿಳೆಯರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸಲು ಮಹಿಳೆಯರ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಎಲ್ಲರೂ ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ, ಪಂದ್ಯಾವಳಿ ಯಶಸ್ವಿಗೊಳಿಸಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಹಾಗೂ ಉಳಿದವರನ್ನೂ ಮತದಾನ ಮಾಡಲು ಪ್ರೇರೇಪಿಸಬೇಕು ಎಂದು ಹೇಳಿದರು.

ಪಂದ್ಯಾವಳಿಯಲ್ಲಿ ತಾಲ್ಲೂಕಿನ 5 ತಂಡಗಳು ಭಾಗವಹಿಸಿದ್ದವು. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ತಂಡವು ಪ್ರಥಮ ಸ್ಥಾನ ಹಾಗೂ ತಾಲ್ಲೂಕು ಪಂಚಾಯ್ತಿ ಮಹಿಳೆಯರ ತಂಡ ರನ್ನರ್‌ ಅಪ್‌ ಸ್ಥಾನ ಪಡೆದುಕೊಂಡವು. ವಿಜೇತರಿಗೆ ಆಕರ್ಷಕ ಟ್ರೋಫಿಗಳನ್ನು ನೀಡಲಾಯಿತು. ಅತ್ಯುತ್ತಮ ಬ್ಯಾಟಿಂಗ್‌ ಮಮತಾ, ಅತ್ಯುತ್ತಮ ಬೌಲರ್ ಅಕ್ಷತಾ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಭಾಗೀರಥಿ ಪಡೆದುಕೊಂಡರು. ಪ್ರಾಚಾರ್ಯ ಪ್ರಸನ್ನಸಿಂಗ್ ಹಜೇರಿ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.

ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕ ಕೃಷ್ಣ ಕುಳ್ಳೂರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ರಫೀಕ ಮೀರಾನಾಯಕ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ರಾಜೇಶ್ವರಿ ಕದಮ, ಪಂಚಾಯತ ರಾಜ್‌ ಎಂಜಿನಿಯರ್‌ ಪ್ರದೀಪ ಭಟ್ಟ, ಕರಿಯಪ್ಪ, ಸೋಮನಿಂಗಪ್ಪ ಛಬ್ಬಿ, ಕುಮಾರ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT