ಭಾರತ್ ಬಂದ್: ವಿಜಯಪುರ ಜಿಲ್ಲೆಯಲ್ಲಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಣೆ

ವಿಜಯಪುರ: ಪೆಟ್ರೋಲ್, ಡೀಸೆಲ್ ಧಾರಣೆ ಸೇರಿದಂತೆ ಜೀವನಾವಶ್ಯಕ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಚುಂಬಿಯಾಗುತ್ತಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಒಟ್ಟಾಗಿ ಇದೇ 10ರ ಸೋಮವಾರ ದೇಶದಾದ್ಯಂತ ಕರೆ ನೀಡಿರುವ ಭಾರತ್ ಬಂದ್ಗೆ ಜಿಲ್ಲೆಯಲ್ಲೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿದೆ. ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಎನ್ಇಕೆಆರ್ಟಿಸಿಯ ವಿಜಯಪುರ ವಿಭಾಗ ಮುಂಜಾನೆ 9ರವರೆಗೆ ಮಾತ್ರ ಬಸ್ ಸಂಚಾರ ನಡೆಸಲು ಉದ್ದೇಶಿಸಿದೆ. ನಂತರ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ಪ್ರಕಟಿಸಲಾಗುವುದು ಎಂದು ವಿಜಯಪುರ ವಿಭಾಗದ ನಿಯಂತ್ರಣಾಧಿಕಾರಿ ಎಸ್.ಜಿ.ಗಂಗಾಧರ್ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಈಗಾಗಲೇ ಬಂದ್ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಜೆಡಿಎಸ್ ಸಹ ಬಂದ್ ಬೆಂಬಲಿಸುವುದಾಗಿ ಅಧಿಕೃತವಾಗಿ ಘೋಷಿಸಿದೆ. ಎರಡೂ ಪಕ್ಷಗಳ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟಿಸಲಿದ್ದಾರೆ. ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಲಿದ್ದಾರೆ.
ಪೆಟ್ರೋಲ್ ಉತ್ಪನ್ನಗಳ ಮತ್ತು ದಿನ ಬಳಕೆ ವಸ್ತುಗಳ ತೀವ್ರ ಬೆಲೆ ಏರಿಕೆ, ದಿಗಿಲು ಬಡಿಸುವ ವೇಗದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ಮಿತಿ ಮೀರಿದ ಭ್ರಷ್ಟಾಚಾರ, ಪ್ರತಿರೋಧದ ಧ್ವನಿಗಳನ್ನು ಅಡಗಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿರುವ ಬಿಜೆಪಿ, ಸಂಘ ಪರಿವಾರದ ಹೀನ ಕೋಮು ರಾಜಕಾರಣವನ್ನು ವಿರೋಧಿಸಿ ಮತ್ತು ರೈತರ ಸಂಪೂರ್ಣ ಸಾಲ ಮನ್ನಾ ಹಾಗೂ ರೈತರ ಉತ್ಪನ್ನಗಳಿಗೆ ನಿಗದಿತ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹಿಸಿ ಎಸ್ಯುಸಿಐ ಕಮ್ಯುನಿಸ್ಟ್ ಮತ್ತು ಇತರೆ ಎಡ ಪಕ್ಷಗಳು ಕರೆ ನೀಡಿರುವ ಅಖಿಲ ಭಾರತ ಮುಷ್ಕರಕ್ಕೆ ವಿಜಯಪುರ ಜಿಲ್ಲಾ ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆಯೂ ಬೆಂಬಲ ನೀಡಿದೆ. ವಿದ್ಯಾರ್ಥಿ ಸಮೂಹ ತರಗತಿ ಬಹಿಷ್ಕರಿಸಿ ಬಂದ್ನಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ.
ಕರ್ನಾಟಕ ರಕ್ಷಣಾ ವೇದಿಕೆ, ರೈತ ಸಂಘ, ಸಾರಿಗೆ ಇಲಾಖೆಯ ಸಿಬ್ಬಂದಿ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.