ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19: ಬಳ್ಳಾರಿ, ಹೊಸಪೇಟೆಯಲ್ಲಿ ಕರ್ಫ್ಯೂ ಜಾರಿ

Last Updated 18 ಏಪ್ರಿಲ್ 2021, 16:05 IST
ಅಕ್ಷರ ಗಾತ್ರ

ಬಳ್ಳಾರಿ/ವಿಜಯನಗರ: ಬಳ್ಳಾರಿ ಮಹಾನಗರ ಪಾಲಿಕೆ ಮತ್ತು ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ ಸೋಮವಾರದಿಂದ (ಏ.19) ಏ.30ರ ವರೆಗೆ ಕೊರೊನಾ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಭಾನುವಾರ ಸಂಜೆ ಆದೇಶ ಹೊರಡಿಸಿದ್ದಾರೆ.

‘ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆ, ಸಂಚಾರ ನಿಷೇಧಿಸಲಾಗಿದೆ. ಆದರೆ, ವೈದ್ಯಕೀಯ, ಅಗತ್ಯ ತುರ್ತು ಸೇವೆಗಳಿಗೆ ಇದು ಅನ್ವಯಿಸುವುದಿಲ್ಲ’ ಎಂದು ತಿಳಿಸಿದ್ದಾರೆ.

‘ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗಾಗಿ ಸಂಚಾರಕ್ಕೆ ಅನುಮತಿ ಇದೆ. ರಾತ್ರಿ ಪಾಳಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲ ಕೈಗಾರಿಕೆಗಳು, ಕಂಪನಿಗಳು, ಸಂಸ್ಥೆಗಳು ಯಥಾಸ್ಥಿತಿಯಲ್ಲಿ ಕಾರ್ಯನಿರ್ವಹಿಸಬಹುದು. ಸಂಬಂಧಿಸಿದ ಕಾರ್ಮಿಕರು, ನೌಕರರು ಕರ್ಫ್ಯೂ ಮುನ್ನವೇ ಹಾಜರಾಗಬೇಕು’ ಎಂದು ಹೇಳಿದ್ದಾರೆ.

‘ರೈಲು, ಬಸ್, ವಿಮಾನದ ದೂರ ಪ್ರಯಾಣಕ್ಕೆ ಅನುಮತಿ ಇದೆ. ಪ್ರಯಾಣಿಕರು ಮನೆಯಿಂದ ನಿಲ್ದಾಣದ ವರೆಗೆ ಮತ್ತು ನಿಲ್ದಾಣದಿಂದ ಮನೆಗೆ ಅಧಿಕೃತ ಟಿಕೆಟ್ ಆಧಾರದ ಮೇಲೆ ಆಟೊ, ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿ ನೀಡಲಾಗಿದೆ. ಟಿಕೆಟ್‌ ಇಲ್ಲದಿದ್ದಲ್ಲಿ ಕಾನೂನು ಪ್ರಕಾರ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಕಚೇರಿ ಸುತ್ತ ನಿಷೇಧಾಜ್ಞೆ ಜಾರಿ
ಭಾನುವಾರ (ಏ.18) ಮಧ್ಯರಾತ್ರಿಯಿಂದ ಏ.30ರ ಮಧ್ಯರಾತ್ರಿ ವರೆಗೆ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಯ ಎಲ್ಲ ತಹಶೀಲ್ದಾರ್‌ ಕಚೇರಿ ಹಾಗೂ ಕೆ.ಎಸ್.ಆರ್.ಟಿಸಿ ಡಿಪೊ, ವಿಭಾಗೀಯ ಕಾರ್ಯಾಗಾರ, ವಿಭಾಗೀಯ ಕಚೇರಿ ಹಾಗೂ ಬಸ್ ನಿಲ್ದಾಣಗಳ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರವನ್ನು ಬೆಂಬಲಿಸಿ ಕರ್ನಾಟಕ ರಸ್ತೆ ಸಾರಿಗೆ ನೌಕರರ ಕೂಟ ಪ್ರತಿನಿಧಿಸುವ ಬಳ್ಳಾರಿ ವಿಭಾಗದ ನೌಕರರು ಹಾಗೂ ಅವರ ಕುಟುಂಬದವರು ಏ.19 ರಂದು ಜಿಲ್ಲಾಧಿಕಾರಿ ಕಚೇರಿ ಮತ್ತು ಎಲ್ಲ ತಾಲ್ಲೂಕು ಕಚೇರಿಗಳ ಮುಂದೆ ಉಪವಾಸ ಸತ್ಯಾಗ್ರಹ, ಪ್ರತಿಭಟನೆಗೆ ಕರೆ ನೀಡಿದ್ದರು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT