ಶನಿವಾರ, ಏಪ್ರಿಲ್ 1, 2023
23 °C

ಹೊಸಪೇಟೆ: ಹೊಸ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ನೂತನ ಶಿಕ್ಷಣ ನೀತಿ ಜಾರಿಗೊಳಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಸಿಪಿಐ (ಎಂ) ಕಾರ್ಯಕರ್ತರು ಬುಧವಾರ ನಗರದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು.

ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ರಾಜ್ಯ ಸರ್ಕಾರವು ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೆ ಮುಂದಾಗಿದೆ. ಆದರೆ, ಈ ಬಗ್ಗೆ ಸಂಸತ್ತಿನಲ್ಲಾಗಲಿ, ವಿಧಾನಸಭೆಯಲ್ಲಾಗಲಿ ಚರ್ಚೆಯಾಗಿಲ್ಲ. ಶಿಕ್ಷಣ ಕ್ಷೇತ್ರದ ತಜ್ಞರ ಅಭಿಪ್ರಾಯ ಆಲಿಸಿಲ್ಲ. ಹೀಗಾಗಿ ಯಾವುದೇ ರೀತಿಯ ಚರ್ಚೆ ನಡೆಸದೆ ಏಕಪಕ್ಷೀಯವಾಗಿ ಹೊಸ ಶಿಕ್ಷಣ ನೀತಿ ಹೇರುವುದು ಎಷ್ಟರಮ್ಟಟಿಗೆ ಉಚಿತ ಎಂದು ಮನವಿ ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ದೇಶದಲ್ಲಿ ಶೇ 95ರಷ್ಟಿರುವ ದಲಿತರು, ಹಿಂದುಳಿದವರು, ಮಹಿಳೆಯರನ್ನು ಹೊಸ ಶಿಕ್ಷಣ ನೀತಿಯಿಂದ ಹೊರಗಿಡುವ ಹುನ್ನಾರ ನಡೆದಿದೆ. ಸ್ಥಳೀಯ ಭಾಷೆಗಳಾದ ಕನ್ನಡ, ತುಳು, ಕೊಂಕಣಿ, ತೆಲುಗು, ಉರ್ದು, ಮರಾಠಿ, ಲಂಬಾಣಿ ಸೇರಿದಂತೆ ಇತರೆ ಭಾಷೆಗಳ ಮೇಲೆ ಇಂಗ್ಲಿಷ್‌, ಸಂಸ್ಕೃತ, ಹಿಂದಿ ಹೇರುವ ಹುನ್ನಾರ ಅಡಿಗಿದೆ. ಇದು ತೀವ್ರ ಖಂಡನಾರ್ಹವಾದುದು ಎಂದು ತಿಳಿಸಿದ್ದಾರೆ.

ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಉನ್ನತ ಶಿಕ್ಷಣವನ್ನು ಕಾರ್ಪೊರೇಟ್‌ ಕಂಪನಿಗಳ ಅನುಕೂಲಕ್ಕೆ ತಕ್ಕಂತೆ ರೂಪಿಸಿ, ಅವುಗಳಿಗೆ ಲೂಟಿ ಹೊಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಭವಿಷ್ಯದಲ್ಲಿ ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲಾ, ಕಾಲೇಜುಗಳು ಬಾಗಿಲು ಮುಚ್ಚುವ ಆತಂಕ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ವಿಶ್ವವಿದ್ಯಾಲಯದ ಕುಲಪತಿಗಳು, ಶಿಕ್ಷಣ ಕ್ಷೇತ್ರದ ತಜ್ಞರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಜನಸಾಮಾನ್ಯರ ಅಭಿಪ್ರಾಯ ಪಡೆದ ನಂತರವಷ್ಟೇ ಹೊಸ ಶಿಕ್ಷಣ ನೀತಿ ಜಾರಿಗೆ ತರಬೇಕು. ಅಲ್ಲಿಯವರೆಗೆ ಯಾವುದೇ ಕಾರಣಕ್ಕೂ ಹೇರಬಾರದು ಎಂದು ಹಕ್ಕೊತ್ತಾಯ ಮಾಡಿದ್ದಾರೆ.

ಪಕ್ಷದ ಜಿಲ್ಲಾ ಕಾರ್ಯದರ್ಶಿ ಆರ್‌. ಭಾಸ್ಕರ್‌ ರೆಡ್ಡಿ, ಮುಖಂಡರಾದ ಎಂ. ಜಂಬಯ್ಯ ನಾಯಕ, ಎಂ. ಗೋಪಾಲ್‌, ಎನ್‌. ಯಲ್ಲಾಲಿಂಗ, ಎ. ಕರುಣಾನಿಧಿ, ಕಲ್ಯಾಣಯ್ಯ, ಕೆ. ರಾಮಾಂಜಿ, ಬಿ. ರಮೇಶಕುಮಾರ್‌, ಈಡಿಗರ ಮಂಜುನಾಥ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು