ಬುಧವಾರ, ಮಾರ್ಚ್ 29, 2023
28 °C

₹5 ಕೋಟಿಯಲ್ಲಿ ಹಂಪಿ ಸ್ನಾನಘಟ್ಟ ಅಭಿವೃದ್ಧಿ: ಆನಂದ್ ಸಿಂಗ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ (ವಿಜಯನಗರ): ‘₹5 ಕೋಟಿ ವೆಚ್ಚದಲ್ಲಿ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನಕ್ಕೆ ಹೊಂದಿಕೊಂಡಿರುವ ತುಂಗಭದ್ರಾ ನದಿ ಸ್ನಾನಘಟ್ಟವನ್ನು ಅಭಿವೃದ್ಧಿ ಪಡಿಸಲಾಗುವುದು’ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್‌ ತಿಳಿಸಿದರು.

ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಹಂಪಿ ವಿಶ್ವ ಪಾರಂಪರಿಕ ತಾಣ. ಅನುದಾನದ ಕೊರತೆಯಿಂದ ಸ್ನಾನಘಟ್ಟ ಅಭಿವೃದ್ಧಿ, ಮೂಲಸೌಕರ್ಯ ಅಭಿವೃದ್ಧಿ ಪಡಿಸಲು ಇದುವರೆಗೆ ಸಾಧ್ಯವಾಗಿರಲಿಲ್ಲ. ಈಗ ನಾನೇ ಪ್ರವಾಸೋದ್ಯಮ ಸಚಿವನಾಗಿದ್ದೇನೆ. ಇಲಾಖೆಯಿಂದ ₹5 ಕೋಟಿಯಲ್ಲಿ ಸ್ನಾನಘಟ್ಟ, ತುಂಗಾ ಆರತಿಗೆ ವೇದಿಕೆ, ವಿದ್ಯುತ್‌ ದೀಪಗಳ ಅಳವಡಿಕೆ, ಸ್ನಾನಘಟ್ಟದಲ್ಲಿ ಹೆಣ್ಣು ಮಕ್ಕಳಿಗೆ ಬಟ್ಟೆ ಬದಲಿಸಿಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗುವುದು. ಅದಕ್ಕಾಗಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ಕೊಟ್ಟಿರುವೆ’ ಎಂದು ಹೇಳಿದರು.
‘ಆನೆಗೊಂದಿ ಮತ್ತು ಹಂಪಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿದರೆ ತಪ್ಪಿಲ್ಲ. ಎರಡೂ ಕಡೆ ಪ್ರತ್ಯೇಕವಾಗಿ ಅಧಿಕಾರಿಗಳು ಬರುತ್ತಾರೆ. ಅಭಿವೃದ್ಧಿ ಕೆಲಸಗಳು ಇನ್ನಷ್ಟು ಚುರುಕಾಗಿ ಆಗುತ್ತವೆ. ಅಧಿಕಾರ ವಿಕೇಂದ್ರೀಕರಣ ಆದಷ್ಟು ಒಳ್ಳೆಯದೇ’ ಎಂದು ಪ್ರತಿಕ್ರಿಯಿಸಿದರು.

‘ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಸಚಿವರ ಸಭೆ ಯಶಸ್ವಿಯಾಗಿ ಕೊನೆಗೊಂಡಿದೆ. ದೇಶದ ಒಟ್ಟು 19 ಸ್ಥಳಗಳನ್ನು ‘ಟೂರಿಸಂ ಐಕಾನಿಕ್‌’ ಸ್ಥಳಗಳೆಂದು ಘೋಷಿಸಲು ತೀರ್ಮಾನಿಸಲಾಗಿದೆ. ಅದರಲ್ಲಿ ಹಂಪಿ ಕೂಡ ಸೇರಿದೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ₹400 ಕೋಟಿ ಮೊತ್ತದ ಯೋಜನೆ ರೂಪಿಸಲಾಗುತ್ತಿದೆ’ ಎಂದು ತಿಳಿಸಿದರು.

‘ನಗರದಲ್ಲಿ ಹಾದು ಹೋಗಿರುವ ವಿಜಯನಗರ ಉಪಕಾಲುವೆಗಳಿಗೆ ಚರಂಡಿ ನೀರು ಸೇರದಂತೆ ಯೋಜನೆ ರೂಪಿಸಲಾಗುತ್ತಿದೆ. ₹30 ಕೋಟಿಯಲ್ಲಿ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಸೂಚಿಸಲಾಗಿದೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು