ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರ ನಿರ್ವಹಣೆ: ನಿರ್ಲಕ್ಷ್ಯ ಬೇಡ

ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಕಟ್ಟುನಿಟ್ಟಿನ ಸೂಚನೆ
Published 15 ಏಪ್ರಿಲ್ 2024, 15:55 IST
Last Updated 15 ಏಪ್ರಿಲ್ 2024, 15:55 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಹೊಸಪೇಟೆ ನಗರ ಸೇರಿದಂತೆ ಪಟ್ಟಣ ಪ್ರದೇಶ ಮತ್ತು ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಬರ ನಿರ್ವಹಣೆಯಲ್ಲಿ ಯಾವುದೇ ಲೋಪ ಆಗಬಾರದು ಮತ್ತು ನಿರ್ಲಕ್ಷ್ಯ ವಹಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್‌ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸೋಮವಾರ ತಮ್ಮ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಈ ತಾಕೀತು ಮಾಡಿದ್ದಾರೆ.

‘ವಿಜಯನಗರ ಜಿಲ್ಲೆಯು ಈಗಾಗಲೇ ಬರಪೀಡಿತ ಜಿಲ್ಲೆ ಎಂದು ಘೋಷಿತವಾಗಿದೆ. ಬೇಸಿಗೆಯ ಬಿಸಿಲು ದಿನೇದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಡೆಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವು ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಕ್ರಮವಹಿಸಬೇಕು’ ಎಂದರು.

‘ಜಿಲ್ಲೆಯ ಕೆಲವೆಡೆ ಮಳೆಯಾದ ಬಗ್ಗೆ ವರದಿಯಾಗಿದೆ. ಆದಾಗ್ಯೂ ಜಾನುವಾರುಗಳಿಗೆ ಮೇವು ಪೂರೈಕೆಯ ವಿಷಯದ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಯಾವುದೇ ತಾಲ್ಲೂಕಿನಲ್ಲಿ ಮೇವಿನ ಕೊರತೆ ಕಂಡುಬಬಂದರೆ ಕೂಡಲೇ ಮೇವು ದಾಸ್ತಾನಿಗೆ ವ್ಯವಸ್ಥೆ ಮಾಡಬೇಕು. ನೀರಿನ ಅಬಾವ ಎದುರಾಗದಂತೆ ನೀರನ್ನು ಮಿತವಾಗಿ ಬಳಸಲು ಸಾರ್ವಜನಿಕರಿಗೆ ಜನಜಾಗೃತಿ ಮತ್ತು ಮನವರಿಕೆ ಮಾಡಬೇಕು’ ಎಂದು ತಿಳಿಸಿದರು.

ಕೊಳವೆ ಬಾವಿಗಳು: ಅನಧಿಕೃತ ಕೊಳವೆಬಾವಿಗಳು ಹಾಗೂ ವಿಫಲ ಕೊಳವೆಬಾವಿಗಳನ್ನು ಮುಚ್ಚಲು ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು.  ಗ್ರಾಮೀಣ ಪ್ರದೇಶದ ಜನರಿಗೆ ವಿಫಲ ಕೊಳವೆಬಾವಿಗಳನ್ನು ವ್ಯವಸ್ಥಿತವಾಗಿ ಮುಚ್ಚಲು ನಿರ್ದೇಶನ ನೀಡಬೇಕು. ವಿಫಲ ಕೊಳವೆಬಾವಿಗಳಿಂದ ಜನರಿಗೆ ತೊಂದರೆಯಾಗದಂತೆ ಸಂಪೂರ್ಣವಾಗಿ ಮುಚ್ಚಲು ತಿಳಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಜಿಲ್ಲೆಯಲ್ಲಿ ಯಾವುದೇ ಸ್ಥಳದಲ್ಲಿ ಕೊಳವೆಬಾವಿ ಕೊರೆಯಲು ನೋಂದಣಿ ಮಾಡಿಸುವುದನ್ನು ಕಡ್ಡಾಯಗೊಳಿಸಬೇಕು. ಅನಧಿಕೃತ ಕೊಳವೆಬಾವಿಗಳನ್ನು ಕೊರೆದರೆ ಅವರುಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ತಿಳಿಸಿದರು.

ಕೂಡ್ಲಿಗಿ ತಾಲೂಕಿನಲ್ಲಿ 525 ಕೊಳವೆಬಾವಿಗಳು, ಕೊಟ್ಟೂರಿನಲ್ಲಿ 264, ಹರಪ್ಪನಹಳ್ಳಿಯಲ್ಲಿ 1,149, ಹೂವಿನಹಡಗಲಿಯಲ್ಲಿ 507, ಹಗರಿಬೊಮ್ಮನಹಳ್ಳಿಯಲ್ಲಿ 294, ಹೊಸಪೇಟೆಯಲ್ಲಿ 292 ಕೊಳವೆಬಾವಿಗಳಿವೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸದಾಶಿವ ಪ್ರಭು ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧಾ ಜಿ., ಎಎಸ್‌ಪಿ  ಸಲೀಂ ಪಾಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT