ಹೊಸಪೇಟೆ (ವಿಜಯನಗರ): ನಗರದ ಸಂಡೂರ್ ಕ್ರಾಸ್ ಸಮೀಪ ನಿರ್ಮಾಣವಾಗುತ್ತಿರುವ ನೂತನ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ 50 ಹಾಸಿಗೆಗಳ ಕ್ರಿಟಿಕಲ್ ಕೇರ್ ಆಸ್ಪತ್ರೆ ಆಸ್ಪತ್ರೆ ನಿರ್ಮಾಣವಾಗಲಿದ್ದು, ಅದಕ್ಕೆ ಶನಿವಾರ ಸಂಸದರ ಇ.ತುಕಾರಾಂ ಮತ್ತು ಶಾಸಕ ಎಚ್.ಆರ್.ಗವಿಯಪ್ಪ ಭೂಮಿಪೂಜೆ ನೆರವೇರಿಸಿದರು.
ಸಂಸದ ತುಕಾರಾಂ ಮಾತನಾಡಿ, ಅಂದಾಜು ₹28.52 ಕೋಟಿ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗಲಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ತರುವ ಸಂಕಲ್ಪ ಮಾಡುತ್ತಿದ್ದು, ಹೊಸ ಹೊಸ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದರು.
‘ವಿಜಯನಗರ ಮತ್ತು ಬಳ್ಳಾರಿಯ ಲಕ್ಷಾಂತರ ಜನರ ಆರೋಗ್ಯ ಸುಧಾರಣೆ, ರಕ್ಷಣೆಯ ಸದುದ್ದೇಶ ಹೊಂದಿ ವಿವಿಧೆಡೆ ಆಸ್ಪತ್ರೆಗಳ ನಿರ್ಮಾಣ ಕಾರ್ಯ ಮಾಡುತ್ತಿದ್ದೇವೆ. ಇಲ್ಲಿನ ಪ್ರಾಕೃತಿಕ ಸಂಪತ್ತು ಮತ್ತು ನೀರಿನ ಸಂಪನ್ಮೂಲ ಬಳಸಿಕೊಂಡು ಮುಂದಿನ ಪೀಳಿಗೆಯು ನೆನಪಿಸುವ ಹಾಗೆ ಯೋಜನೆಗಳನ್ನು ರೂಪಿಸಿ ಅನುಷ್ಠಾನ ಮಾಡಲು ಸಂಕಲ್ಪ ಮಾಡಿದ್ದೇವೆ’ ಎಂದರು.
ಶಾಸಕ ಎಚ್.ಆರ್.ಗವಿಯಪ್ಪ ಮಾತನಾಡಿ, ಆರೋಗ್ಯವೇ ಸಂಪತ್ತು ಎಂಬುದನ್ನು ಗಮನದಲ್ಲಿಟ್ಟುಕೊಂಡು ಹೊಸಪೇಟೆ ಅಷ್ಟೇ ಅಲ್ಲ ಇಡೀ ಜಿಲ್ಲೆಯ ಜನರ ಅನುಕೂಲಕ್ಕಾಗಿ ಆಸ್ಪತ್ರೆಗಳನ್ನು ಕಟ್ಟುವ ಕಾರ್ಯ ಮಾಡುತ್ತಿದ್ದೇವೆ. ಈ ಹೊಸ ಆಸ್ಪತ್ರೆಯಿಂದ ಜಿಲ್ಲೆಯ, ನೆರೆ ಜಿಲ್ಲೆಯ ಜನತೆಗೆ ಬಹಳಷ್ಟು ಅನುಕೂಲವಾಗಲಿದೆ ಎಂದರು.
‘ಹೊಸಪೇಟೆ ನಗರದಲ್ಲಿ ಈಗಿರುವ ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಸಾರ್ವಜನಿಕರ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಕೆಲವು ಆಸ್ಪತ್ರೆಗಳನ್ನು ಮೇಲ್ದರ್ಜೇರಿಸಬೇಕು ಎಂಬುದಾಗಿ ಕೇಳಿದ್ದೇವೆ, ಆ ನಿಟ್ಟಿನಲ್ಲಿ ನಿರಂತರ ಪ್ರಯತ್ನವೂ ಸಾಗಿದೆ’ ಎಂದರು.
ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ ನಾಯ್ಕ್, ‘ಹುಡಾ’ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಮ್ ನಿಯಾಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಲ್.ಆರ್.ಶಂಕರ್ ನಾಯ್ಕ್, ನಗರಸಭೆ ಉಪಾಧ್ಯಕ್ಷ ರಮೇಶ್ ಗುಪ್ತ, ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ ಇದ್ದರು.