ಮಂಗಳವಾರ, ಜೂನ್ 28, 2022
24 °C
ಹೊಸಪೇಟೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಮೊದಲ ಕ್ರೀಡಾಕೂಟ ಆರಂಭ

ಹೊಸಪೇಟೆ: ಬಿರು ಬಿಸಿಲಲ್ಲಿ ನೌಕರರ ಕ್ರೀಡಾಸ್ಫೂರ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಬಿರು ಬಿಸಿಲಿನ ನಡುವೆ ಗುರುವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭಗೊಂಡ ಎರಡು ದಿನಗಳ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ಭಾಗದ ನೌಕರರು ಕ್ರೀಡಾ ಸ್ಫೂರ್ತಿಯಿಂದ ಪಾಲ್ಗೊಂಡರು. ಬಿಸಿಲನ್ನೂ ಲೆಕ್ಕಿಸದೆ ಉತ್ಸಾಹದಿಂದ ಕ್ರೀಡೆಗಳಲ್ಲಿ ಭಾಗವಹಿಸಿದರು.

ನೂತನ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ ಇದಾಗಿದೆ. ನೌಕರರು ಹುಮ್ಮಸ್ಸಿನಿಂದಲೇ ಪಾಲ್ಗೊಂಡರು.

ಆರು ತಾಲ್ಲೂಕುಗಳಿಂದ 335 ಜನ ಪುರುಷರು, 165 ಮಹಿಳಾ ನೌಕರರು ಭಾಗವಹಿಸಿದರು. ಮೊದಲ ದಿನ ಪುರುಷ ಮತ್ತು ಮಹಿಳಾ ವಿಭಾಗದ ಪ್ರತ್ಯೇಕ ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಟೆನ್ನಿಸ್, ಬ್ಯಾಡ್ಮಿಂಟನ್, ವೇಟ್ ಲಿಫ್ಟಿಂಗ್, ಒಳಾಂಗಣ ಆಟಗಳಾದ ಕೇರಂ, ಚದುರಂಗ, ಈಜು ಸ್ಪರ್ಧೆಗಳು ನಡೆದವು. ಹೊಸಪೇಟೆ, ಹೂವಿನಹಡಗಲಿ, ಕೊಟ್ಟೂರು, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ ಹಾಗೂ ಹರಪನಹಳ್ಳಿ ತಾಲ್ಲೂಕಿನ ಸರ್ಕಾರಿ ನೌಕರರು ಧ್ವಜವಂದನೆ ನೀಡಿದರು.

ಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಪ್ರತಿವರ್ಷ ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಪಶ್ಚಿಮ ತಾಲ್ಲೂಕಿನ ಸರ್ಕಾರಿ ನೌಕರರು ಭಾಗವಹಿಸುತ್ತಿದ್ದರು. ಮೊದಲ ಬಾರಿಗೆ ನೂತನ ಜಿಲ್ಲೆಯಲ್ಲಿ ಕ್ರೀಡಾಕೂಟ ನಡೆಯುತ್ತಿರುವುದು ಸಂತಸದ ವಿಷಯ ಎಂದರು.

ಸಂವಿಧಾನದ ಪ್ರಮುಖ ಅಂಗವಾಗಿರುವ ಕಾರ್ಯಾಂಗ ಮತ್ತು ಶಾಸಕಾಂಗ ಎರಡು ಗಾಲಿಗಳಂತೆ. ಸಮಾನವಾಗಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿವೆ. ಕೆಲಸದ ಒತ್ತಡದ ನಡುವೆಯೂ ನೌಕರರು ಕ್ರೀಡೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತಿದ್ದಾರೆ. ಸೋಲು, ಗೆಲುವಿನ ಬದಲಾಗಿ ಕ್ರೀಡಾ ಸ್ಫೂರ್ತಿ ಮತ್ತು ಮಾನಸಿಕ ನೆಮ್ಮದಿಗಾಗಿ ಕ್ರೀಡೆ ಅಗತ್ಯ ಎಂದು ಹೇಳಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಜಿ.ಮಲ್ಲಿಕಾರ್ಜುನ ಗೌಡ ಮಾತನಾಡಿ, ಆರೋಗ್ಯ ಮೇಳ, ಪರೀಕ್ಷಾ ಕಾರ್ಯ ನಿಮಿತ್ತ ಕೆಲ ಸಿಬ್ಬಂದಿಗೆ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದರೆ, ಹೆಚ್ಚಿನವರು ಪಾಲ್ಗೊಂಡಿದ್ದಾರೆ ಎಂದರು.

ನಗರಸಭೆ ಅಧ್ಯಕ್ಷೆ ಸುಂಕಮ್ಮ ಕ್ರೀಡಾಜ್ಯೋತಿ ಬೆಳಗಿಸಿದರು‌. ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಭೂದಾಖಲೆ ಇಲಾಖೆಯ ಉಪನಿರ್ದೇಶಕ ಕೇಶವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಸುನಂದಾ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಹರಿಸಿಂಗ್ ರಾಥೋಡ್, ಸರ್ಕಾರಿ ನೌಕರರ ಸಂಘದ ಗೌರವ ಅಧ್ಯಕ್ಷ ಎನ್.ಎಸ್.ರೇವಣಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಕಡ್ಲಿ ವೀರಭದ್ರೇಶ, ಪ್ರಾಂಶುಪಾಲ ವಿ‌.ಎಸ್.ಪ್ರಭಯ್ಯ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು