ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯನಗರ: ಗ್ಯಾರಂಟಿ ಸಮೀಕ್ಷೆ ಶೇ 64ರಷ್ಟು ಪೂರ್ಣ

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಮೀಕ್ಷೆ ಪ್ರಗತಿ ಪರಿಶೀಲನೆ–ಡಿ.ಸಿ ಸೂಚನೆ
Published 17 ಮಾರ್ಚ್ 2024, 15:59 IST
Last Updated 17 ಮಾರ್ಚ್ 2024, 15:59 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿ ನಡೆಸುತ್ತಿರುವ ಸಮೀಕ್ಷಾ ಪ್ರಗತಿಯು ಇದುವರೆಗೆ ವಿಜಯನಗರ ಜಿಲ್ಲೆಯಲ್ಲಿ ಶೇ 64ರಷ್ಟು ಆಗಿದೆ.

ಸಮೀಕ್ಷೆಗೆ ಕಾಲಾವಕಾಶವನ್ನು ಕೆಲವು ದಿನಗಳಿಗೆ ವಿಸ್ತರಿಸಲಾಗಿದೆ. ಈ ನಿಗದಿತ ಕಾಲಾವಧಿಯೊಳಗೆ ಈ ಸಮೀಕ್ಷೆಯು ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ವಿಡಿಯೊ ಸಂವಾದದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಐದು ಗ್ಯಾರಂಟಿ ಯೋಜನೆಗಳವಾರು ಆಗಿರುವ ಪ್ರಗತಿ ಪರಿಶೀಲಿಸಿ ಅವರು ಮಾತನಾಡಿದರು.

ಸರ್ಕಾರದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ ಮತ್ತು ಯುವನಿಧಿ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಸಮೀಕ್ಷಾ ಕಾರ್ಯ ಮುಕ್ತಾಯದ ಹಂತಕ್ಕೆ ಬಂದಿದೆ. ಈ ಯೋಜನೆಗಳು ಇದುವರೆಗೆ ಎಷ್ಟು ಜನರಿಗೆ ತಲುಪಿವೆ? ಅರ್ಹರಿದ್ದರೆ ಅಂತವರು ಯಾವ ಕಾರಣದಿಂದಾಗಿ ಈ ಯೋಜನೆಗಳ ವ್ಯಾಪ್ತಿಗೆ ಒಳಪಟ್ಟಿಲ್ಲ? ಇದಕ್ಕೆ ಏನಾದರೂ ತಾಂತ್ರಿಕ ಕಾರಣಗಳು ಇವೆಯಾ? ಎಂಬುದರ ಬಗ್ಗೆ ತಿಳಿಯುವುದು ಈ ಸಮೀಕ್ಷೆಯ ಉದ್ದೇಶವಾಗಿದೆ. ಅರ್ಹ ಇರುವ ಯಾರೂ ಸಹ ಈ ಯೋಜನೆಗಳಿಂದ ಬಿಟ್ಟು ಹೋಗಬಾರದು. ಅರ್ಹರೆಲ್ಲರೂ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಅವರು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸಪೇಟೆ ವಿಭಾಗದಲ್ಲಿ ಶಕ್ತಿ ಯೋಜನೆಯಡಿ ಜೂನ್ ಮಾಹೆಯಿಂದ ಇಲ್ಲಿಯವರೆಗೆ 2 ಕೋಟಿ 54 ಲಕ್ಷ ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದಾರೆ. ಇದುವರೆಗೆ 98 ಕೋಟಿ ರೂ. ಆದಾಯ ಬಂದಿರುತ್ತದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೊಸಪೇಟೆ ವಿಭಾಗೀಯ ಸಂಚಾರಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧಾ ಜಿ., ಆಹಾರ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ, ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌  ಶ್ರೀನಿವಾಸ, ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಅಧಿಕಾರಿ ಹಾತಪ್ಪ ಸೇರಿದಂತೆ ಇತರರು ಇದ್ದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಸಮೀಕ್ಷಾ ಕಾರ್ಯದ ಮೇಲೆ ಸೂಕ್ತ ರೀತಿಯಲ್ಲಿ ಮೇಲ್ವಿಚಾರಣೆ ನಡೆಸಬೇಕು

-ಎಂ.ಎಸ್‌.ದಿವಾಕರ್‌ ಜಿಲ್ಲಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT