ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಂಪಿ ಯೋಗ ದಿನಾಚರಣೆಗೆ 5 ಸಾವಿರ ಜನ

Last Updated 13 ಜೂನ್ 2022, 14:12 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ವಿಶ್ವಪ್ರಸಿದ್ಧ ಹಂಪಿಯಲ್ಲಿ ಜೂ. 21ರಂದು ಅರ್ಥಪೂರ್ಣವಾಗಿ ಯೋಗ ದಿನ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಹಂಪಿಯ ಎದುರು ಬಸವಣ್ಣ ಮಂಟಪ, ಕಮಲ ಮಹಲ್‌ ಪರಿಸರದಲ್ಲಿ ಸಾರ್ವಜನಿಕರಿಗೆ ಯೋಗಾಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸಲು ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಶಾಲಾ ಕಾಲೇಜು ವಿದ್ಯಾರ್ಥಿಗಳು, ಪತಂಜಲಿ ಯೋಗ ಸಮಿತಿ, ಬ್ರಹ್ಮಕುಮಾರಿ ಸಂಸ್ಥೆ, ಹಾಸ್ಟೆಲ್‌ ವಿದ್ಯಾರ್ಥಿಗಳು, ಆಶಾ–ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರು ಸೇರಿದಂತೆ ಸುಮಾರು ಐದು ಸಾವಿರ ಜನರಿಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳುವುದಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಜನ ಬಂದು ಹೋಗಲು ಖಾಸಗಿ ಹೊರತುಪಡಿಸಿ 60ಕ್ಕೂ ಹೆಚ್ಚು ಸಾರಿಗೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರಿಗೆ ಲಘು ಉಪಾಹಾರ, ಕುಡಿಯುವ ನೀರು, ಯೋಗಾಸನಕ್ಕೆ ಗ್ರೀನ್ ಮ್ಯಾಟ್, ವೇದಿಕೆ, ಧ್ವನಿವರ್ಧಕ, ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಅಗತ್ಯ ತಾತ್ಕಾಲಿಕ ಶೌಚಾಲಯ, ಸಂಪೂರ್ಣ ಸ್ವಚ್ಛತೆ ಕೈಗೊಳ್ಳಲಾಗುತ್ತದೆ. ಎಲ್ಲರಿಗೂ ಟೀ ಶರ್ಟ್‌, ಕ್ಯಾಪ್‌ ನೀಡಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಭದ್ರತೆ ಸೇರಿದಂತೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ನಟ ಅಜಯ್‌ ರಾವ್‌, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ, ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಸೇರಿದಂತೆ ಇತರೆ ಗಣ್ಯರು ಪಾಲ್ಗೊಳ್ಳುವರು. ಯೋಗ ದಿನಾಚರಣೆಯ ಮಹತ್ವ ಸಾರಲು ಜೂ.19ರಂದು ನಗರದಲ್ಲಿ ಯೋಗ ಜಾಥಾ ನಡೆಸಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತವು ವಿವಿಧ ಸಮಿತಿಗಳನ್ನು ರಚಿಸಿದೆ. ಸಮಿತಿಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಬೆಳಿಗ್ಗೆ 6ಕ್ಕೆ ಯೋಗ ಕಾರ್ಯಕ್ರಮಗಳು ಆರಂಭವಾಗಲಿದ್ದು, 6.40ರ ವರೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. 7 ಗಂಟೆಗೆ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಲಿರುವ ಭಾಷಣದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾಧಿಕಾರಿ ಮಹೇಶಬಾಬು, ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ಆಯುಷ್ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ಸುಜಾತಾ ಪಾಟೀಲ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT