ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೀವ ಬೆದರಿಕೆ; ಸಚಿವ ಆನಂದ್ ಸಿಂಗ್ ವಿರುದ್ಧ ಕ್ರಮಕ್ಕೆ ಎಂ.ಬಿ.ಪಾಟೀಲ ಆಗ್ರಹ

Last Updated 6 ಸೆಪ್ಟೆಂಬರ್ 2022, 14:22 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಪರಿಶಿಷ್ಟ ಜಾತಿಗೆ ಸೇರಿದ ಕುಟುಂಬದವರ ಮನೆಗೆ ಹೋಗಿ ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕೆ.ಪಿ.ಸಿ.ಸಿ. ಪ್ರಚಾರ ಸಮಿತಿ ಅಧ್ಯಕ್ಷರೂ ಆದ ಶಾಸಕ ಎಂ.ಬಿ. ಪಾಟೀಲ ಆಗ್ರಹಿಸಿದರು.

ಆನಂದ್‌ ಸಿಂಗ್‌ ಅವರು ಮಾಡಿರುವುದು ಸರಿನಾ? ಅವರದೇ ಸರ್ಕಾರ ಇದೆ ಎಂದು ಪ್ರಕರಣ ಮುಚ್ಚಿ ಹಾಕುವ ಕೆಲಸ ಮಾಡುತ್ತಾರೆ. ಅವರ ಪಕ್ಷದವರು ಎಲ್ಲ ಕಡೆ ಇದನ್ನೇ ಮಾಡುತ್ತಿದ್ದಾರೆ. ಅನೇಕ ಸಚಿವರ ವಿರುದ್ಧ ಗಂಭೀರ ಸ್ವರೂಪದ ಭ್ರಷ್ಟಾಚಾರ ಪ್ರಕರಣಗಳಿವೆ. ಯಾರ ವಿರುದ್ಧವೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದರು.

ವಿಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನವರು ಅಡ್ಜಸ್ಟಮೆಂಟ್‌ ರಾಜಕೀಯ ಮಾಡುತ್ತಿಲ್ಲ. ಬರುವ ಚುನಾವಣೆಯಲ್ಲಿ ಹೊಸಪೇಟೆ ಸೇರಿದಂತೆ ವಿಜಯನಗರ ಜಿಲ್ಲೆಯ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಕೇಂದ್ರ, ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿರುವೆ. ಮೊದಲ ಹಂತದಲ್ಲಿ 18 ಜಿಲ್ಲೆಗಳಲ್ಲಿ ಪ್ರವಾಸ ಮಾಡುತ್ತಿರುವೆ. ಮಠ ಮಾನ್ಯ, ದೇವಸ್ಥಾನ, ದರ್ಗಾ, ಚರ್ಚ್‌ ಸೇರಿದಂತೆ ಎಲ್ಲಕ್ಕೂ ಭೇಟಿ ಕೊಡುತ್ತಿರುವೆ. ಈ ಸಲ ಶೇ 50ಕ್ಕೂ ಹೆಚ್ಚು ಲಿಂಗಾಯತರ ಮತಗಳು ಕಾಂಗ್ರೆಸ್‌ಗೆ ಬೀಳಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಅಭಿವೃದ್ಧಿ ಶೂನ್ಯವಾಗಿದೆ. ಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ 130ರಿಂದ 140 ಸ್ಥಾನಗಳಲ್ಲಿ ಗೆಲ್ಲಲಿದೆ. ಉದ್ಯೋಗ ಅರಸಿಕೊಂಡು ನಮ್ಮವರು ಬಿಹಾರ, ಉತ್ತರ ಪ್ರದೇಶಕ್ಕೆ ಹೋಗುವುದಿಲ್ಲ. ಇಡೀ ವಿಶ್ವಕ್ಕೆ ಕರ್ನಾಟಕ ಮಾದರಿಯಾಗಿದೆ. ಆದರೆ, ಮುಖ್ಯಮಂತ್ರಿಯವರು ಕರ್ನಾಟಕವನ್ನು ‘ಉತ್ತರ ಪ್ರದೇಶ’ ಮಾದರಿ ಮಾಡುತ್ತೇವೆ ಎಂದು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.

ಪ್ರಚಾರ ಸಮಿತಿ ಅಧ್ಯಕ್ಷರಾದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿರುವ ಎಂ.ಬಿ. ಪಾಟೀಲ ಅವರಿಗೆ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಕ್ರೇನ್‌ನಿಂದ ಬೃಹತ್‌ ಹಾರ ಹಾಕಿ ಸ್ವಾಗತಿಸಲಾಯಿತು.

ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಎಲ್‌.ಬಿ.ಪಿ. ಭೀಮ ನಾಯ್ಕ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶಿವಯೋಗಿ, ಮುಖಂಡರಾದ ವೆಂಕಟರಾವ ಘೋರ್ಪಡೆ, ಮಹಮ್ಮದ್‌ ಇಮಾಮ್‌ ನಿಯಾಜಿ, ರಾಜಶೇಖರ್‌ ಹಿಟ್ನಾಳ್‌, ಕುರಿ ಶಿವಮೂರ್ತಿ, ಗುಜ್ಜಲ್‌ ರಘು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿನಾಯಕ ಶೆಟ್ಟರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT