ಗುರುವಾರ , ಮಾರ್ಚ್ 4, 2021
25 °C
ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ

ಬೆಲೆ ಏರಿಕೆಗೆ ಖಂಡನೆ: ಹೊಸಪೇಟೆಯಲ್ಲಿ ಪ್ರಧಾನಿ ಮೋದಿ ಪ್ರಕೃತಿ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯನಗರ (ಹೊಸಪೇಟೆ): ಬಂಡವಾಳಷಾಹಿಗಳಿಗೆ ಅನುಕೂಲ ಮಾಡಿಕೊಡಲು ಅಗತ್ಯ ವಸ್ತುಗಳ ಕಾಯ್ದೆಗೆ ತಿದ್ದುಪಡಿ ತಂದು ಎಲ್ಲ ರೀತಿಯ ವಸ್ತುಗಳ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿದ್ದಾರೆ ಎಂದು ಆರೋಪಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್‌ (ಡಿವೈಎಫ್‌ಐ) ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

ನಗರದ ಶ್ರಮಿಕ ಭವನದ ಎದುರು ಸೇರಿದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಮೋದಿ ಪ್ರತಿಕೃತಿ ಸುಟ್ಟರು. ನಂತರ ಅಲ್ಲಿಂದ ಪ್ರಮುಖ ಮಾರ್ಗಗಳ ಮೂಲಕ ತಾಲ್ಲೂಕು ಕಚೇರಿ ವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದರು. ರಾಷ್ಟ್ರಪತಿಯವರಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ಸಲ್ಲಿಸಿದರು.

ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ಕೃಷಿ ಕಾಯ್ದೆ ರದ್ದುಗೊಳಿಸುವಂತೆ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಮೂರು ತಿಂಗಳಿಂದ ವಿವಿಧ ರಾಜ್ಯದ ರೈತರು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ಸ್ಪಂದಿಸುತ್ತಿಲ್ಲ. ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಮನವಿಯಲ್ಲಿ ಆರೋಪಿಸಿದರು.

ರೈತರ ಹೋರಾಟಕ್ಕೆ ಸ್ಪಂದಿಸುವುದರ ಬದಲು ರೈತರನ್ನು ದೇಶದ್ರೋಹಿಗಳೆಂದು ಹೀಯಾಳಿಸುತ್ತಿರುವುದು ಖಂಡನೀಯ. ಹೋರಾಟ ಬೆಂಬಲಿಸಿದ ದಿಶಾ ರವಿ ಸೇರಿದಂತೆ ಅನೇಕರನ್ನು ಬಂಧಿಸಿ ಜೈಲಿಗಟ್ಟಿರುವುದು ನ್ಯಾಯಯುತ ಹೋರಾಟವನ್ನು ಹತ್ತಿಕ್ಕುವ ತಂತ್ರ. ಆದರೆ, ಅದಕ್ಕೆ ಯಾರೂ ಜಗ್ಗುವುದಿಲ್ಲ. ಬೇಡಿಕೆಗಳು ಈಡೇರುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು.

ದೇಶದಾದ್ಯಂತ ನಿರುದ್ಯೋಗ ಸಮಸ್ಯೆ ಮಿತಿ ಮೀರಿದೆ. ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡಬೇಕು. ಎಪಿಎಂಸಿ, ವಿದ್ಯುತ್‌ ಶಕ್ತಿ ತಿದ್ದುಪಡಿ ಕಾಯ್ದೆ ವಾಪಸ್‌ ಪಡೆಯಬೇಕು. ರೈಲ್ವೆ ಖಾಸಗೀಕರಣ ಕೈಬಿಡಬೇಕು. ಹೊಸ ಶಿಕ್ಷಣ ನೀತಿ ಜಾರಿಗೆ ತರಬಾರದು. ಮಹಿಳೆಯರು, ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ವಿ. ಸ್ವಾಮಿ, ತಾಲ್ಲೂಕು ಅಧ್ಯಕ್ಷ ಈಡಿಗರ ಮಂಜುನಾಥ, ಕಾರ್ಯದರ್ಶಿ ಕಲ್ಯಾಣಯ್ಯ, ಉಪಾಧ್ಯಕ್ಷ ಬಿ. ಮಹೇಶ, ಅಲ್ತಾಫ್‌, ರೆಹಮಾನ್‌, ಖಾಲಿಫ್‌, ಬಂಡೆ ತಿರುಕಪ್ಪ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು