ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹5 ಕೋಟಿಯಲ್ಲಿ ರಂಗಮಂದಿರ ನಿರ್ಮಾಣ

ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಹೇಳಿಕೆ
Last Updated 27 ಅಕ್ಟೋಬರ್ 2022, 16:30 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ನಗರದಲ್ಲಿ ₹5 ಕೋಟಿ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ತಿಳಿಸಿದರು.

ಗುರುವಾರ ನಗರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ತಿಳಿಸಿದರು. ಕಲೆ, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಗರದಲ್ಲಿ ಸ್ಥಳದ ಕೊರತೆ ಇದೆ ಎಂದು ಸಾಹಿತ್ಯ ಪರಿಷತ್ತಿನ ಪ್ರತಿನಿಧಿಗಳು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಕಲ್ಯಾಣ ಕರ್ನಾಟಕ ಅಭಿವೃದ್ದಿ ನಿಗಮದಿಂದ ₹2 ಕೋಟಿ ಮತ್ತು ಖನಿಜ ಪ್ರತಿಷ್ಠಾನ ನಿಧಿಯಿಂದ ₹3 ಕೋಟಿ ರಂಗಮಂದಿರ ನಿರ್ಮಾಣಕ್ಕೆ ಮೀಸಲಿರಿಸಲಾಗಿದೆ. ರಂಗಮಂದಿರ ನಿರ್ಮಾಣಗೊಂಡ ನಂತರ ಎಲ್ಲ ಕಾರ್ಯಕ್ರಮಗಳಿಗೂ ಅವಕಾಶ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯೋತ್ಸವವನ್ನು ಈ ಸಲ ಅರ್ಥಪೂರ್ಣವಾಗಿ ಆಚರಿಸಲಾಗುವುದು. ನ. 1ರಂದು ಬೆಳಿಗ್ಗೆ 9ಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಭುವನೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಅವರ ಭಾಷಣದ ನಂತರ ವಿವಿಧ ಶಾಲಾ, ಕಾಲೇಜು ಹಾಗೂ ಪೊಲೀಸರು, ಆಶಾ, ಅಂಗನವಾಡಿ, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್, ಪೌರಕಾರ್ಮಿಕರಿಂದ ಪಥ ಸಂಚಲನ ನಡೆಯಲಿದೆ ಎಂದು ತಿಳಿಸಿದರು.

ಅಂದು ಬೆಳಿಗ್ಗೆ ಹಂಪಿ ವಿರೂಪಾಕ್ಷೇಶ್ವರ ದೇವಸ್ಥಾನದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ಕನ್ನಡ ಜ್ಯೋತಿ ಬರಲಿದೆ. ಸಾಧಕ ಸಾಹಿತಿಗಳಿಗೆ ಸನ್ಮಾನಿಸಲಾಗುವುದು. ನಗರದ ಮಹಾತ್ಮ ಗಾಂಧಿ ವೃತ್ತದ ಬಳಿ ಕನ್ನಡ ಪುಸ್ತಕ ಮಾರಾಟ ತೆರೆಯಲಾಗುವುದು. ಒಂದು ವಾರ ಚಲನಚಿತ್ರ ಮಂದಿರಗಳಲ್ಲಿ ಕನ್ನಡ ಸಿನಿಮಾ ಪ್ರದರ್ಶನ ಮಾಡಬೇಕೆಂದು ಸೂಚಿಸಿದ ಅವರು, ಶಾಲಾ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಪ್ರಬಂಧ, ಚಿತ್ರಕಲೆ ಸ್ಪರ್ಧೆ ಏರ್ಪಡಿಸಬೇಕೆಂದು ತಿಳಿಸಿದರು.

ಕನ್ನಡ ಬಳಸದವರ ವಿರುದ್ಧ ಕ್ರಮಕ್ಕೆ ಸೂಚನೆ
‘ಎಲ್ಲ ಅಂಗಡಿ ಮುಂಗಟ್ಟು, ಸಂಘ ಸಂಸ್ಥೆಗಳವರು ಕನ್ನಡದಲ್ಲಿಯೇ ನಾಮಫಳಕ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾಧಿಕಾರಿ ಅನಿರುದ್ಧ್‌ ಶ್ರವಣ್‌ ಪಿ. ಅವರು ನಗರಸಭೆ ಪೌರಾಯುಕ್ತ ಮನೋಹರ್‌ ನಾಗರಾಜ ಅವರಿಗೆ ಸೂಚಿಸಿದರು.

ಈ ಕುರಿತು ಕನ್ನಡಪರ ಸಂಘಟನೆಗಳವರು ಜಿಲ್ಲಾಧಿಕಾರಿ ಗಮನಕ್ಕೆ ತಂದಾಗ ಅವರು ಮೇಲಿನಂತೆ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT