ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Republic Day: 405 ಅಡಿ ಎತ್ತರದ ಧ್ವಜಸ್ತಂಭದಲ್ಲಿ ತ್ರಿವರ್ಣ ಧ್ವಜಾರೋಹಣ

ವಿಜಯನಗರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ₹130 ಕೊಟಿ
Last Updated 26 ಜನವರಿ 2023, 8:12 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ್‌ ಜೊಲ್ಲೆ ಅವರು ಗುರುವಾರ ನಗರದ ಡಾ. ಪುನೀತ್‌ ರಾಜಕುಮಾರ್‌ ಜಿಲ್ಲಾ ಕ್ರೀಡಾಂಗಣದ 405 ಅಡಿ ಎತ್ತರದ ಧ್ವಜಸ್ತಂಭದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದರು.

ಅನಂತರ ಜಿಲ್ಲಾಡಳಿತದಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಹಾರಿಸಿದರು. ಬಳಿಕ ಗೌರವ ವಂದನೆ ಸ್ವೀಕರಿಸಿದರು. ಪರೇಡ್ ಕಮಾಂಡರ್ ಶಶಿಕುಮಾರ್ ನೇತೃತ್ವದಲ್ಲಿ ಆಕರ್ಷಕ ಪಥ ಸಂಚಲನ ನಡೆಯಿತು. ಪೊಲೀಸ್ ಪಡೆ, ಮಹಿಳಾ ಪೊಲೀಸರು, ಗೃಹರಕ್ಷಕ ದಳ, ವಿಜಯನಗರ ಕಾಲೇಜಿನ ಎನ್‌ಸಿಸಿ ತಂಡ, ಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಸಿಸಿ ತಂಡ, ಭಾರತ ಸೇವಾದಳ, ಸ್ಕೌಟ್ಸ್‌ ಮತ್ತು ಗೈಡ್ಸ್, ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರು, ನರೇಗಾ ಗ್ರಾಮ ಕಾಯಕ ಪಡೆ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಪಥಸಂಚಲನದಲ್ಲಿ ಹೆಜ್ಜೆ ಹಾಕಿದರು.

ಬಳಿಕ ಮಾತನಾಡಿದ ಸಚಿವೆ ಶಶಿಕಲಾ, ನೂತನ ವಿಜಯನಗರ ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳಿಗೆ ವಿವಿಧ ಯೋಜನೆಗಳನ್ನು ಜಾರಿಗೆ ತರಲು ಉದ್ದೇಶಿಸಲಾಗಿದ್ದು, ಅದಕ್ಕಾಗಿ ಜಿಲ್ಲಾ ಖನಿಜ ನಿಧಿಯಿಂದ ₹130 ಕೋಟಿ ಅನುದಾನ ಕಾಯ್ದಿರಿಸಲಾಗಿದೆ ಎಂದು ಹೇಳಿದರು.

ನೂತನ ಜಿಲ್ಲೆ ಗತವೈಭವದ ಇತಿಹಾಸ ಹೊಂದಿದೆ. ವಿವಿಧ ಇಲಾಖೆಗಳಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಐತಿಹಾಸಿಕ, ಪೌರಾಣಿಕ ಹಿನ್ನೆಲೆಯುಳ್ಳ ನಮ್ಮ ಈ ಜಿಲ್ಲೆಗೆ ರಾಜ್ಯದಲ್ಲಿ ವಿಶೇಷ ಸ್ಥಾನವಿದೆ. ಕೃಷಿ, ಗಣಿ, ಪ್ರವಾಸೋದ್ಯಮ ಕ್ಷೇತ್ರಗಳ ಹಿನ್ನೆಲೆಯಲ್ಲಿಯೂ ಈ ಜಿಲ್ಲೆಗೆ ಮಹತ್ವದ ಸ್ಥಾನವಿದೆ. ಜಗತ್ತಿನಲ್ಲಿಯೇ ಕೆಲವೇ ಕೆಲವು ವಿಶ್ವಪಾರಂಪರಿಕ ತಾಣಗಳಲ್ಲಿ ಹಂಪಿಯ ಸ್ಮಾರಕಗಳು ಇರುವುದು ಈ ನಮ್ಮ ನೂತನ ಜಿಲ್ಲೆಯ ಹಿರಿಮೆ ಎಂದರು.

ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿ ಮೆರೆದ ಹಂಪಿ ಇಂದಿಗೂ ತನ್ನ ಮಹತ್ವ ಉಳಿಸಿಕೊಂಡಿದೆ. ಕಳೆದ ವರ್ಷ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯನ ಪಟ್ಟಾಭಿಷೇಕವನ್ನು ಬಿಂಬಿಸುವ ಸ್ತಬ್ಧ ಚಿತ್ರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅದು ಎಲ್ಲರೂ ಹೆಮ್ಮೆಪಡುವ ವಿಷಯ ಎಂದು ಹೇಳಿದರು.

ಜ. 26ರಂದು ಭಾರತದ ಸಂವಿಧಾನ ಜಾರಿಗೆ ಬಂತು. ಇದೇ ದಿನ ಗಣರಾಜ್ಯ ಎಂದು ಘೋಷಿಸಲಾಯಿತು. ಭಾರತದ ತ್ರಿವರ್ಣ ಧ್ವಜ ಸ್ವೀಕರಿಸಲಾಯಿತು. ನಮ್ಮ ದೇಶದ ರಾಷ್ಟ್ರಧ್ವಜ, ರಾಷ್ಟ್ರಗೀತೆ, ರಾಷ್ಟ್ರಲಾಂಛನ, ರಾಷ್ಟ್ರದ ಅಸ್ತಿತ್ವ ಹಾಗೂ ಸಾರ್ವಭೌಮತ್ವವನ್ನು ಸಾರುತ್ತಿವೆ. ಅವುಗಳಿಗೆ ಗೌರವ ದೊರಕಿಸಿಕೊಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ ಎಂದರು.

ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್‌., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರ್ಷಲ್‌ ಭೋಯರ್‌, ನಗರಸಭೆ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಎಲ್‌.ಎಸ್. ಆನಂದ್‌, ಸ್ಥಾಯಿ ಸಮಿತಿ ಅಧ್ಯಕ್ಷ ತಾರಿಹಳ್ಳಿ ಜಂಬುನಾಥ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಕೆ., ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಇದ್ದರು.

‘ಶೀಘ್ರ ಮಹಿಳಾ ಪೊಲೀಸ್‌ ಠಾಣೆ’
‘ಮಹಿಳಾ ಪೊಲೀಸ್‌ ಠಾಣೆ ಆರಂಭಿಸಲು ಜಿಲ್ಲಾ ಖನಿಜ ನಿಧಿಯಿಂದ ₹50 ಲಕ್ಷ ತೆಗೆದಿರಿಸಲಾಗಿದೆ. ಹಂಪಿ ಉತ್ಸವದ ಮುಗಿದ ನಂತರ ಕೆಲಸ ಆರಂಭಿಸಲಾಗುವುದು. ಜಾಗೃತ ಪೊಲೀಸ್‌ ದಳಕ್ಕೂ ಬೇಡಿಕೆ ಇದ್ದು, ಅದನ್ನು ಸಹ ಪ್ರಾರಂಭಿಸಲಾಗುವುದು’ ಎಂದು ಸಚಿವೆ ಶಶಿಕಲಾ ತಿಳಿಸಿದರು.

105 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಆನಂದ್‌ ಸಿಂಗ್‌ ಧ್ವಜಾರೋಹಣ
ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ನಗರದ ಡಾ. ಪುನೀತ್‌ ರಾಜಕುಮಾರ್‌ ವೃತ್ತದಲ್ಲಿ 105 ಅಡಿ ಎತ್ತರದ ಧ್ವಜ ಸ್ತಂಭದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿದರು. ‘ಗಣರಾಜ್ಯೋತ್ಸವ ನಮ್ಮೆಲ್ಲರಿಗೂ ಹೆಮ್ಮೆಯ ದಿನ. ಅದನ್ನು ಉಳಿಸಿಕೊಂಡು ಹೋಗಬೇಕು. ಅದೇ ರೀತಿ ಜ. 27ರಿಂದ 29ರ ವರೆಗೆ ನಡೆಯಲಿರುವ ಹಂಪಿ ಉತ್ಸವದಲ್ಲಿ ಪ್ರತಿಯೊಬ್ಬರೂ ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT