ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಠಿಣ ಪರಿಶ್ರಮವೇ ಸಾಧನೆಗೆ ಮಾರ್ಗ’

Last Updated 7 ಏಪ್ರಿಲ್ 2021, 12:56 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ‘ಸರ್ಕಾರಿ ಶಾಲೆಯಲ್ಲಿ ಓದಿದವರು ಇಂದು ಅನೇಕ ಉನ್ನತ ಹುದ್ದೆಗಳಲ್ಲಿದ್ದಾರೆ. ಯಾವ ಶಾಲೆಯಲ್ಲಿ ಓದುತ್ತೇವೆ ಎನ್ನುವುದು ಮುಖ್ಯವಲ್ಲ. ಕಠಿಣ ಪರಿಶ್ರಮವೇ ನಮ್ಮ ಸಾಧನೆಗೆ ಮಾರ್ಗವಾಗುತ್ತದೆ’ ಎಂದು ಉಪವಿಭಾಗಾದಿಕಾರಿ ಸಿದ್ದರಾಮೇಶ್ವರ ತಿಳಿಸಿದರು.

ಬಳ್ಳಾರಿಯ ಸನ್ಮಾರ್ಗ ಗೆಳೆಯ ಬಳಗ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪೊಲೀಸ್‌ ಇಲಾಖೆಯ ಸಹಭಾಗಿತ್ವದಲ್ಲಿ ತಾಲ್ಲೂಕಿನ ಕಾಕುಬಾಳು ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಪೂರ್ವ ತಯಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

‘ಪ್ರತಿಯೊಬ್ಬ ಮಕ್ಕಳಲ್ಲಿಯೂ ಪ್ರತಿಭೆ ಇರುತ್ತದೆ. ಸೂಕ್ತ ವೇದಿಕೆ ಸಿಕ್ಕಾಗ ಅದು ಹೊರಗಡೆ ಬರುತ್ತದೆ. ಸರ್ಕಾರಿ ಶಾಲೆಯಲ್ಲಿ ಓದುವವರು ಯಾರಿಗೂ ಕಮ್ಮಿ ಇಲ್ಲ. ಕಠಿಣ ಪರಿಶ್ರಮ ವಹಿಸಿದರೆ ಎಲ್ಲರೂ ಉನ್ನತ ಸ್ಥಾನಕ್ಕೆ ಹೋಗಬಹುದು’ ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಮ್ಮ ಮಾತನಾಡಿ, ‘ಕೊರೊನಾದಂತಹ ಕಷ್ಟ ಕಾಲದಲ್ಲಿ ವಿದ್ಯಾರ್ಥಿಗಳ ಅಭ್ಯಾಸ ಕಷ್ಟಕರವಾಗಿದೆ. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅನೇಕ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ, ಎಲ್ಲವನ್ನೂ ಮೀರಿ ಅವರು ಪರಿಶ್ರಮದಿಂದ ಅಭ್ಯಾಸ ಮಾಡುತ್ತಿರುವುದು ಖುಷಿಯ ವಿಚಾರ’ ಎಂದು ಹೇಳಿದರು.

ತಹಶೀಲ್ದಾರ್ ಎಚ್. ವಿಶ್ವನಾಥ್ ಮಾತನಾಡಿ, ‘ನಾನು, ಎಸಿ ಸಾಹೇಬ್ರು ಸೇರಿದಂತೆ ಅನೇಕ ಜನ ಅಧಿಕಾರಿಗಳು ಸರ್ಕಾರಿ ಶಾಲೆಯಲ್ಲಿ ಓದಿದ್ದೇವೆ. ಎಲ್ಲಿಯೇ ಓದಿದರೂ ಶ್ರದ್ಧೆಯಿಂದ ಅಭ್ಯಾಸ ಮಾಡಿ, ಮುಂದೆ ಬರಬೇಕು’ ಎಂದು ತಿಳಿಸಿದರು.

120 ಜನ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್, ಪೆನ್ಸಿಲ್, ಮಾಸ್ಕ್ ವಿತರಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾದ ಪುರುಷೋತ್ತಮ್, ಬಸವರಾಜ್, ಸುನೀಲ್ ಕುಮಾರ್, ಪಟ್ಟಣ ಠಾಣೆಯ ಪೊಲೀಸ್‌ ಇನ್‌ಸ್ಪೆಕ್ಟರ್‌ ಎಂ. ಶ್ರೀನಿವಾಸ್, ಶಾಲೆಯ ಮುಖ್ಯಶಿಕ್ಷಕ ರಾಮಚಂದ್ರ, ಬಿಆರ್‌ಸಿ ಮಲ್ಲೇಶಪ್ಪ, ಸನ್ಮಾರ್ಗ ಗೆಳೆಯರ ಬಳಗದ ಚಂದ್ರಶೇಖರ ಆಚಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT