ಶನಿವಾರ, ಸೆಪ್ಟೆಂಬರ್ 25, 2021
22 °C

ಹೊಸಪೇಟೆ: ಎರಡು ಸೆಮಿಸ್ಟರ್‌ ಪರೀಕ್ಷೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಪೇಟೆ (ವಿಜಯನಗರ): ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾ, ಫಾರ್ಮಸಿ ಮತ್ತು ಸ್ನಾತಕೋತ್ತರ ಪದವಿಯ ಎರಡು ಸೆಮಿಸ್ಟರ್‌ಗಳ ಪರೀಕ್ಷೆಯನ್ನು ಒಟ್ಟಿಗೆ ನಡೆಸುವ ನಿರ್ಧಾರವನ್ನು ಸರ್ಕಾರ ಕೈಬಿಡಬೇಕೆಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮೊಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಜೇಶನ್‌ (ಎಐಡಿಎಸ್‌ಒ) ಕಾರ್ಯಕರ್ತರು ಮಂಗಳವಾರ ನಗರದ ರಾಣಿಪೇಟೆಯಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ಅವರ ಕಚೇರಿ ಹಾಗೂ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಬಳಿಕ ತಹಶೀಲ್ದಾರ್‌ ಮೂಲಕ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ ನಡೆಸಿದರೆ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಹಿಂದಿನ ಸೆಮಿಸ್ಟರ್‌ ಪರೀಕ್ಷೆ ಕೈಬಿಟ್ಟು, ಆಂತರಿಕ ಮೌಲ್ಯಮಾಪನ ಅಥವಾ ಬೇರೆ ವೈಜ್ಞಾನಿಕ ವಿಧಾನದ ಮೂಲಕ ವಿದ್ಯಾರ್ಥಿಗಳ ಮೌಲ್ಯಮಾಪನ ನಡೆಸಿ, ತೇರ್ಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.

ಎರಡು ಸೆಮಿಸ್ಟರ್‌ ಪರೀಕ್ಷೆ ನಡೆಸುವುದರ ಬಗ್ಗೆ ಸಂಘಟನೆಯು ರಾಜ್ಯದಾದ್ಯಂತ 45,000ಕ್ಕೂ ಅಧಿಕ ವಿದ್ಯಾರ್ಥಿಗಳ ಸಮೀಕ್ಷೆ ನಡೆಸಿದೆ. ಶೇ 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಿಂದಿನ ಸೆಮಿಸ್ಟರ್‌ ಪರೀಕ್ಷೆ ಕೈಬಿಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಶಿಕ್ಷಣ ತಜ್ಞರು, ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರ ಅಭಿಪ್ರಾಯವೂ ಇದೇ ಆಗಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತವಾಗಿ ಲಸಿಕೆ ನೀಡುವುದಕ್ಕೂ ಮುನ್ನ ಯಾವುದೇ ಕಾರಣಕ್ಕೂ ಆಫ್‌ಲೈನ್‌ ತರಗತಿಗಳನ್ನು ಆರಂಭಿಸಬಾರದು. ಇಲ್ಲವಾದಲ್ಲಿ ಸರ್ಕಾರವೇ ವಿದ್ಯಾರ್ಥಿಗಳನ್ನು ಗಂಡಾಂತರಕ್ಕೆ ದೂಡಿದಂತಾಗುತ್ತದೆ ಎಂದು ಎಚ್ಚರಿಸಿದರು.

ಸಂಘಟನೆಯ ರಾಜ್ಯ ಸಮಿತಿ ಸದಸ್ಯ ಜೆ.ಪಿ. ರವಿಕಿರಣ್‌, ಶೇಷಾದ್ರಿ, ಅಭಿಷೇಕ್‌, ನಿಖಿಲ್‌ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು