ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

26,710 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ

ದ್ವಿತೀಯ ಪಿಯು ಪರೀಕ್ಷೆ ಇಂದಿನಿಂದ; ನಕಲು ಮುಕ್ತ ಪರೀಕ್ಷೆಗೆ ಕಟ್ಟುನಿಟ್ಟಿನ ಕ್ರಮ
Last Updated 28 ಫೆಬ್ರುವರಿ 2019, 20:15 IST
ಅಕ್ಷರ ಗಾತ್ರ

ವಿಜಯಪುರ: ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್‌ 1ರಿಂದ ಆರಂಭಗೊಳ್ಳಲಿದ್ದು, ಜಿಲ್ಲೆಯಾದ್ಯಂಥ 26,710 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ.

ಪಾರದರ್ಶಕ, ನಕಲು ಮುಕ್ತ ಪರೀಕ್ಷೆ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಪೂರೈಸಿಕೊಂಡಿದ್ದು, ಇಲಾಖೆಯ ಪರೀಕ್ಷಾ ನಿಯಮ ಪ್ರಕಾರ ಹಲವು ಕಠಿಣ ಕ್ರಮ ಕೈಗೊಂಡಿದೆ.

‘ವಿಜಯಪುರ ಜಿಲ್ಲೆಯಲ್ಲಿ ಒಟ್ಟು 41 ಪರೀಕ್ಷಾ ಕೇಂದ್ರಗಳಿವೆ. ಈ ಕೇಂದ್ರಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಎಲ್ಲ ಕೇಂದ್ರಗಳಲ್ಲೂ ಸಿ.ಸಿ.ಟಿವಿ ಕ್ಯಾಮೆರಾ ಕಣ್ಗಾವಲು ಕಡ್ಡಾಯಗೊಳಿಸಲಾಗಿದೆ.

ಪ್ರತಿ ಕೇಂದ್ರಕ್ಕೆ ಬೇರೆ ಜಿಲ್ಲೆಯ ಇಬ್ಬರು ಉಪನ್ಯಾಸಕರನ್ನು ವಿಶೇಷ ಜಾಗೃತ ದಳದ ಸದಸ್ಯರನ್ನಾಗಿ ಇಲಾಖೆಯಿಂದ ನೇಮಕ ಮಾಡಲಾಗಿದೆ. ಇದರ ಜತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳಿಗೆ ಹಠಾತ್ ಭೇಟಿ ನೀಡುವ ಮೂಲಕ ವರದಿ ಸಲ್ಲಿಸಲಿದ್ದಾರೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್‌.ವೈ.ಅಮಾತೆ ‘ಪ್ರಜಾವಾಣಿ’ಗೆ ತಿಳಿಸಿದರು.

‘ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಎಲ್ಲ ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಸಂದರ್ಭದಲ್ಲೂ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ’ ಎಂದು ಹೇಳಿದರು.

‘ಪ್ರಥಮ ಬಾರಿಗೆ 23,473 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರೆ, 2313 ವಿದ್ಯಾರ್ಥಿಗಳು ಮತ್ತೊಮ್ಮೆ, 915 ಜನರು ಖಾಸಗಿಯಾಗಿ ಪರೀಕ್ಷೆ ಬರೆಯುತ್ತಿದ್ದಾರೆ. ಕಲಾ ವಿಭಾಗದಲ್ಲಿ 14,668 ವಿದ್ಯಾರ್ಥಿಗಳಿದ್ದರೆ, ವಿಜ್ಞಾನ ವಿಭಾಗದಲ್ಲಿ 7247 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ 4786 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 26,710 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ’ ಎಂದು ಡಿಡಿಪಿಯು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಡಿಡಿಪಿಯು ಕಿವಿಮಾತು..!
‘ಪರೀಕ್ಷೆಯನ್ನು ಪಾರದರ್ಶಕವಾಗಿ, ನಕಲು ಮುಕ್ತವಾಗಿ ನಡೆಸಲಾಗುವುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಧೈರ್ಯದಿಂದ, ಅಷ್ಟೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ವರ್ಷವಿಡಿ ಅಧ್ಯಯನ ಮಾಡಿದ್ದನ್ನು ಮನನ ಮಾಡಿಕೊಳ್ಳಬೇಕು. ನಿಮ್ಮ ಮೇಲೆ ನಿಮಗೆ ನಂಬಿಕೆ ಇರಲಿ’ ಎಂದು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿ ಸಮೂಹಕ್ಕೆ ಡಿಡಿಪಿಯು ಎಸ್‌.ವೈ.ಅಮಾತೆ ಕಿವಿಮಾತು ಹೇಳಿದರು.

‘ಪ್ರಶ್ನೆಗಳಿಗೆ ನೇರವಾಗಿ, ಸ್ಪಷ್ಟವಾಗಿ ಉತ್ತರ ಬರೆಯಿರಿ. ಪರೀಕ್ಷಾ ಸಮಯದಲ್ಲಿ ಕೇಳಿ ಬರುವ ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ. ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಸಮಯ ನೀಡಲಾಗುವುದು. ಹೀಗಾಗಿ ಮೊದಲಿಗೆ ನಿರಾಳ ಮನಸ್ಸಿನಿಂದ ಪ್ರಶ್ನೆಪತ್ರಿಕೆ ಓದಿ, ಪ್ರಶ್ನೆಗಳನ್ನು ಸರಿಯಾಗಿ ಅರ್ಥೈಸಿಕೊಂಡು ಉತ್ತರ ಬರೆಯಲು ಆರಂಭಿಸಬೇಕು. ಕೊನೆಯ 10 ನಿಮಿಷ ನೀವು ಬರೆದ ಉತ್ತರಗಳನ್ನು ಮತ್ತೊಮ್ಮೆ ಓದಿ. ತಪ್ಪುಗಳಿದ್ದರೆ ಸರಿಪಡಿಸಿ’ ಎಂಬ ಸಲಹೆಯನ್ನು ನೀಡಿದ್ದಾರೆ.

ಸಂಪರ್ಕ ಸಂಖ್ಯೆ: 08352–240257

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT