ಶುಕ್ರವಾರ, ಡಿಸೆಂಬರ್ 2, 2022
20 °C
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಶ ಚಹ್ವಾಣ

ಉಚಿತ ಆರೋಗ್ಯ ಸೇವೆಗೆ ಆಭಾ ಕಾರ್ಡ್ ಆಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಜಿಲ್ಲೆಯ ಪ್ರತಿಯೊಬ್ಬರು ಆಯುಷ್ಮಾನ್‌ ಭಾರತ (ಆಭಾ) ಆರೋಗ್ಯ ಕಾರ್ಡ್ ಹೊಂದುವುದು ಅವಶ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸುರೇಶ ಚಹ್ವಾಣ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ,  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಸೋಮವಾರ ಪತ್ರಕರ್ತರಿಗಾಗಿ ಏರ್ಪಡಿಸಿದ್ದ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯ ನೋಂದಣಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಹೆಲ್ತ್ ಕಾರ್ಡ್ ಅಕೌಂಟ್‌ನಲ್ಲಿ ಹೆಸರು ನೋಂದಣಿ ಮಾಡಿಸುವುದರಿಂದ ಆಭಾ ಕಾರ್ಡ್ ಮೂಲಕ ಯಾವುದೇ ವ್ಯಕ್ತಿಯ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ  ಎಂದರು.

ಬ್ಯಾಂಕ್ ಖಾತೆ, ಪಡಿತರ ಕಾರ್ಡ್‌, ಆಧಾರ್‌ ಕಾರ್ಡ್ ಹೇಗೇ ಆಧಾರವೋ ಅದೇ ರೀತಿ ನಮ್ಮೆಲ್ಲರ ಆರೋಗ್ಯಕ್ಕೆ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಆಧಾರವಾಗಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಆಭಾ ಕಾರ್ಡ್ ವರದಾನವಾಗಿದೆ ಎಂದರು.

ಆಭಾ ಕಾರ್ಡ್ ಮೂಲಕ ಬಿಪಿಎಲ್ ಕುಟುಂಬಕ್ಕೆ ಒಂದು ವರ್ಷಕ್ಕೆ ಗರಿಷ್ಠ ₹5 ಲಕ್ಷಗಳ ವರೆಗೆ ಉಚಿತ ಚಿಕಿತ್ಸೆ ಪಡೆಯುವ ಸೌಲಭ್ಯವಿದೆ. ಅದೇ ರೀತಿ ಎಪಿಎಲ್ ಕುಟುಂಬಕ್ಕೆ ವಾರ್ಷಿಕ ಮಿತಿ ಗರಿಷ್ಠ ₹1.5 ಲಕ್ಷದ ವರೆಗೆ ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ಹೇಳಿದರು.

ಆಭಾ ಕಾರ್ಡ್ ಮಾಡಿಸುವ ಕುರಿತು ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಸರಕಾರಿ ಆಸ್ಪತ್ರೆ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯನ್ನು ಸಂಪಕಿಸಬಹುದು ಎಂದು ಅವರು ಹೇಳಿದರು.

ಆಯುಷ್ಮಾನ್‌ ಭಾರತ- ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ. ಸಂಪತ್ ಕುಮಾರ ಗುಣಾರಿ ಮಾತನಾಡಿ, ಆಭಾ ಕಾರ್ಡ್ ಮಾಡಿಸಿಕೊಂಡರೆ, ಹೃದಯಾಘಾತ, ಅಪಘಾತ, ಬೆಂಕಿ ಅವಘಡ, ಹಾವು ಕಚ್ಚಿದಾಗ ಮುಂತಾದ ತುರ್ತು ಸಂದರ್ಭಗಳಲ್ಲಿ ರೋಗಿಯು ನೇರವಾಗಿ ಸರ್ಕಾರಿ ಆರೋಗ್ಯ ಸಂಸ್ಥೆಗಳಿಗೆ ಇಲ್ಲವೇ ಖಾಸಗಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದಾಗಿದೆ. ಒಂದು ವೇಳೆ ಸರ್ಕಾರಿ  ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿಲ್ಲದಿದ್ದಲ್ಲಿ ರೆಫರಲ್ ಆಧಾರದ ಮೇಲೆ ರೋಗಿಯು ತಾನು ಬಯಸುವ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದ್ದು, ಈ ಯೋಜನೆಯಡಿ ಚಿಕಿತ್ಸೆ ಪಡೆಯಲು ವಿಜಯಪುರದಲ್ಲಿ 25 ಆಸ್ಪತ್ರೆಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ.ಚೂರಿ, ಸದಾ ಒತ್ತಡದ ಮಧ್ಯೆ ಕಾರ್ಯನಿರ್ವಹಿಸುವ ಪತ್ರಕರ್ತರು ತಮ್ಮ ಹಾಗೂ ಕುಟುಂಬದ ಆರೋಗ್ಯ ಕಾಪಾಡಿಕೊಳ್ಳಲು ತಪ್ಪದೇ ಆಭಾ ಕಾರ್ಡ್ ಮಾಡಿಸಿಕೊಳ್ಳಬೇಕು ಎಂದರು.

ಗ್ರಾಮ ಒನ್ ಕೇಂದ್ರದ ಸಂತೋಷ್‌ ರಾಠೋಡ, ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಖಜಾಂಚಿ ರಾಹುಲ್‌ ಆಪ್ಟೆ, ಕೌಶಲ್ಯ ಪನಾಳಕರ, ರಾಜ್ಯ ಕಾರ್ಯಕಾರಿ ಸಮಿತಿ ನಾಮನಿರ್ದೇಶಿತ ಸದಸ್ಯ ಕೆ.ಕೆ.ಕುಲಕರ್ಣಿ, ಸಂಘದ ಉಪಾಧ್ಯಕ್ಷ ಇಂದುಶೇಖರ ಮಣೂರ ಇದ್ದರು.

ಶಿಬಿರದಲ್ಲಿ ಸಂಘದ ಹಲವಾರು ಸದಸ್ಯರು ಭಾಗವಹಿಸಿ ಆಭಾ ಕಾರ್ಡ್ ಹೆಲ್ತ್ ಅಕೌಂಟ್ ಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಹೆಸರು ನೋಂದಾಯಿಸಿಕೊಂಡರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು