ವಿಜಯಪುರ: ಬೆಂಗಳೂರು- ವಿಜಯಪುರ ನಡುವಿನ ಪಯಣ ಸದ್ಯ 14ರಿಂದ 15 ಗಂಟೆ ಇದ್ದು, ಇದನ್ನು 10ರಿಂದ 11 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ನೈರುತ್ಯ ರೈಲ್ವೆ ಅಧಿಕಾರಿಗಳಿಗೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ಸೂಚಿಸಿದರು.
ಬೆಂಗಳೂರಿನಲ್ಲಿ ನಡೆದ ನೈರುತ್ಯ ರೈಲ್ವೆ ಅಧಿಕಾರಿಗಳ ಜತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗದಗ- ಹುಟಗಿ ನಡುವೆ 242 ಕಿ.ಮೀ ನಡುವಿನ ಜೋಡಿ ಹಳಿ ಅಭಿವೃದ್ಧಿ ಕಾರ್ಯ ಬಹುತೇಕ ಮುಗಿದಿದೆ. ಆದರೆ, ಬಾಗಲಕೋಟೆ- ವಂದಾಲ ನಡುವೆ 45 ಕಿ.ಮೀ ಜೋಡಿ ರೈಲು ಕಾಮಗಾರಿ ಬಾಕಿ ಇದೆ. ಈ ಕಾಮಗಾರಿ ಡಿಸೆಂಬರ್ ವೇಳೆಗೆ ಮುಗಿಯಬೇಕು. ವಿಳಂಬ ಅಂದರೂ ಮಾರ್ಚ್ ಹೊತ್ತಿಗೆ ಮುಗಿಸಬೇಕು ಎಂದು ಸೂಚಿಸಿದರು.
ಆಲಮಟ್ಟಿ ಪ್ರದೇಶದಲ್ಲಿ ಕೂಡ ಕೆಲವು ಕಿರು ಸೇತುವೆಗಳ ನಿರ್ಮಾಣ ಬಾಕಿ ಇದೆ. ಇದರಿಂದಾಗಿ ಬೆಂಗಳೂರು- ವಿಜಯಪುರ ರೈಲು ಪಯಣಕ್ಕೆ ಈಗ 14-15 ಗಂಟೆ ಹಿಡಿಯುತ್ತಿದೆ. ಈ ಸಮಸ್ಯೆಯಿಂದಾಗಿ ವಂದೇ ಭಾರತ್ ಎಕ್ಸ್ ಪ್ರೆಸ್ ಸೇವೆ ಆರಂಭಕ್ಕೂ ವಿಘ್ನ ಎದುರಾಗಿದೆ. ಇದನ್ನು ಸರಿಪಡಿಸಿದರೆ ಬೆಂಗಳೂರು- ವಿಜಯಪುರ ಪಯಣ 10-11 ಗಂಟೆಗಳಿಗೆ ಇಳಿಯಲಿದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕಾಮಗಾರಿ ಮುಗಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೈಪಾಸ್ ಮೂಲಕ ಸಂಚರಿಸಲಿ: ಈಗ ಬೆಂಗಳೂರಿನಿಂದ ಉತ್ತರ ಕರ್ನಾಟಕಕ್ಕೆ ಬರುತ್ತಿರುವ ಗೂಡ್ಸ್ ರೈಲುಗಳು ಹುಬ್ಬಳ್ಳಿ ದಕ್ಷಿಣ ನಿಲ್ದಾಣದ ಸಮೀಪದ ಬೈಪಾಸ್ ಮೂಲಕ ಗದಗದ ಕಡೆಗೆ ತಿರುಗುತ್ತಿವೆ. ಅಲ್ಲೂ ಸಹ ಗದಗ ಮುಖ್ಯ ನಿಲ್ದಾಣಕ್ಕೆ ಹೋಗದೆ ಬೈಪಾಸ್‌ನಲ್ಲೇ ವಿಜಯಪುರ, ಸೊಲ್ಲಾಪುರದ ಕಡೆಗೆ ಹೋಗುತ್ತಿವೆ. ಹುಬ್ಬಳ್ಳಿ ದಕ್ಷಿಣ ರೈಲು ನಿಲ್ದಾಣದಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದರಿಂದ ಪ್ರಯಾಣಿಕ ರೈಲುಗಳು ಈಗ ಹುಬ್ಬಳ್ಳಿ ಮುಖ್ಯ ನಿಲ್ದಾಣಕ್ಕೆ ಹೋಗಿ, ಎಂಜಿನ್ ಬದಲಿಸಿಕೊಂಡು ಬರುತ್ತಿವೆ. ಇದರಿಂದಾಗಿ ಗಂಟೆಗಟ್ಟಲೆ ಸಮಯ ವ್ಯರ್ಥವಾಗುತ್ತಿವೆ. ಆದ್ದರಿಂದ ನೈರುತ್ಯ ರೈಲ್ವೆಯು ಹುಬ್ಬಳ್ಳಿ ದಕ್ಷಿಣ ನಿಲ್ದಾಣವನ್ನು ಪ್ರಯಾಣಿಕ ಸ್ನೇಹಿಯಾಗಿ ಆದಷ್ಟು ಬೇಗ ಅಭಿವೃದ್ಧಿಪಡಿಸಿ, ವಿಜಯಪುರ ಕಡೆ ಹೋಗುವ ರೈಲುಗಳನ್ನು ಅಲ್ಲಿಂದಲೇ ಗದಗದ ಕಡೆ ತಿರುಗಿಸುವ ಕೆಲಸ ಆಗಬೇಕು. ಅದೇ ರೀತಿ ಗದಗದಲ್ಲಿಯೂ ಬೈಪಾಸ್ ಮೂಲಕ ವಿಜಯಪುರದ ಕಡೆಗೆ ಹೋಗುವ ಹಾಗೆ ಆಗಬೇಕು. ಇದರಿಂದ ಸಾಕಷ್ಟು ಸಮಯವನ್ನು ಉಳಿಸಬಹುದು ಎಂದು ಸಚಿವರು ರೈಲ್ವೆ ಅಧಿಕಾರಿಗಳ ಗಮನ ಸೆಳೆದರು.
ಗದಗ-ವಾಡಿ ಯೋಜನೆ 2028ರೊಳಗೆ, ಬಾಗಲಕೋಟೆ-ಕುಡಚಿ ಯೋಜನೆ 2026ರ ಡಿಸೆಂಬರ್ ಹೊತ್ತಿಗೆ ಪೂರ್ಣವಾಗಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ರಾಜ್ಯ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಶ್ರೀಧರ ಮೂರ್ತಿ, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ, ನೈರುತ್ಯ ರೈಲ್ವೆಯ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಅಜಯ ಶರ್ಮಾ, ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಮೂರ್ತಿರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.