ಮುದ್ದೇಬಿಹಾಳ: ಮೈಸೂರಿನ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಪಾತ್ರದ ಬಗ್ಗೆ ತನಿಖೆ ನಡೆಸಲು ಅನುಮತಿ ಕೊಟ್ಟಿರುವ ರಾಜ್ಯಪಾಲರ ನಡೆಯನ್ನು ಖಂಡಿಸಿ ಪಟ್ಟಣದಲ್ಲಿ ಸಂಗೊಳ್ಳಿ ರಾಯಣ್ಣ ಯುವ ವೇದಿಕೆ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ವೇಳೆ ಅಧ್ಯಕ್ಷ ಪಿ.ಬಿ.ಮಾತಿನ, ಮುಖಂಡ ನಾಗಪ್ಪ ರೂಢಗಿ ಮಾತನಾಡಿ, ‘ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿರುವುದು ಅಕ್ಷಮ್ಯ. ಕೇಂದ್ರ ಸರ್ಕಾರದ ಕೈಗೊಂಬೆಯಂತೆ ನಡೆದುಕೊಳ್ಳುತ್ತಿರುವ ರಾಜ್ಯಪಾಲರ ನಡೆಯನ್ನು ಖಂಡಿಸುತ್ತೇವೆ’ ಎಂದರು.