ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಎಪಿಎಂಸಿ ತಿದ್ದುಪಡಿ ಕಾಯ್ದೆ ಪ್ರತಿ ಸುಟ್ಟು ಆಕ್ರೋಶ

ಮರ್ಚಂಟ್ಸ್‌ ಅಸೋಸಿಯೇಶನ್‌, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ
Last Updated 1 ಜೂನ್ 2020, 12:22 IST
ಅಕ್ಷರ ಗಾತ್ರ

ವಿಜಯಪುರ: ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ಸೋಮವಾರ ಸಂಪೂರ್ಣ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಯಿತು.

ಮರ್ಚಂಟ್ಸ್‌ ಅಸೋಸಿಯೇಶನ್‌ ಮತ್ತು ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಎಪಿಎಂಸಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ತಿದ್ದುಪಡಿ ಅಧಿಸೂಚನೆಯ ಪ್ರತಿ ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.

ತಿದ್ದುಪಡಿ ಕಾಯ್ದೆಯಿಂದ ಬಹುರಾಷ್ಟ್ರೀಯ ಕಂಪನಿಗಳು ರೈತರಿಂದ ನೇರವಾಗಿ ಖರೀದಿಸಲು ಅವಕಾಶ ಮಾಡಿಕೊಟ್ಟಿರುವುದರಿಂದ ಕೃಷಿ ಮಾರುಕಟ್ಟೆಯಲ್ಲಿ ಸಿಗುವಂತಹ ಸ್ಫರ್ಧಾತ್ಮಕ ಬೆಲೆ ಸಿಗಲಾರದಕ್ಕೆ ರೈತರು ಸಂಕಷ್ಟಕ್ಕೆ ಒಳಗಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಬಹುರಾಷ್ಟ್ರೀಯ ಕಂಪನಿಗಳು ನೇರವಾಗಿ ರೈತರಿಂದ ಖರೀದಿಸುವುದರಿಂದ ರಾಜ್ಯ ಸರ್ಕಾರಕ್ಕೆ ಬರುವ ₹600 ಕೋಟಿಯಷ್ಟು ಸೆಸ್ ಸಂಗ್ರಹವಾಗದೇ ಬೊಕ್ಕಸಕ್ಕೆ ನಷ್ಟವಾಗಲಿದೆ ಎಂದು ಹೇಳಿದರು.

ಬಹುರಾಷ್ಟ್ರೀಯ ಕಂಪನಿಗಳಿಗೆ ರೈತರಿಂದ ನೇರವಾಗಿ ಖರೀದಿ ಮಾಡಲು ಅನುವು ಮಾಡಿ ಕೊಟ್ಟರೆ ಎಪಿಎಂಸಿ ಅವಲಂಬಿತರಾದ ವ್ಯಾಪಾರಸ್ಥರು, ದಲ್ಲಾಳಿಗಳು, ಗುಮಾಸ್ತರು, ಹಮಾಲರು, ತಳದವರು ಸೇರಿದಂತೆ ಪ್ರತಿ ಎಪಿಎಂಸಿಯಲ್ಲಿ ಸುಮಾರು 30 ಸಾವಿರ ಜನರು ಉದ್ಯೋಗ ಕಳೆದುಕೊಂಡು ಬೀದಿ ಪಾಲಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ರೈತರಿಗೆ, ವ್ಯಾಪಾರಸ್ಥರಿಗೆ ಹಾಗೂ ದುಡಿಯುವ ವರ್ಗಕ್ಕೆ ಕಂಟಕವಾಗುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಮರ್ಚಂಟ್ಸ್‌ ಅಸೋಸಿಯೇಶನ ಅಧ್ಯಕ್ಷ ರವೀಂದ್ರ ಎಸ್. ಬಿಜ್ಜರಗಿ, ಉಪಾಧ್ಯ್ಯಕ್ಷ ಭೀಮಸಿ ಕಲಾದಗಿ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘದ ರಾಜ್ಯದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ಅಧ್ಯಕ್ಷ ಅಣ್ಣಾರಾಯ ಈಳಗೇರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ, ಬಸವನ ಬಾಗೆವಾಡಿ ತಾಲ್ಲೂಕು ಅಧ್ಯಕ್ಷ ಸಿದ್ರಾಮ ಅಂಗಡಗೇರಿ, ಪ್ರಾಂತ ರೈತ ಸಂಘ ಪ್ರಧಾನ ಕಾರ್ಯದರ್ಶಿ ಭೀಮರಾಯ ಪೂಜಾರಿ, ಬಸನಗೌಡ ಧರ್ಮಗೊಂಡ, ರೈತ ಕೃಷಿ ಕೂಲಿಕಾರ ಸಂಘದ ಮುಂಖಡರಾದ ಬಾಳು ಜೇವೂರ, ಚಂದ್ರಾಮ ತೆಗ್ಗಿ, ಶೇಖಪ್ಪ ಕರಾಬಿ, ರಾಮಣ್ಣ ಮಲ್ಲಪ್ಪ ಶಿರಗೋಳ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT