ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ ಶಾಲೆಗಳಲ್ಲಿ ಬೆಂಚ್ ಅಭಿಯಾನ

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ
Published 31 ಜುಲೈ 2023, 15:35 IST
Last Updated 31 ಜುಲೈ 2023, 15:35 IST
ಅಕ್ಷರ ಗಾತ್ರ

ವಿಜಯಪುರ: ಜಿಲ್ಲೆಯಲ್ಲಿ ನಾಲ್ಕನೇ ತರಗತಿಯ ನಂತರದ ಎಲ್ಲ ಮಕ್ಕಳಿಗೂ ಬೆಂಚ್ ಆಸನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಕೆಲ ಶಾಲೆಗಳಲ್ಲಿ ಬೆಂಚ್ ಬಳಕೆಯಾಗುತ್ತಿಲ್ಲ. ಅವಶ್ಯಕತೆ ಇರುವ ಸಮೀಪದ ಶಾಲೆಗಳಿಗೆ ಒದಗಿಸಬೇಕು ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಬೆಂಚ್ ಅಭಿಯಾನ ಹಮ್ಮಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಶಾಲಾ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

‘ಜಿಲ್ಲೆಯ ಎಲ್ಲ ಶಾಲಾ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಡಿಒಗಳು ಮತ್ತು ಬಿ.ಆರ್.ಪಿ, ಸಿ.ಆರ್.ಪಿ ಅವರು ಜಂಟಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಸೂಚನೆ ನೀಡಿದರು.

‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆಯುವ ಅಂಗನವಾಡಿಗಳಿಗೆ ಈಗಾಗಲೇ ಬೆಂಚ್ ಮತ್ತು ಚಿಕ್ಕ ಆಸನಗಳನ್ನು ವಿತರಿಸಲು ಎಲ್ಲ ಪಿಡಿಒಗಳಿಗೆ ಸೂಚಿಸಲಾಗಿದ್ದು, ಹಲವು ಕಡೆ ಪಿಡಿಒಗಳು ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ವಿತರಣೆ ಮಾಡಿದ್ದಾರೆ. ಇನ್ನೂ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಣೆ ಆಗದೇ ಇರುವುದು ತಿಳಿದು ಬಂದಿದ್ದು, ಅಂಗನವಾಡಿಗಳಿಗೆ ಸಾಮಗ್ರಿಗಳನ್ನು ತಕ್ಷಣ ಅವಶ್ಯಕ ಸಾಮಗ್ರಿ ವಿತರಣೆಗೆ ಕ್ರಮ ವಹಿಸಬೇಕು’ ಎಂದರು.

‘ಅಂಗನವಾಡಿ ಮೇಲ್ವಿಚಾರಕರು ಮತ್ತು ಪಿಡಿಒ ಅವರು ಜಂಟಿಯಾಗಿ ಮೇಲುಸ್ತುವಾರಿ ವಹಿಸಬೇಕು.
ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣಅಥಣಿ, ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಎನ್.ಎಚ್.ನಾಗೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಉಪಸ್ಥಿತರಿದ್ದರು.

ಮಕ್ಕಳಲ್ಲಿ ಶಿಸ್ತು ಸಕಾರಾತ್ಮಕ ಮತ್ತು ರಚನಾತ್ಮಕ ಬೆಳವಣಿಗೆಯ ದೃಷ್ಟಿಯಿಂದ ಮಕ್ಕಳಿಗೆ ಶೌಚಾಲಯ ಮತ್ತು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಕಲ್ಪಿಸುವುದಕ್ಕೆ ಆದ್ಯತೆ ನೀಡಬೇಕು 

–ರಾಹುಲ್ ಶಿಂಧೆ ಸಿಇಒ ಜಿ. ಪಂ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT