ಬುಧವಾರ, ಜನವರಿ 20, 2021
21 °C
ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಸನ್ಮಾನ

ಬಿಜೆಪಿ ಜನಸೇವಕ ಸಮಾವೇಶ ಜ.12ಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ವಿಜೇತರಾದ ಜಿಲ್ಲೆಯ ಬಿಜೆಪಿ ಬೆಂಬಲಿತ ಸದಸ್ಯರಿಗೆ ಜ.12 ರಂದು ಮಧ್ಯಾಹ್ನ 3ಕ್ಕೆ ನಗರದ ದರಬಾರ್‌ ಮೈದಾನದಲ್ಲಿ ಸನ್ಮಾನಿಸುವ ಉದ್ದೇಶದಿಂದ ‘ಜನಸೇವಕ ಸಮಾವೇಶ’ ಆಯೋಜಿಸಲಾಗಿದೆ ಎಂದು ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ 2065 ಜನರು ಗ್ರಾಮ ಪಂಚಾಯ್ತಿ ಸದಸ್ಯರಾಗಿ ಆಯ್ಕೆಯಾಗಿದ್ದು, ಅವರೆಲ್ಲರಿಗೂ ಸಮ್ಮೇಳನದಲ್ಲಿ ಸನ್ಮಾನಿಸಲಾಗುವುದು ಎಂದು ಹೇಳಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಹಾಲಿ, ಮಾಜಿ ಶಾಸಕರು, ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ರಾಜ್ಯದ ಒಟ್ಟು 5670 ಗ್ರಾಮ ಪಂಚಾಯ್ತಿಗಳ 86,183 ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 45,246 (ಶೇ52.04) ಬಿಜೆಪಿ ಬೆಂಬಲಿತ ಸದಸ್ಯರು ಜಯ ಗಳಿಸಿದ್ದಾರೆ ಎಂದು ಹೇಳಿದರು.

ಜಿಲ್ಲಾ ಕಾರ್ಯಕಾರಣಿ ಸಭೆ:

ನಗರದ ಕಾಳಿಕಾ ದೇವಸ್ಥಾನದಲ್ಲಿ ಶನಿವಾರ ನಡೆದ ಬಿಜೆಪಿ ಎಸ್.ಟಿ.ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿದ ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ, ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದೇಶ ಆರ್ಥಿಕ ಪರಸ್ಥಿತಿ ಸುಧಾರಣೆಯಾಗಿದೆ ಎಂದರು.

ಪ್ರತಿ ಗ್ರಾಮ ಪಂಚಾಯ್ತಿಯಲ್ಲೂ ಪರಿಶಿಷ್ಟ ಪಂಗಡದ ಬಿಜೆಪಿ ಮುಖಂಡರು ಗೆಲವು ಸಾಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು, ಆ ನಿಟ್ಟಿನಲ್ಲಿ ಕಾರ್ಯ ಯೋಜನೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್. ಪಾಟೀಲ ಮಾತನಾಡಿ, ಮುಂಬರುವ ಮಹಾನಗರ ಪಾಲಿಕೆ, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ  ಚುನಾವಣೆ ಸಮೀಸುತ್ತಿದ್ದು, ಇದಕ್ಕಾಗಿ ಪಕ್ಷದ ಮುಖಂಡರು ತಯಾರಾಗಬೇಕು ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಯನ್ನು ಜನರ ಮನೆಗೆ ತಲುಪಿಸಬೇಕು ಎಂದು ಹೇಳಿದರು.

ಎಸ್.ಟಿ. ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ದೇವೇಂದ್ರ ವಾಲಿಕಾರ ಮಾತನಾಡಿ, ವಾಲ್ಮಿಕಿ ಸಮಾಜ ಒಳಗೊಂಡಂತೆ ಅನೇಕ ಸಮಾಜದ ಮುಖಂಡರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ. ಯಡಿಯೂರಪ್ಪನವರು ಮೊದಲ ಬಾರಿಗೆ ವಾಲ್ಮಿಕಿ ಜಯಂತಿಯಂದು ಸಾರ್ವಜನಿಕ ರಜೆ ನೀಡಿದ್ದಾರೆ.  ಇದು ನಮಗೆ ಹೆಮ್ಮೆಯ ವಿಷಯ ಎಂದು ಹೇಳಿದರು.

ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ, ಎಸ್.ಟಿ. ಮೊರ್ಚಾ ರಾಜ್ಯ ಉಪಾಧ್ಯಕ್ಷ ಮಲ್ಲು ಕವಲಗಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜುನಾಥ ಓಲೆಕಾರ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ, ಶಿವರುದ್ರ ಬಾಗಲಕೋಟ, ಬಸವರಾಜ ಬಿರಾದಾರ, ಮಳುಗೌಡ ಪಾಟೀಲ, ವಿಜಯ ಜೋಶಿ, ಅಶ್ವತ್ಥ ರೆಬಿನಾಳ, ಅಭಿಷೇಕ್ಕ‌ ಸಾವಂತ, ಪಾಪುಸಿಂಗ್‌ ರಜಪೂತ, ಗೋಪಾಲ ಓಲೆಕಾರ, ವಿಠ್ಠಲ ಬಂಗಾರಪ್ಪಗೋಳ, ಭಾಸ್ಕರ ದಳವಾಯಿ, ಅಶೋಕ ಧರೆಗೋಳ, ಅರವಿಂದ ನಾಗರಾಳ, ರವಿ ನಾಯ್ಕೋಡಿ, ಪ್ರಭುಗೌಡ ವಿ.ಎಂ. ಸುರೇಶ ರವಿ ನಾಯ್ಕೋಡಿ ಇದ್ದರು.

***

ಬಿಜೆಪಿ ನಗರ ಪ್ರದೇಶಕ್ಕೆ ಸೀಮಿತ ಎಂಬುದು ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸುಳ್ಳಾಗಿದೆ. ಗ್ರಾಮೀಣ ಪ್ರದೇಶಕ್ಕೂ ವಿಸ್ತರಿಸುವ ಮೂಲಕ ಬಿಜೆಪಿ ಸರ್ವವ್ಯಾಪಿ ಎಂಬುದು ಸಾಬೀತಾಗಿದೆ

ತಿಪ್ಪರಾಜು ಹವಾಲ್ದಾರ,ಅಧ್ಯಕ್ಷ,  ಬಿಜೆಪಿ ಎಸ್.ಟಿ.ಮೋರ್ಚಾ ರಾಜ್ಯ ಘಟಕ 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.