ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಕೊಳವೆಬಾವಿಗೆ ಬಿದ್ದ ಮಗುವಿನ ರಕ್ಷಣೆ: ಎಂ.ಬಿ. ಪಾಟೀಲ ಶ್ಲಾಘನೆ

Published 4 ಏಪ್ರಿಲ್ 2024, 16:06 IST
Last Updated 4 ಏಪ್ರಿಲ್ 2024, 16:06 IST
ಅಕ್ಷರ ಗಾತ್ರ

ವಿಜಯಪುರ: ಇಂಡಿ ತಾಲ್ಲೂಕು ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿಗೆ ಬಿದ್ದಿದ್ದ 14 ತಿಂಗಳ ಮಗುವನ್ನು 20 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದ ಎಲ್ಲರನ್ನೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಶ್ಲಾಘಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆಗೆ ಸಹಕರಿಸಿದ ಸ್ಥಳೀಯರು ಹಾಗೂ ನೇತೃತ್ವ ವಹಿಸಿದ್ದ ಜಿಲ್ಲಾಡಳಿತದ ಬಗ್ಗೆಯೂ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಕೊಳವೆ ಬಾವಿಗೆ ಜಾರಿ ಬಿದ್ದಿದ್ದ ಮಗುವನ್ನು ಜೀವಂತವಾಗಿ ರಕ್ಷಿಸಲು ಸಾಧ್ಯವಾಗಿರುವುದು ಅತ್ಯಂತ ಸಮಾಧಾನ ನೀಡಿದೆ ಎಂದಿದ್ದಾರೆ.

ಘಟನೆ ನಡೆದಿರುವ ಸುದ್ದಿ ಬುಧವಾರ ಸಂಜೆ ತಿಳಿಯುತ್ತಿದ್ದಂತೆಯೇ ತಕ್ಷಣ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಸಚಿವರು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದರು. ಗುರುವಾರ ಮಧ್ಯಾಹ್ನ ಕಾರ್ಯಾಚರಣೆ ಯಶಸ್ವಿಯಾಗಿ ಮುಗಿಯುವ ತನಕ ಜಿಲ್ಲಾಡಳಿತದೊಂದಿಗೆ ಪಾಟೀಲ ಅವರು ನಿರಂತರ ಸಂಪರ್ಕದಲ್ಲಿದ್ದರು.

ಪ್ರಕರಣ ದಾಖಲಿಸಲು ಸೂಚನೆ:

ಮುಚ್ಚದೆ ಹಾಗೆಯೇ ಬಿಟ್ಟಿರುವ ಕೊಳವೆಬಾವಿಗಳ ಬಗ್ಗೆ ಜಿಲ್ಲೆಯಾದ್ಯಂತ ಸರ್ವೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವ ಪಾಟೀಲ ಸೂಚನೆ ನೀಡಿದ್ದಾರೆ.

ಕೊಳವೆಬಾವಿಗಳನ್ನು ಮುಚ್ಚದೆ ಬಿಟ್ಟರೆ ಕಠಿಣ ಕ್ರಮ ತೆಗೆದುಕೊಳ್ಳಲು ಈಗಾಗಲೇ ಕಾನೂನು ಇದೆ. ಜಿಲ್ಲೆಯಲ್ಲಿ ಸರ್ವೆ ನಡೆಸಿ, ಕೊಳವೆಬಾವಿಗಳನ್ನು ಮುಚ್ಚದೆ ಬಿಟ್ಟಿದ್ದರೆ, ಸಂಬಂಧಪಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿರುವಂತೆ ಪ್ರಕರಣ ದಾಖಲಿಸಲು ಅವರು ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT