ಚಡಚಣ: ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ತಾಲ್ಲೂಕಿನ ಅಂಗನವಾಡಿ ಹಾಗೂ ಶಾಲಾ ಮಕ್ಕಳಲ್ಲಿ ಕಂಡು ಬಂದ ಸೀಳು ತುಟಿ, ಅಂಗುಳುಳ್ಳ 9 ಮಕ್ಕಳಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಅರ್ಚನಾ ಕುಲಕರ್ಣಿ ತಿಳಿಸಿದ್ದಾರೆ.
ಹುಟ್ಟಿನಿಂದ 18 ವರ್ಷದೊಳಗಿನ ಮಕ್ಕಳಲ್ಲಿ ಕಂಡು ಬರುವ ಸಾಮಾನ್ಯ ಶಸ್ತ್ರ ಚಿಕಿತ್ಸೆ ಜಿಲ್ಲಾ ಆಸ್ಪತ್ರೆಯಲ್ಲಿ, ಸೀಳು ತುಟಿ ಹಾಗೂ ಅಂಗುಳದ ಶಸ್ತ್ರಕಿತ್ಸೆಯನ್ನು ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಸಾರಿಗೆ ವೆಚ್ಚ ಸಹಿತ ಸಂಪೂರ್ಣ ಉಚಿತವಾಗಿ ಮಾಡಿಸಲಾಗುತ್ತದೆ. ಮಕ್ಕಳ ಆರೋಗ್ಯ ರಕ್ಷಣೆಗೆ ರಾಷ್ಟ್ರೀಯ ಆರೋಗ್ಯ ಅಭಿಯನದ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆಯಡಿ ಸಂಚಾರಿ ಆರೋಗ್ಯ ತಂಡ ರಚಿಸಲಾಗಿದೆ. ಈ ತಂಡದಲ್ಲಿ ಇಬ್ಬರು ವೈದ್ಯಾಧಿಕಾರಿಗಳನ್ನೊಳಗೊಂಡು ನಾಲ್ಕು ಜನ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತಾಲ್ಲೂಕಿನ ಪ್ರತಿ ಶಾಲೆ,ಅಂಗನವಾಡಿಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಯನ್ನು ಉಚಿತವಾಗಿ ಕೊಡಲಾಗುತ್ತದೆ. ಪಾಲಕರು ತಮ್ಮ ಮಕ್ಕಳಲ್ಲಿನ ಯಾವುದೇ ಗಂಭೀರ ಶಸ್ತ್ರ ಚಿಕಿತ್ಸೆಗೆ ಸಂಬಂದಿಸಿದ ಆರೋಗ್ಯ ಸಮಸ್ಯೆಗಳಿಗೆ ತಮ್ಮ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.