ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ಕಾಮಗಾರಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಡಿ.ರಂದೀಪ್

Last Updated 6 ಡಿಸೆಂಬರ್ 2022, 15:32 IST
ಅಕ್ಷರ ಗಾತ್ರ

ವಿಜಯಪುರ: ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಿ ಯಾವುದೇ ಅನುದಾನ ಮರಳಿ ಹೋಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಿ.ರಂದೀಪ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ವಿವಿಧ ಇಲಾಖೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಲೋಕೋಪಯೋಗಿ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಜಾರಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.

ನಗರದಲ್ಲಿ ತ್ಯಾಜ್ಯ ವಿಲೇವಾರಿಗೆ ಕ್ರಮ ವಹಿಸಬೇಕು. ನಗರದ ಅಭಿವೃದ್ದಿಗೆ ಆದ್ಯತೆ ನೀಡಬೇಕು. ವಿಶೇಷವಾಗಿ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಆದ್ಯತೆ ಮಟ್ಟದ ಕಾಮಗಾರಿಗಳ ಪ್ರಸ್ತಾವನೆಗಳ ಕುರಿತು ಮಾಹಿತಿ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಪ್ರಾಣಿಗಳಿಗೆ ಹರಡುವ ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ಲಸಿಕೆ ನೀಡುವುದು, ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಿ ರೋಗ ವ್ಯಾಪಕವಾಗಿ ಹರಡದಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾತನಾಡಿ, ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲೆಗೆ ₹5.64 ಕೋಟಿ ಬಿಡುಗಡೆಯಾಗಿದೆ. ಪ್ರಕೃತಿ ವಿಕೋಪದಡಿ ಹಾನಿಯಾದ ಎಲ್ಲ ಮನೆಗಳ ಮಾಹಿತಿಯನ್ನು ರಾಜೀವ್‌ ಗಾಂಧಿ ವಸತಿ ನಿಗಮದ ತಂತ್ರಾಂಶದಲ್ಲಿ ಈಗಾಗಲೇ ಅಳವಡಿಸಲಾಗಿದೆ ಎಂದರು.

ಬೆಳೆ ಹಾನಿಗೆ ಸಂಬಂಧಿಸಿದಂತೆ ಒಟ್ಟು 7 ಕಂತುಗಳ ಮೂಲಕ ಜಿಲ್ಲೆಯ ಒಟ್ಟು 19,798 ರೈತರಿಗೆ ₹34.26 ಕೋಟಿ ಪರಿಹಾರ ಧನ ಜಮೆ ಮಾಡಲಾಗಿದೆ. ಬೆಳೆ ಹಾನಿಗೆ ಪರಿಹಾರ ಧನ ಜಮೆ ಕುರಿತು 9ನೇ ಕಂತಿನಲ್ಲಿ 14,478 ರೈತರಿಗೆ ಪರಿಹಾರ ಒದಗಿಸಲು ₹9.51 ಕೋಟಿ ಬಿಡುಗಡೆಯಾಗಿದ್ದು, ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ 10 ಗ್ರಾಮಗಳಿಗೆ ಸಾರ್ವಜನಿಕ ಸ್ಮಶಾನಕ್ಕಾಗಿ ಖಾಸಗಿ ಜಮೀನು ಗುರುತಿಸಿ ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು, ಎಲ್ಲ ಗ್ರಾಮಗಳ ಭೂ ಬೆಲೆ ನಿರ್ಧರಿಸಲಾಗಿದೆ. ಜಿಲ್ಲೆಯ ಒಟ್ಟು 14 ಗ್ರಾಮಗಳಿಗೆ ಸ್ಮಶಾನ ಭೂಮಿ ಕಲ್ಪಿಸಲು ₹ 1,05 ಕೋಟಿ ಅನುದಾನ ಬಿಡುಗಡೆ ಕುರಿತು ಸರ್ಕಾರಕ್ಕೆ ಹಾಗೂ ಜಿಲ್ಲೆಯ ಒಟ್ಟು 17 ಗ್ರಾಮಗಳಿಗೆ ಸ್ಮಶಾನ ಭೂಮಿ ಕಲ್ಪಿಸಲು ಕೆಬಿಜೆಎನ್‍ಎಲ್ ಅಧೀನದಲ್ಲಿರುವ ಜಮೀನುಗಳಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಉದ್ದೇಶಕ್ಕೆ ಉಪಯೋಗಿಸಲು ಅನುಮತಿ ಕೋರಿ ಜಲಸಂಪನ್ಮೂಲ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆಯಲಾಗಿದೆ ಎಂದು ಅವರು ಹೇಳಿದರು.

ವಿಜಯಪುರ ವಿಮಾನ ನಿಲ್ದಾಣವನ್ನು ಏರ್‌ಬಸ್‌-320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ₹ 347.92 ಕೋಟಿ ಮಂಜೂರಾಗಿದ್ದು, ಎರಡು ಹಂತಗಳಲ್ಲಿ ಕಾಮಗಾರಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಲಕ್ಕಣ್ಣನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT