ಭಾನುವಾರ, ಅಕ್ಟೋಬರ್ 17, 2021
21 °C

ಕಾಂಗ್ರೆಸ್ ಪಾದಯಾತ್ರೆ ಚುನಾವಣೆ ಗಿಮಿಕ್: ಗೋವಿಂದ ಕಾರಜೋಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ‘ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ’ ಎಂಬ ಕಾಂಗ್ರೆಸ್ ಪಾದಯಾತ್ರೆ ಹಾನಗಲ್ ಮತ್ತು ಸಿಂದಗಿ ಮತಕ್ಷೇತ್ರಗಳ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಒಂದು ಚುನಾವಣಾ ಗಿಮಿಕ್, ಇಂತಹ ಚುನಾವಣಾ ಗಿಮಿಕ್ ಗಳಿಗೆ ಜನ ಮೋಸ ಹೋಗುವುದಿಲ್ಲ. ತಂತ್ರಗಾರಿಕೆಗಳಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ಬಿಜೆಪಿ ಯಾವಾಗಲೂ ‘ಕೃಷ್ಣೆಯ ನಡಿಗೆ ಸತ್ಯದ ಕಡೆಗೆ’ ಎಂಬುದನ್ನು ಪರಿಪಾಲಿಸುತ್ತಾ ಬಂದಿದ್ದು ಉಪಚುನಾವಣೆ ಇರಲಿಲ್ಲ ಎಂದಿದ್ದರೆ ಕಾಂಗ್ರೆಸ್ ನವರ ‘ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ’ ಇರುತ್ತಿರಲಿಲ್ಲ. ಅದು ನಿರ್ಲಕ್ಷ್ಯದ ಕಡೆಗೆ ಇರುತ್ತಿತ್ತು ಎಂದು ಸಚಿವರು ವ್ಯಂಗ್ಯವಾಡಿದರು.

ಕ್ಷಮೆಗೆ ಆಗ್ರಹ:

‘ಕಾಂಗ್ರೆಸ್ ಪಾಪದ ಕೂಸು ಯುಕೆಪಿ’ ಎಂದು ನಾನು ಹೇಳಿರುವುದಾಗಿ ಮಾಜಿ ನೀರಾವರಿ ಸಚಿವ ಎಂ.ಬಿ. ಪಾಟೀಲ   ಸುಳ್ಳು ಹೇಳಿದ್ದಾರೆ. ನಾನು ಯಾವತ್ತೂ ಹೇಳಿಲ್ಲ ಮತ್ತು ಹೇಳುವವನೂ ಅಲ್ಲ. ನಾನು ಈ ರೀತಿ ಹೇಳಿದ್ದೇನೆಂದು ಎಂ.ಬಿ.ಪಾಟೀಲರು ಸಾಬೀತು ಪಡಿಸಬೇಕು. ಇಲ್ಲದಿದ್ದರೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸರ್ಕಾರ  ಕೃಷ್ಣಾ ಮೇಲ್ದಂಡೆ ಯೋಜನೆಗೆ ಯಾವುದೇ ರೀತಿಯ ಸಮರ್ಪಕ ಹಣಕಾಸು ಒದಗಿಸಲಿಲ್ಲ. ಆದ್ದರಿಂದಾಗಿ ಈ ಯೋಜನೆಗಳು ಕುಂಟುಂತ್ತಾ, ತೆವಳುತ್ತಾ ಸಾಗಿವೆ ಎಂದರು.

2008 ರಿಂದ 2013ರ ವರೆಗೆ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಸರ್ಕಾರ ಇದ್ದಾಗ ಇಂದಿನ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿಯವರು ಜಲ ಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ ಸಿಂಧಗಿ ಮತಕ್ಷೇತ್ರಕ್ಕೆ ಅನುಕೂಲವಾಗುವ ಇಂಡಿ ಶಾಖಾ ಕಾಲುವೆ ಮತ್ತು ಗುತ್ತಿ ಬಸವಣ್ಣ ಏತ ನೀರಾವರಿ ಕಾಮಗಾರಿಗಳನ್ನು ಪೂರ್ಣಗೊಳಿಸಿದರು. ಈ ಎರಡೂ ಯೋಜನೆಗಳಿಗೆ ರೂ. 1000 ಕೋಟಿ  ಖರ್ಚಾಗಿದ್ದು 80 ಸಾವಿರ ಹೆಕ್ಟೇರ್ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಿ ರೈತರ ಬಾಳನ್ನು ಹಸನು ಮಾಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು