ಮಂಗಳವಾರ, ಜನವರಿ 18, 2022
15 °C
ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್‌ ಮನವಿ

ಕೋವಿಡ್ ನಿಯಂತ್ರಣ; ಖಾಸಗಿ ಆಸ್ಪತ್ರೆಗಳ ಸಹಕಾರ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೋವಿಡ್‌ ಮೂರನೇ ಅಲೆ ಹಾಗೂ ಓಮೈಕ್ರಾನ್‌ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಖಾಸಗಿ ಆಸ್ಪತ್ರೆಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ್‌ ಹೇಳಿದರು.

ಇಲ್ಲಿನ ಜಿಲ್ಲಾ ಪಂಚಾಯ್ತಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಣ ಹಾಗೂ ಹಾಸಿಗೆಗಳ ವ್ಯವಸ್ಥೆಗಳ ಕುರಿತು ಜಿಲ್ಲಾಮಟ್ಟದ ತಜ್ಞರ ಸಮಿತಿಯ ಸದಸ್ಯರು, ಜಿಲ್ಲೆಯ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯನಿರ್ವಹಿಸಿದರೆ ಕೋವಿಡ್ ಕಟ್ಟಿಹಾಕಲು ಸಾಧ್ಯ ಎಂದು ಅವರು ಹೇಳಿದರು.

ಈ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗಾಗಿ ಶೇ 50 ರಷ್ಟು ಹಾಸಿಗೆ ಕಾಯ್ದಿರಿಸುವಂತೆ ಮಾಡಲಾದ ಸರ್ಕಾರದ ಆದೇಶದಲ್ಲಿ ಬದಲಾವಣೆ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಆಯಾ ಖಾಸಗಿ ಆಸ್ಪತ್ರೆಗಳ ಹಾಸಿಗೆ ಲಭ್ಯತೆಗೆ ಅನುಸಾರವಾಗಿ ಶೇ 75 ರಷ್ಟು ಕಾಯ್ದಿರಿಸುವಂತೆ ಕ್ರಮಕೈಗೊಳ್ಳಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳ ಸದ್ಯದ ಸ್ಥಿತಿಗತಿ ಹಾಗೂ ಕೋವಿಡ್ ರೋಗಿಗಳಿಗಾಗಿ ಆಕ್ಸಿಜನ್ ಪ್ಲಾಂಟ್ ಸೇರಿದಂತೆ ಈಗಾಗಲೇ ಮಾಡಿಕೊಳ್ಳಲಾದ ಅಗತ್ಯ ವ್ಯವಸ್ಥೆಗಳ ಬಗ್ಗೆ ವರದಿ ಸಲ್ಲಿಸುವಂತೆ ಅವರು ತಿಳಿಸಿದರು.

ಸರ್ಕಾರದ ನೂತನ ಕೋವಿಡ್ ತಂತ್ರಾಂಶದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಬೇಕು. ಹಾಸಿಗೆ ಸೇರಿದಂತೆ ಇನ್ನೀತರ ವ್ಯವಸ್ಥೆಗಳನುಸಾರವಾಗಿ ಜಂಬೊ ಸಿಲೆಂಡರ್ ಸೇರಿದಂತೆ ಸಮಪರ್ಕವಾಗಿ ಆಕ್ಸಿಜನ್ ಪೂರೈಸಲಾಗುವುದು ಎಂದು ಅವರು ಹೇಳಿದರು.

ನಗರ ಪ್ರದೇಶದಲ್ಲಿ ಮೊಬೈಲ್ ಟೀಮ್‍ಗಳು ಆಸ್ಪತ್ರೆಗಳಿಗೆ ತೆರಳಿ, ಸ್ವ್ಯಾಬ್ ಸಂಗ್ರಹಿಸುವಂತಹ ಕಾರ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಕೈಗೊಂಡು, ಆದ್ಯತೆ ಮೇಲೆ ಕಾರ್ಯನಿರ್ವಹಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ  ಬಲರಾಮ ಲಮಾಣಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮ ಅರಸಿದ್ಧಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ. ರಾಜಕುಮಾರ್ ಯರಗಲ್ ಹಾಗೂ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು, ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ಕಾಲೇಜಿನ ಮುಖ್ಯಸ್ಥರು ಹಾಗೂ ವೈದ್ಯರು ಉಪಸ್ಥಿತರಿದ್ದರು.

***

ಸ್ವ್ಯಾಬ್ ಪರೀಕ್ಷಾ ವರದಿ ಆದಷ್ಟು ಬೇಗನೆ ಬರುವಂತೆ ನೋಡಿಕೊಳ್ಳಬೇಕು. ಈ ವಿಷಯದಲ್ಲಿ ಅನಗತ್ಯ ವಿಳಂಬಕ್ಕೆ ಅವಕಾಶ ಮಾಡಿಕೊಡಬಾರದು

-ಪಿ.ಸುನೀಲ್‌ಕುಮಾರ್‌

ಜಿಲ್ಲಾಧಿಕಾರಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.