ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಕೋವಿಡ್‌ ಸೋಂಕು ಮುಕ್ತ ಪರೀಕ್ಷಾ ಕೇಂದ್ರ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ
Last Updated 3 ಜೂನ್ 2020, 2:04 IST
ಅಕ್ಷರ ಗಾತ್ರ

ವಿಜಯಪುರ: ಜೂನ್‌ 25 ರಿಂದ ಜುಲೈ 3ರ ವರೆಗೆ ನಡೆಯಲಿರುವ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಕೋವಿಡ್‌ ಸೋಂಕಿನ ಆತಂಕವಿಲ್ಲದೇ ವಿಶ್ವಾಸದಿಂದ ಹಾಜರಾಗಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳತೊಡಗಿದೆ.

ಕೋವಿಡ್‌ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಇಲಾಖೆ ಕೈಗೊಂಡಿದ್ದು, ವಿದ್ಯಾರ್ಥಿಗಳು ಯಾವುದೇ ಅಂಜಿಕೆ ಇಲ್ಲದೇ ಪರೀಕ್ಷೆಗೆ ಹಾಜರಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಪ್ರಸನ್ನಕುಮಾರ್‌ ಮನವಿ ಮಾಡಿದ್ದಾರೆ.

ಈ ಕುರಿತು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿದ ಅವರು, ಜಿಲ್ಲೆಯ 106 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್‌ ಹಿನ್ನೆಲೆಯಲ್ಲಿ 14 ಹೆಚ್ಚುವರಿ ಪರೀಕ್ಷಾ ಕೇಂದ್ರವನ್ನು ಸಿದ್ಧವಾಗಿಟ್ಟುಕೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸರ್‌ ಸಿಂಪಡಿಸುವ ಮೂಲಕ ಸೋಂಕು ಮುಕ್ತವಾಗಿಸಲಾಗುವುದು ಎಂದು ಹೇಳಿದರು.

ಜಿಲ್ಲೆಯ 20,560 ಬಾಲಕರು, 15,711 ಬಾಲಕಿಯರು ಸೇರಿದಂತೆ 36,271 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಒಂದೊಂದು ಪರೀಕ್ಷಾ ಕೇಂದ್ರದಲ್ಲಿ 15ರಿಂದ 20 ಪರೀಕ್ಷಾರ್ಥಿಗಳಿಗೆ ಮಾತ್ರ ಅವಕಾಶ ಇಲಿದೆ. ಪ್ರತಿ ಡೆಸ್ಕ್‌ನಲ್ಲಿ ಇಬ್ಬರು ಪರೀಕ್ಷೆ ಬರೆಯಲಿದ್ದಾರೆ. ಡೆಸ್ಕ್‌ಗಳ ನಡುವೆ 3 ಅಡಿ ಅಂತರ ಇರಲಿದೆ ಎಂದರು.

ಶೀತ, ಕೆಮ್ಮು, ಉಸಿರಾಟ ತೊಂದರೆ ಸೇರಿದಂತೆ ಕೊರೊನಾ ಸೋಂಕಿನ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ತಾಲ್ಲೂಕಿಗೆ ಒಂದೊಂದು ಪರೀಕ್ಷಾ ಕೊಠಡಿಯನ್ನು ಇದಕ್ಕಾಗಿ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳು ಇರುವ ಪ್ರದೇಶದಲ್ಲಿ ಒಂದು ವೇಳೆ ಕೋವಿಡ್‌ ಸೋಂಕು ಕಾಣಿಸಿಕೊಂಡು ಆ ಪ್ರದೇಶವನ್ನು ಕಂಟೈನ್ಮೆಂಟ್‌ ಎಂದು ಜಿಲ್ಲಾಡಳಿತ ಗುರುತಿಸಿ, ಸೀಲ್‌ಡೌನ್‌ ಮಾಡಿದರೆ ಆ ಪ್ರದೇಶದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಪ್ರತಿ ತಾಲ್ಲೂಕಿನಲ್ಲಿ ಹೆಚ್ಚುವರಿ ಎರಡು ಪರೀಕ್ಷಾ ಕೇಂದ್ರಗಳನ್ನು ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರಕ್ಕೆ ಬರುವ ಪ್ರತಿ ವಿದ್ಯಾರ್ಥಿಗೂ ಮಾಸ್ಕ್‌, ಸ್ಯಾನಿಟೈಜರ್‌ ವ್ಯವಸ್ಥೆ ಮಾಡಲಾಗುತ್ತಿದೆ. ಈ ಸಂಬಂಧ ಈಗಾಗಲೇ 30 ಸಾವಿರ ಮಾಸ್ಕ್‌ಗಳನ್ನು ಸ್ಕೌಟ್‌ ಮತ್ತು ಗೈಡ್ಸ್‌ ಸಂಸ್ಥೆ ಒದಗಿಸಿದೆ. ಅಲ್ಲದೇ, ಜಿಲ್ಲೆಯ ಶಾಸಕರು ಅಗತ್ಯ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಮಕ್ಕಳ ಆರೋಗ್ಯ ದೃಷ್ಟಿಯಿಂದ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆರೋಗ್ಯ ಸಿಬ್ಬಂದಿ ನಿಯೋಜಿಸುವಂತೆ ಪಾಲಕರಿಂದ ಮನವಿ ಬಂದಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೇಳಿದರು.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬಂದು ಹೋಗಲು ಅನುಕೂಲವಾಗುವಂತೆ ಆಯಾ ಖಾಸಗಿ ಶಾಲೆಗಳು ಬಸ್‌ ವ್ಯವಸ್ಥೆ ಕಲ್ಪಿಸಲಿವೆ. ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ ಬಸ್‌ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ತಿಳಿಸಿದರು.

ನಕಲು ಮಾಡಿದರೆ ಐದು ವರ್ಷ ಜೈಲು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಕಲು ಮಾಡಿದರೆ ಅಥವಾ ನಕಲು ಮಾಡಲು ಸಹಕರಿಸಿದರೆ ಅಂಥವರಿಗೆ ₹ 3 ಲಕ್ಷ ದಂಡ ಹಾಗೂ 5 ವರ್ಷ ಜೈಲು ಶಿಕ್ಷೆಯಾಗಲಿದೆ ಎಂದು ಡಿಡಿಪಿಐ ಎಚ್ಚರಿಕೆ ನೀಡಿದರು.

ಪರೀಕ್ಷೆ ಸುಸೂತ್ರವಾಗಿ ನಡೆಯಲು 1500 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೇ, ಪರೀಕ್ಷೆಯಲ್ಲಿ ನಕಲು ತಡೆಯಲು ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಹೇಳಿದರು.

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ಆತಂಕ ಪಡೆದೇ ಬಂದು ಪರೀಕ್ಷೆ ಬರೆಯಬೇಕು
ಸಿ. ಪ್ರಸನ್ನಕುಮಾರ್‌
ಡಿಡಿಪಿಐ, ವಿಜಯಪುರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT