ಶನಿವಾರ, ಮೇ 15, 2021
24 °C
ವದಂತಿಗಳಿಗೆ ಕಿವಿಗೊಡ ಬೇಡ: ಸಚಿವೆ ಶಶಿಕಲಾ ಜೊಲ್ಲೆ ವಿನಂತಿ

ಕೋವಿಡ್ ಲಸಿಕೆ ಅಡ್ಡಪರಿಣಾಮವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೋವಿಡ್ ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡಪರಿಣಾಮ ಆಗುವುದಿಲ್ಲ, ವದಂತಿಗಳಿಗೆ ಕಿವಿಗೊಡುವುದು ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಗಾಂಧಿಚೌಕ್ ಹತ್ತಿರದ ಸರ್ಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿ ಗುರುವಾರ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಗಳು ದೇಶಿಯ ಲಸಿಕೆಗಳಾಗಿರುವುದರಿಂದ ಎಲ್ಲರೂ ಅಭಿಮಾನ ಪಡುವಂತಹ ವಿಷಯವಾಗಿದ್ದು, ಯಾವುದೇ ವದಂತಿಗಳಿಗೆ ಗಮನ ನೀಡದೆ ತಮ್ಮ ಸುರಕ್ಷತೆಗಾಗಿ ಈ ಲಸಿಕೆಗಳನ್ನು ಪಡೆಯುವಂತೆ ಅವರು ಸಲಹೆ ನೀಡಿದರು.

ಈಗಾಗಲೇ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಈ ಲಸಿಕೆಗಳನ್ನು ಪಡೆದಿದ್ದು, ಶಿಕ್ಷಕರಿಗೂ ಸಾಮೂಹಿಕ ಲಸಿಕಾ ಕಾರ್ಯಕ್ರಮ ಆಯೋಜಿಸುವ ಮೂಲಕ ಕರ್ತವ್ಯ ಪ್ರಜ್ಞೆ ನಿಭಾಯಿಸಿದ್ದಾರೆ. ಈ ಶಿಬಿರ ಏರ್ಪಡಿಸಲು ಕಾರಣೀಭೂತರಾದ ಶಾಸಕ ಅರುಣ ಶಹಾಪುರ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಕೊರೊನಾ ರೂಪಾಂತರ ವೈರಸ್ ಆಗಿದ್ದು, ಈ ಮುಂಚೆಗಿಂತಲೂ ಅಧಿಕ ಅಪಾಯಕಾರಿಯಾಗಿದೆ. 20 ವರ್ಷ ಮೇಲ್ಪಟ್ಟ ಯುವಕರಿಗೂ ಈ ವೈರಸ್ ಅಪಾಯ ಒಡ್ಡುತ್ತಿದೆ. ಕಾರಣ ಎಲ್ಲರೂ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ ತಮ್ಮ ರಕ್ಷಣೆಗೆ ಗಮನ ನೀಡಲು ಅವರು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ ಮಾತನಾಡಿ, ಜಿಲ್ಲೆಯ ಪದವಿ ಪೂರ್ವ ಕಾಲೇಜು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಶಿಕ್ಷಕರಿಗೆ ಈ ಲಸಿಕೆ ಹಾಕಿಸಲು ಕ್ರಮಕೈಗೊಳ್ಳಬೇಕು. ಪ್ರತಿ ತಾಲ್ಲೂಕಿನಲ್ಲಿ ಇಂತಹ ಶಿಬಿರ ಆಯೋಜಿಸಿ ಕೋವಿಡ್ ಲಸಿಕೆ ಹಾಕಿಸಬೇಕು ಎಂದರು.

ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಹೊಸೂರ, ಉಪವಿಭಾಗಾಧಿಕಾರಿ ಬಲರಾಮ ಲಮಾಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಕುಮಾರ ಯರಗಲ್, ಸರ್ಜನ್ ಶರಣಪ್ಪ ಕಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಮೇಶ ದಡ್ಡಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೆಡಶ್ಯಾಳ ಉಪಸ್ಥಿತರಿದ್ದರು.
 

****

‘ಮಾನವೀಯ ನೆಲೆಯಲ್ಲಿ ಚಿಕಿತ್ಸೆ ನೀಡಿ’

ವಿಜಯಪುರ: ಕೊರೊನಾ ರೋಗಿಗಳಿಗೆ ಮಾನವೀಯ ನೆಲೆಯಲ್ಲಿ ಚಿಕಿತ್ಸೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರು ವೈದ್ಯರಿಗೆ ಸಲಹೆ ನೀಡಿದರು.

ನಗರದಲ್ಲಿ ಗುರುವಾರ ಸರ್ಕಾರಿ ಹಾಗೂ ಖಾಸಗಿ ವೈದ್ಯರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ ರೋಗಿಗಳಿಗೆ ಆಕ್ಸಿಜನ್, ಬೆಡ್‍ಗಳ ಕೊರತೆಯಾಗದಂತೆ ನಿಗಾವಹಿಸಬೇಕು. ತುರ್ತು ಚಿಕಿತ್ಸೆಗೆ ತಕ್ಷಣ ಸ್ಪಂದಿಸುವಂತೆ ಮನವಿ ಮಾಡಿದರು.

ಮಾಜಿ ಸಚಿವ ಎಸ್.ಕೆ ಬೆಳ್ಳುಬ್ಬಿ, ಆರ್.ಎಸ್. ಪಾಟೀಲ ಕೂಚಬಾಳ, ಚಂದ್ರಶೇಖರ ಕವಟಗಿ, ಪ್ರಕಾಶ ಅಕ್ಕಲಕೋಟ, ಗುಣಾರೆ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು