ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ದಮನ ನೀತಿ ಕೈಬಿಡಲು ಆಗ್ರಹ

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್‌
Last Updated 7 ಮಾರ್ಚ್ 2021, 15:01 IST
ಅಕ್ಷರ ಗಾತ್ರ

ವಿಜಯಪುರ:ದಲಿತ ಹೋರಾಟಗಾರರು, ಚಳವಳಿಗಾರರನ್ನು ಹತ್ತಿಕ್ಕುವ, ಅವರ ವಿರುದ್ಧ ದಬ್ಭಾಳಿಕೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ. ದಲಿತ ಹೋರಾಟಗಾರರ ದಮನ ಮಾಡುವ ನೀತಿಯನ್ನು ತಕ್ಷಣ ಕೈಬಿಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್‌ ಆಗ್ರಹಿಸಿದರು.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರದ ದಲಿತ ಹೋರಾಟಗಾರ ಜಿತೇಂದ್ರ ಕಾಂಬಳೆ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಮಾರ್ಚ್‌ 8ರಂದು ವಿಜಯಪುರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ಎಚ್ಚೆತ್ತುಕೊಳ್ಳದೆ ಹೋದರೆ ಬೆಂಗಳೂರಿನಲ್ಲಿ ಬೃಹತ್‌ ಹೋರಾಟ ಸಂಘಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದಲಿತರ ಮೇಲಿನ ದೌರ್ಜನ್ಯ ಹೆಚ್ಚಳವಾಗಿವೆ. ಕರ್ನಾಟಕ, ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಹಿಂದುತ್ವದ ರಾಜಕಾರಣ ಮಾಡುತ್ತಿರುವ ಬಿಜೆಪಿ, ದಲಿತರ ಮೇಲೆನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯುವಲ್ಲಿ ವಿಫಲವಾಗಿವೆ ಎಂದು ಆಪಾದಿಸಿದರು.

ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ ಗೋಹತ್ಯೆ ತಡೆ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯು ಜನವಿರೋಧಿಯಾಗಿದೆ. ಈ ಕಾಯ್ದೆ ಜಾರಿಯಿಂದ ದಲಿತರು, ಅಲ್ಪಸಂಖ್ಯಾತರು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದರು.

ತಳ ಸಮುದಾಯಗಳ ಅಭಿವೃದ್ಧಿಗಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಎಸ್‌ಸಿಪಿ–ಟಿಎಸ್‌ಪಿ ಯೋಜನೆಯನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೊಳಿಸಬೇಕು ಹಾಗೂ ಎಸ್‌ಸಿ, ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣವನ್ನು ಅನ್ಯ ಯೋಜನೆಗಳಿಗೆ ಬಳಕೆಯಾಗದಂತೆ ತಡೆಯಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಘೋಷಿತ ತುರ್ತು ಪರಿಸ್ಥಿತಿ ಹೇರುವ ಕಾರ್ಯ ಪರೋಕ್ಷವಾಗಿ ನಡೆದಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಬಾಲಬಡುಕವಾಗಿ ಕಾರ್ಯನಿರ್ವಹಿಸುತ್ತಿದೆ. ಅದಾನಿ, ಅಂಬಾನಿಗೆ ದೇಶದ ಸ್ವತ್ತುಗಳನ್ನು ಮಾರಾಟ ಮಾಡಲಾಗುತ್ತಿರುವುದು ಖಂಡನೀಯ ಎಂದರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ನೂರು ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟದಿಂದ ಹತಾಶವಾಗಿರುವ ಕೇಂದ್ರ ಸರ್ಕಾರ, ಹೋರಾಟವನ್ನು ಹತ್ತಿಕ್ಕಲು ಕುತಂತ್ರ ಅನುಸರಿಸುತ್ತಿರುವುದು ಖಂಡನೀಯ ಎಂದರು.

ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟದ ಅಡಿಯಲ್ಲಿ ರಾಜ್ಯದಾದ್ಯಂತ ಕಳೆದ ಮೂರು ತಿಂಗಳಿಂದ ನಿರಂತರ ಹೋರಾಟ, ಪ್ರತಿಭಟನೆಗಳನ್ನು ನಡೆಸಿಕೊಂಡು ಬಂದಿದ್ದೇವೆ. ಮುಂದೆಯೂ ಸಹ ಈ ಮಾರಕ ಕಾನೂನುಗಳ ವಿರುದ್ಧ ಹೋರಾಟ ನಡೆಸಲಾಗುವುದು. ರೈತರ ಹೋರಾಟಕ್ಕೆ ಸಂಘಟನೆಯ ಸಂಪೂರ್ಣ ಬೆಂಬಲ ಇದೆ ಎಂದು ಹೇಳಿದರು.

ಮುಖಂಡರಾದ ಜಿತೇಂದ್ರ ಕಾಂಬಳೆ, ಸಂಜು ಕಂಬಾಗಿ, ಶಂಕರ ಚಲವಾದಿ, ಸೋಮು ರಣದೇವಿ, ಹುಚ್ಚಪ್ಪ ಲೋಕೂರ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

****

ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರಗಳು ದಲಿತರ ಮಾನ, ಪ್ರಾಣ ರಕ್ಷಣೆ ಮಾಡುವಲ್ಲಿ ವಿಫಲವಾಗಿವೆ. ದಲಿತ ಹೋರಾಟಗಾರರ ವಿರುದ್ಧದ ಕೇಸುಗಳನ್ನು ತಕ್ಷಣ ಹಿಂಪಡೆಯಬೇಕು

ಮಾವಳ್ಳಿ ಶಂಕರ್‌, ರಾಜ್ಯ ಪ್ರಧಾನ ಸಂಚಾಲಕ,ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ)

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT